March 16, 2026
IMG-20260201-WA0252.jpg

ಪಿ.ಕೋದಂಡರಾಮಯ್ಯ ಬಜೆಟ್ ಹೇಳಿಕೆ
“ಭದ್ರಾವನ್ನು ಮರೆತ ಬಜೆಟ್”
ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಅಗತ್ಯ ಅನುದಾನ ನೀಡದೇ, ಕೃಷಿ ಕ್ಷೇತ್ರಕ್ಕೂ ಸಮರ್ಪಕ ಆದ್ಯತೆ ನೀಡದಿರುವ ಕೇಂದ್ರ ಬಜೆಟ್‌ ತೀವ್ರ ನಿರಾಸೆ ಮೂಡಿಸಿದೆ ಎಂದು ಚಿತ್ರದುರ್ಗ ಜಿಲ್ಲಾ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಪಿ.ಕೋದಂಡರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
2023ರ ಬಜೆಟ್‌ನಲ್ಲಿ ಕೇಂದ್ರ ಸರ್ಕಾರವೇ ಘೋಷಿಸಿದ್ದ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ಬಿಡುಗಡೆ ಮಾಡುವ ಕುರಿತು ಈ ಬಜೆಟ್‌ನಲ್ಲಿ ಯಾವುದೇ ಪ್ರಸ್ತಾಪವೇ ಇಲ್ಲದಿರುವುದು ಅತ್ಯಂತ ಬೇಸರದ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸಿ, ಕೊಟ್ಟ ಮಾತನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಿತ್ತು. ಆದರೆ ರಾಜಕೀಯ ಕಾರಣಗಳಿಗಾಗಿ ಕರ್ನಾಟಕದ ಜನರ ಹಿತಾಸಕ್ತಿಯನ್ನು ನಿರ್ಲಕ್ಷ್ಯ ಮಾಡಿರುವುದು ಸರಿಯಲ್ಲ ಎಂದು ಟೀಕಿಸಿದ್ದಾರೆ.
ಚುನಾವಣೆ ನಡೆಯುತ್ತಿರುವ ಐದು ರಾಜ್ಯಗಳಿಗೆ ಹೆಚ್ಚು ಮನ್ನಣೆ ನೀಡಲಾಗಿದೆ. ಆದರೆ ಕರ್ನಾಟಕದಲ್ಲಿ ಸದ್ಯಕ್ಕೆ ಎಂಎಲ್‌ಎ ಅಥವಾ ಸಂಸತ್ ಚುನಾವಣೆ ಇಲ್ಲ ಎಂಬ ಕಾರಣಕ್ಕೆ ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಬಿಡುಗಡೆ ಮಾಡುವ ವಿಚಾರವನ್ನು ಮುಂದಿನ ಚುನಾವಣೆವರೆಗೂ ಜೀವಂತ ಇಟ್ಟುಕೊಳ್ಳುವ ತಂತ್ರ ನಡೆಯುತ್ತಿರುವಂತಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಗೆ ತಕ್ಷಣ ಅನುದಾನ ಬಿಡುಗಡೆ ಮಾಡುವಂತೆ ರಾಜ್ಯದ ಎಲ್ಲ ಪಕ್ಷಗಳ ಸಂಸದರು ಪ್ರಧಾನಿ ಬಳಿ ನಿಯೋಗ ತೆರಳಿ ಒತ್ತಡ ತರಬೇಕು. ಈ ಸಂಬಂಧ ನೀರಾವರಿ ಹೋರಾಟ ಸಮಿತಿಯೂ ತನ್ನ ಜವಾಬ್ದಾರಿಯನ್ನು ನಿರ್ವಹಿಸಲಿದೆ. ಅಗತ್ಯವಿದ್ದರೆ ಹೋರಾಟಕ್ಕೂ ಹಿಂಜರಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಯೋಗ, ಆಯುರ್ವೇದ ಸೇರಿದಂತೆ ಕೆಲವು ಕ್ಷೇತ್ರಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿರುವ ಕೇಂದ್ರ ಸರ್ಕಾರ, ಇದೇ ರೀತಿಯಲ್ಲಿ ಕೃಷಿ ಮತ್ತು ಕೈಗಾರಿಕಾ ಕ್ಷೇತ್ರಗಳಿಗೂ ಆದ್ಯತೆ ನೀಡಬೇಕಿತ್ತು. ಕರ್ನಾಟಕದಲ್ಲಿ ನನೆಗುದಿಗೆ ಬಿದ್ದಿರುವ ಅನೇಕ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವ ಕಾರಣಕ್ಕೆ ಇಂತಹ ತಾರತಮ್ಯಪೂರ್ಣ ನಿರ್ಧಾರ ಕೈಗೊಂಡಿರುವುದು ತಪ್ಪು. ಇದು ಮುಗ್ಧ ಸಾರ್ವಜನಿಕರನ್ನು ಸಂಕಷ್ಟಕ್ಕೆ ಸಿಲುಕಿಸುವಂತಹ ನಡೆ ಆಗಿದೆ. ಬಜೆಟ್ ಘೋಷಣೆಯ ನಂತರ ಮಾರುಕಟ್ಟೆಯಲ್ಲಿ ಷೇರುಗಳ ಮೌಲ್ಯ ದಿಢೀರ್ ಕುಸಿದಿರುವುದೇ ಈ ಬಜೆಟ್ ಜನಪರವಾಗಿಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಪಿ.ಕೋದಂಡರಾಮಯ್ಯ ತಿಳಿಸಿದ್ದಾರೆ

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading