September 15, 2025
1740836465469.jpg



ಚಿತ್ರದುರ್ಗ ಮಾ.01:
ಬೇಸಿಗೆ ಕಾಲದಲ್ಲಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ, ಪಟ್ಟಣಗಳಲ್ಲಿನ ಜನರಿಗೆ ಕುಡಿಯುವ ನೀರಿನ ಯಾವುದೇ ತೊಂದರೆಯಾಗದಂತೆ, ಈಗಿನಿಂದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ 83 ಗ್ರಾಮ ಪಂಚಾಯತಿ ವ್ಯಾಪ್ತಿಯ ಸುಮಾರು 236 ಗ್ರಾಮಗಳನ್ನು ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಲಾಗಿದ್ದು, ಈ ಗ್ರಾಮಗಳ ವ್ಯಾಪ್ತಿಯಲ್ಲಿ ಸರ್ಕಾರದ ನಿರ್ದೇಶನದಂತೆ ಖಾಸಗಿ ಬೋರ್‍ವೆಲ್ ಹಾಗೂ ಪರ್ಯಾಯ ನೀರಿನ ಮೂಲಗಳ ಬಗ್ಗೆ ಗುರುತಿಸಿ, ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಯೋಜಿಸಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 1056 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಈ ಪೈಕಿ 165 ಘಟಕಗಳು ಕೆಟ್ಟಿದ್ದು, ಇವುಗಳನ್ನು ದುರಸ್ತಿಗೊಳಿಸಬೇಕಿದೆ ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಬಸವನಗೌಡ ಪಾಟೀಲ್ ಅವರು ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ವೀರೇಂದ್ರ ಪಪ್ಪಿ ಅವರು ಕೇವಲ 165 ಆರ್.ಒ ಘಟಕಗಳು ಮಾತ್ರ ಕೆಟ್ಟಿರುವುದು ಎಂಬುದಾಗಿ ತಿಳಿಸುತ್ತಿದ್ದು, ವಾಸ್ತವದಲ್ಲಿ ಇನ್ನೂ ಹೆಚ್ಚಿನ ಘಟಕಗಳು ಕೆಟ್ಟಿವೆ ಎಂದರು. ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ ಮಾತನಾಡಿ, ಗ್ರಾಮೀಣ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಹಳ್ಳಿಗಳಿಗೆ ಭೇಟಿ ನೀಡುತ್ತಿಲ್ಲ, ಶಾಸಕರುಗಳಿಗೆ ಯಾವುದೇ ಮಾಹಿತಿ ಕೊಡುತ್ತಿಲ್ಲ, ಹೀಗಾದರೆ ಮುಂಬರುವ ಸಮಸ್ಯೆಗಳನ್ನು ನಾವು ಯಾವ ರೀತಿ ಎದುರಿಸಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾ ಉಸ್ತುವಾರಿ ಸಚಿವರು, ಅಧಿಕಾರಿಗಳು ಕ್ಷೇತ್ರ ಮಟ್ಟದಲ್ಲಿ ಹಳ್ಳಿಗಳಿಗೆ ಖುದ್ದು ತೆರಳಿ, ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಅರಿಯುವ ಹಾಗೂ ಆಯಾ ಕ್ಷೇತ್ರ ಶಾಸಕರುಗಳೊಂದಿಗೆ ಚರ್ಚಿಸಿ ವಾಸ್ತವತೆ ತಿಳಿದುಕೊಳ್ಳುವ ಕಾರ್ಯ ಮಾಡಬೇಕು ಎಂದರು. ಶಾಸಕ ರಘುಮೂರ್ತಿ ಅವರು, ಆರ್.ಒ. ಘಟಕಗಳನ್ನು ಅನುಷ್ಠಾನಗೊಳಿಸಿದ ಬಳಿಕ, ಅವುಗಳನ್ನು ಸಂಬಂಧಿಸಿದ ಗ್ರಾ.ಪಂ. ಗಳಿಗೆ ಹಸ್ತಾಂತರ ಮಾಡಬೇಕು, ಆದರೆ ಅಧಿಕಾರಿಗಳು ಈ ಕೆಲಸ ಮಾಡುತ್ತಿಲ್ಲ ಎಂದು ದೂರಿದರು. ಸಚಿವರು ಮಾತನಾಡಿ, ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಜಿಲ್ಲೆಯ ಯಾವುದೇ ಗ್ರಾಮ, ನಗರ, ಪಟ್ಟಣಗಳಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆಯಾದರೆ, ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು. ಹೀಗಾಗಿ ಈಗಿನಂದಲೇ ಪರಿಹಾರ ಕಾರ್ಯಗಳನ್ನು ಯೋಜಿಸಿ, ಕ್ರಿಯಾ ಯೋಜನೆ ಸಿದ್ಧಪಡಿಸಿಕೊಳ್ಳಬೇಕು, ಜೆಜೆಎಂ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.
ಗ್ಯಾರಂಟಿ ಯೋಜನೆಗಳ ಪರಿಶೀಲನೆ :
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಸೂರಜ್ ಹೆಗಡೆ ಅವರು, ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ, ಅನ್ನಭಾಗ್ಯ ಯೋಜನೆಯಡಿ 05 ಕೆ.ಜಿ. ಅಕ್ಕಿ ಹಾಗೂ 05 ಕೆ.ಜಿ. ಅಕ್ಕಿ ಬದಲಿಗೆ ಹಣ ಕೋಡಲಾಗುತ್ತಿತ್ತು. ಇದೀಗ 10 ಕೆ.ಜಿ. ಅಕ್ಕಿ ಕೊಡಲು ನಿರ್ಧರಿಸಿದ್ದು, ಇದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ವಯೋವೃದ್ಧರಿಗೆ ಬಯೋಮೆಟ್ರಿಕ್ ನೀಡುವುದು ಸಮಸ್ಯೆ ಇರುವುದರಿಂದ, ಈ ಕಾರಣಕ್ಕಾಗಿ ಅವರಿಗೆ ಪಡಿತರ ಆಹಾರ ವಿತರಣೆ ಪೂರೈಕೆಯಲ್ಲಿ ವ್ಯತ್ಯಯವಾಗಬಾರದು. ಪಿಯುಸಿ, ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಉಚಿತವಾಗಿ ಪ್ರಯಾಣಿಸಲು ಕೆಎಸ್‍ಆರ್‍ಟಿಸಿ ಯವರು ಅವಕಾಶ ಮಾಡಿಕೊಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತನಿಖೆಗೆ ಸಮಿತಿ ರಚನೆ:
ಕೋವಿಡ್-19 ಸಾಂಕ್ರಾಮಿಕ ರೋಗ ಉಲ್ಬಣಗೊಂದಿದ್ದ ಸಮಯದಲ್ಲಿ ಜಿಲ್ಲೆಯಲ್ಲಿ ಸಿಎಸ್‍ಆರ್ ನಿಧಿಯಲ್ಲಿ ಸುಮಾರು 47 ಕೋಟಿ ರೂ., ಡಿಎಂಎಫ್ ನಿಧಿಯಲ್ಲಿ 14.85 ಕೋಟಿ ರೂ. ಹಾಗೂ ಸರ್ಕಾರದ ಅನುದಾನದಲ್ಲಿ ಖರೀದಿಸಲಾದ ಔಷಧಿ, ವೈದ್ಯಕೀಯ ಉಪಕರಣಗಳು ಇತ್ಯಾದಿಗಳ ಖರೀದಿ ಹಾಗೂ ಬಳಕೆ ಕುರಿತಂತೆ ಲೆಕ್ಕ ಪತ್ರಗಳ ಪರಿಶೀಲನೆ ಮತ್ತು ವರದಿಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿ ತನಿಖೆ ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸೂಚನೆ ನೀಡಿದರು.
ವೈದ್ಯಕೀಯ ಕಾಲೇಜು ನಿರ್ದೇಶಕರ ಕಾರ್ಯವೈಖರಿಗೆ ಅಸಮಾಧಾನ:
**ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರ ನೇಮಕಾತಿಗೆ ಸಂಬಂಧಿಸಿದಂತೆ ನಿರ್ದೇಶಕರ ಕಾರ್ಯವೈಖರಿ ಕುರಿತು ಸಚಿವರು, ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಚಿತ್ರದುರ್ಗ ವೈದ್ಯಕೀಯ ಕಾಲೇಜು ವೈದ್ಯರ ನೇಮಕಾತಿ ಸಂದರ್ಶನ ಚಿತ್ರದುರ್ಗದ ಬದಲಾಗಿ ಬೆಂಗಳೂರಿನಲ್ಲಿ ಯಾಕೆ ನಡೆಸಿದಿರಿ, ತಜ್ಞ ವೈದ್ಯರಿಗೆ ಗೌರವಧನ ನೀಡಿ, ಚಿತ್ರದುರ್ಗದಲ್ಲಿಯೇ ಸಂದರ್ಶನ ಏರ್ಪಡಿಸಬಹುದಿತ್ತು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ವೈದ್ಯಕೀಯ ಕಾಲೇಜು ನಿರ್ದೇಶಕರನ್ನು ಪ್ರಶ್ನಿಸಿದ ಅವರು, ಚಿತ್ರದುರ್ಗ ವೈದ್ಯಕೀಯ ಕಾಲೇಜಿಗೆ ಸಂಬಂಧಿಸಿದಂತೆ ವಾರಕ್ಕೊಮ್ಮೆ ಜಿಲ್ಲಾಧಿಕಾರಿ ಹಾಗೂ ತಿಂಗಳಿಗೊಮ್ಮೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನೆ ನಡೆಸುವುದು ಸೂಕ್ತ ಎಂದರು. ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ, ಎಲ್ಲರ ಪ್ರಯತ್ನದ ಫಲವಾಗಿ ಜಿಲ್ಲೆಯ ವೈದ್ಯಕೀಯ ಕಾಲೇಜು ಮಂಜೂರಾಗಿದೆ. ಚಿತ್ರದುರ್ಗ ವೈದ್ಯಕೀಯ ಕಾಲೇಜಿಗೆ ಕಟ್ಟಡಗಳು, ವಿದ್ಯಾರ್ಥಿ ನಿಲಯ, ಬೋಧಕ, ಬೋಧಕೇತರ ಸಿಬ್ಬಂದಿ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಆದಾಗ್ಯ ವೈದ್ಯರ ನೇಮಕಾತಿ ಸಂದರ್ಶನ ಬೆಂಗಳೂರಿನಲ್ಲಿ ಮಾಡುವ ಅನಿವಾರ್ಯತೆ ಏನಿತ್ತು. ನಿಮ್ಮದೇ ತೀರ್ಮಾನ ಮಾಡುತ್ತಿರಾ ಎಂದು ಪ್ರಶ್ನಿಸಿದರು. ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ ಅವರು, ವೈದ್ಯಕೀಯ ಕಾಲೇಜಿಗೆ ವೈದ್ಯರ ನೇಮಕಾತಿಯಲ್ಲಿ ಬಹಳಷ್ಟು ದೂರುಗಳು ಕೇಳಿಬರುತ್ತಿವೆ. ಈ ಬಗ್ಗೆ ನೊಂದವರೇ ನಮ್ಮ ಗಮನಕ್ಕೆ ತಂದಿದ್ದಾರೆ ಎಂದರು.
ಜಿಲ್ಲೆಯಾದ್ಯಂತ ರಸ್ತೆ ಗುಂಡಿ ಮುಚ್ಚಿಸಿ:
*** ಮಳೆಗಾಲ ಬರುವುದರೊಳಗಾಗಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಜಿಲ್ಲೆಯ ಎಲ್ಲ ರಸ್ತೆ ಗುಂಡಿಗಳನ್ನು ಮುಚ್ಚಿಸಲು ಅಗತ್ಯ ಕ್ರಮವಹಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಒಂದು ತಿಂಗಳೊಳಗೆ ಜಿಲ್ಲೆಯ ಎಲ್ಲ ರಸ್ತೆ ಗುಂಡಿ ಮುಚ್ಚಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಸಭೆಗೆ ಮಾಹಿತಿ ನೀಡಿದರು.
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾತನಾಡಿ, ಚಿತ್ರದುರ್ಗ ನಗರದಲ್ಲಿ ಈಗಾಗಲೇ ಮೊದಲ ಹಂತದಲ್ಲಿ ಡಿವೈಡರ್ ತೆರವು ಕಾರ್ಯ ನಡೆದಿದ್ದು, ಎರಡು ಮತ್ತು ಮೂರನೇ ಹಂತದ ಡಿವೈಡರ್ ತೆರವು ಕಾರ್ಯ ಶೀಘ್ರ ಕೈಗೊಳ್ಳುವಂತೆ ಸೂಚನೆ ನೀಡಿದ ಅವರು, ಚಿತ್ರದುರ್ಗ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ರಸ್ತೆ ಅಗಲೀಕರಣ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಅಗಲೀಕರಣ ಕಾರ್ಯ ತ್ವರಿತವಾಗಿ ಪ್ರಾರಂಭಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಶಾಲಾ ಕಾಲೇಜುಗಳಲ್ಲಿ ಗಾಂಜಾ ಪೂರೈಕೆ ಕಳವಳಕಾರಿ :
ಹೊಳಲ್ಕೆರೆ ಶಾಸಕ ಡಾ. ಎಂ. ಚಂದ್ರಪ್ಪ ಅವರು ಮಾತನಾಡಿ, ಜಿಲ್ಲೆಯಲ್ಲಿ ಶಾಲಾ ಕಾಲೇಜು ಮಕ್ಕಳ ಕೈಗಳಿಗೆ ಗಾಂಜಾ ಅಥವಾ ಮಾದಕ ವಸ್ತುಗಳ ಪೂರೈಕೆ ಆಗುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿಬರುತ್ತಿವೆ. ಸಣ್ಣ ಸಣ್ಣ ಮಕ್ಕಳು ಇಂತಹ ದುಶ್ಚಟಗಳಿಗೆ ಬಲಿಯಾದರೆ ಭವಿಷ್ಯದ ಸಮಾಜದ ಗತಿ ಏನು. ಅಬಕಾರ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳು ಜಂಟಿಯಾಗಿ ಸಮನ್ವಯ ಮಾಡಿಕೊಂಡು, ಇದಕ್ಕೆ ಕಡಿವಾಣ ಹಾಕಬೇಕು ಎಂದರು. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯಲ್ಲಿ ಇಂತಹ ಯಾವುದೇ ಪ್ರಕರಣಗಳು ಕಂಡುಬಂದರೂ, ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲನ್ ಆದಿತ್ಯ ಬಿಸ್ವಾಸ್ ಪ್ರತಿಕ್ರಿಯಿಸಿ, ಶಾಲಾ ಶಿಕ್ಷಕರುಗಳು ಈ ಬಗ್ಗೆ ಸಾಕಷ್ಟು ನಿಗಾ ವಹಿಸಬೇಕು. ಮಕ್ಕಳ ನಡವಳಿಕೆ ಬದಲಾವಣೆ ಬಗ್ಗೆ ಗಮನಿಸುತ್ತಿರಬೇಕು. ಯಾವುದೇ ಅನುಮಾನ ಕಂಡುಬಂದರೂ, ಪ್ರಾಥಮಿಕ ಪರಿಶೀಲನೆ ನಡೆಸಿ, ಖಚಿತಪಟ್ಟಲ್ಲಿ, ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು ಎಂದರು.
ಸರಗಳ್ಳತನ ತಡೆಗಟ್ಟಿ :
ಜಿಲ್ಲೆಯ ಚಳ್ಳಕೆರೆ, ಹಿರಿಯೂರು, ಹೊಸದುರ್ಗ ತಾಲ್ಲೂಕುಗಳಲ್ಲಿ ಸರಗಳ್ಳತನ, ಮನೆ ಕಳುವು, ದರೋಡೆ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಜನರು ರಾತ್ರಿ ವೇಳೆ ಹೊರಬರಲು ಭಯ ಪಡುವಂತಾಗುತ್ತಿದೆ. ಹೀಗಾಗಿ ಪೊಲೀಸ್ ಇಲಾಖೆಯವರು ಕಳ್ಳರನ್ನು ಹಿಡಿದು ಮಟ್ಟ ಹಾಕುವ ಕೆಲಸ ಮಾಡಬೇಕು, ಜನರಲ್ಲಿ ಇಲಾಖೆ ಬಗ್ಗೆ ವಿಶ್ವಾಸ ಮೂಡಿಸುವ ಕೆಲಸ ಮಾಡಬೇಕು ಎಂದರು. ಇದಕ್ಕೆ ಉತ್ತರಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು, ಕಳ್ಳತನವನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಈಗಾಗಲೆ ವ್ಯಾಪಕ ಕ್ರಮಗಳನ್ನು ಕೈಗೊಂಡಿದೆ. ರಾತ್ರಿ ವೇಳೆ ಗಸ್ತು, ಪೆಟ್ರೂಲಿಂಗ್ ಕಾರ್ಯವನ್ನು ಹೆಚ್ಚು ಚುರುಕುಗೊಳಿಸಿದ್ದು, ರಾತ್ರಿ ವೇಳೆ ಅನುಮಾನಾಸ್ಪದವಾಗಿ ತಿರುಗಾಡುವವರನ್ನು ವಿಚಾರಿಸುವುದು, ಪ್ರಕರಣದ ಬಗ್ಗೆ ತನಿಖೆ ಚುರುಕುಗೊಳಿಸಿ, ಕಳ್ಳರನ್ನು ಪತ್ತೆ ಮಾಡುವ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು.
ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಿಸಿ :
* ಡಿಡಿಪಿಐ ಮಂಜುನಾಥ್ ಅವರು, ಈ ವರ್ಷ ಜಿಲ್ಲೆಯಲ್ಲಿ 24414 ಮಕ್ಕಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲಿದ್ದು, ಸುಮಾರು 5656 ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿರುವುದನ್ನು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು. ವಿಧಾನಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್ ಅವರು ಮಾತನಾಡಿ, ಜಿಲ್ಲೆಯ ಡಯಟ್‍ನಿಂದ ಉತ್ತಮ ಕಾರ್ಯ ಆಗುತ್ತಿದೆ. ಆದರೆ ಡಿಡಿಪಿಐ ಅವರು, ಫಲಿತಾಂಶ ಸುಧಾರಣೆ ನಿಟ್ಟಿನಲ್ಲಿ ತೃಪ್ತಿಕರ ಕಾರ್ಯ ಮಾಡುತ್ತಿಲ್ಲ. ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳನ್ನು ಗುರುತಿಸಿ, ಅವರಿಗೆ ಪಾಸಿಂಗ್ ಪ್ಯಾಕೇಜ್ ಶಿಕ್ಷಣ ನೀಡುವಂತಹ ಕ್ರಮಗಳನ್ನು ಪರಿಣಾಮಕಾರಿಯಾಗಿ ಮಾಡುತ್ತಿಲ್ಲ. ಕಾರ್ಯಗಾರಗಳಿಗೆ ಪ್ರತಿ ವರ್ಷ ಸಂಪನ್ಮೂಲ ವ್ಯಕ್ತಿಗಳನ್ನು ಬದಲಿಸಬೇಕು. ಮುಂದಿನ ಶೈಕ್ಷಣಿಕ ಸಾಲಿಗೆ ಕಾರ್ಯಗಾರಗಳನ್ನು ಏರ್ಪಡಿಸಲು ಈಗಿನಿಂದಲೇ ವೇಳಾಪಟ್ಟಿ ಮಾಡಿಕೊಳ್ಳಬೇಕು, ಪರೀಕ್ಷೆ ಸಂದರ್ಭದಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಬಾರದು ಎಂದರು.
ಸಭೆಯಲ್ಲಿ ಶಾಸಕರುಗಳಾದ ಕೆ.ಸಿ. ವೀರೇಂದ್ರ ಪಪ್ಪಿ, ಟಿ. ರಘುಮೂರ್ತಿ, ಡಾ. ಎಂ. ಚಂದ್ರಪ್ಪ, ಬಿ.ಜಿ. ಗೋವಿಂದಪ್ಪ, ವಿಧಾನಪರಿಷತ್ ಸದಸ್ಯರುಗಳಾದ ಡಿ.ಟಿ. ಶ್ರೀನಿವಾಸ್, ಕೆ.ಎಸ್. ನವೀನ್. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಸೂರಜ್ ಹೆಗಡೆ, ಜಿಲ್ಲಾ ಅಧ್ಯಕ್ಷ ಶಿವಣ್ಣ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್, ಎಸ್‍ಪಿ ರಂಜಿತ್ ಕುಮಾರ್ ಬಂಡಾರು, ಕೆಡಿಪಿ ನಾಮನಿರ್ದೇಶಿತ ಸದಸ್ಯರುಗಳಾದ ಪಿ. ದೀಪಿಕಾ ಸತೀಶ್, ಟಿ.ಕೆ. ಖಲೀಂ ಉಲ್ಲಾ, ಕೆ.ಸಿ. ನಾಗರಾಜ್, ರಂಗಸ್ವಾಮಿ, ತಿಮ್ಮಯ್ಯ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading