January 29, 2026
IMG-20260102-WA0028.jpg

ವರದಿ : ಹರೀಶ್ ನಾಯಕನಹಟ್ಟಿ
ಚಿತ್ರದುರ್ಗ :
ಚಿತ್ರದುರ್ಗ ತಾಲೂಕಿನ ಹಾಯ್ಕಲ್–ಬೊಮ್ಮಕ್ಕನಹಳ್ಳಿ ಪ್ರಮುಖ ರಸ್ತೆಯಲ್ಲಿ ದೊಡ್ಡ-ದೊಡ್ಡ ಗುಂಡಿಗಳು ಉಂಟಾಗಿ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಸಂಪೂರ್ಣ ಹದಗೆಟ್ಟಿದ್ದರೂ ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ರಸ್ತೆ ಚಿತ್ರದುರ್ಗದಿಂದ ದಾವಣಗೆರೆ, ಶಿವಮೊಗ್ಗ, ಹೊಳಲ್ಕೆರೆ ಕಡೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗವಾಗಿದ್ದು, ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಆದರೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಸ್ತೆ ಗುಂಡಿಗಳ ಸಾಮ್ರಾಜ್ಯವಾಗಿ ಮಾರ್ಪಟ್ಟಿದೆ ಎಂದು ವಾಹನ ಸವಾರರು ದೂರಿದ್ದಾರೆ.
ರಸ್ತೆಯ ಮೇಲೆ ಡಾಂಬರ್ ಉದುರಿ ಜಲ್ಲಿಕಲ್ಲುಗಳು ಹೊರಬಿದ್ದಿದ್ದು, ಪ್ರತಿ ಹೆಜ್ಜೆಗೂ ಗುಂಡಿಗಳು ಕಾಣಿಸುತ್ತಿವೆ. ಸ್ವಲ್ಪ ಎಚ್ಚರ ತಪ್ಪಿದರೂ ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಿದ್ದು, ದ್ವಿಚಕ್ರ ವಾಹನ ಸವಾರರು, ವಿದ್ಯಾರ್ಥಿಗಳು, ವೃದ್ಧರು ಹಾಗೂ ವ್ಯಾಪಾರಿಗಳು ಹೆಚ್ಚು ತೊಂದರೆ ಅನುಭವಿಸುತ್ತಿದ್ದಾರೆ. ರಾತ್ರಿ ವೇಳೆಯಲ್ಲಿ ಸಂಚಾರ ಮತ್ತಷ್ಟು ಅಪಾಯಕಾರಿಯಾಗಿದ್ದು, ಪ್ರತಿದಿನ ಅಪಘಾತಗಳು ನಡೆಯುತ್ತಿವೆ.
ಹಳ್ಳಿಗಳಿಂದ ಪಟ್ಟಣಕ್ಕೆ ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಜಿಲ್ಲಾ ಆಸ್ಪತ್ರೆಗೆ ತೆರಳಬೇಕಾದ ಆಂಬುಲೆನ್ಸ್‌ಗಳಿಗೆ ಈ ರಸ್ತೆ ದೊಡ್ಡ ತೊಂದರೆಯಾಗಿದೆ. ಗುಂಡಿಗಳನ್ನು ತಪ್ಪಿಸಲು ಹೋಗಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಬೆಳಗಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಹಾಯ್ಕಲ್ ಗ್ರಾಮದ ನಿವಾಸಿ ಮಂಜುಶ್ರೀಪಾಲಯ್ಯ, ಹದಗೆಟ್ಟಿರುವ ರಸ್ತೆಯನ್ನು ತಕ್ಷಣ ದುರಸ್ತಿ ಮಾಡಿ ಡಾಂಬರೀಕರಣ ಮಾಡಬೇಕು. ರಸ್ತೆಯ ಧೂಳು ಹಾಗೂ ಜಲ್ಲಿಕಲ್ಲುಗಳಿಂದ ಸಾರ್ವಜನಿಕರಿಗೆ ಅಸ್ತಮಾ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ. ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ದೊಡ್ಡ ಅನಾಹುತ ಸಂಭವಿಸುವ ಮುನ್ನವೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ರಸ್ತೆ ದುರಸ್ತಿ ಕಾರ್ಯಕ್ಕೆ ಮುಂದಾಗಬೇಕು ಎಂದು ಸಾರ್ವಜನಿಕರು, ವಾಹನ ಸವಾರರು, ವಿದ್ಯಾರ್ಥಿಗಳು ಹಾಗೂ ರೈತರು ಆಗ್ರಹಿಸಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading