ಚಿತ್ರದುರ್ಗ: ವಸತಿ ನಿಲಯ–ವಸತಿ ಶಾಲೆಗಳ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನಾ ಸಭೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆಕಾಶ್ ಎಸ್. ಅವರ ಅಧ್ಯಕ್ಷತೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯಗಳ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಸಿಇಒ ಡಾ. ಆಕಾಶ್ ಎಸ್. ಅವರು ವಸತಿ ನಿಲಯಗಳಿಗೆ ಭೇಟಿ ನೀಡಿದ ವೇಳೆ, ಅಲ್ಲಿನ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳಲ್ಲಿ ಲಭ್ಯವಾಗಬೇಕಾದ ಮೂಲಭೂತ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ ಎಂಬ ಅಸಮಾಧಾನ ವ್ಯಕ್ತವಾಗಿರುವುದನ್ನು ಅಧಿಕಾರಿಗಳ ಗಮನಕ್ಕೆ ತಂದರು.
ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಮೊದಲು ಮೂಲ ಸೌಕರ್ಯಗಳನ್ನು ಒದಗಿಸುವುದು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಜವಾಬ್ದಾರಿಯಾಗಿದ್ದು, ಶುದ್ಧ ಕುಡಿಯುವ ನೀರು, ಶೌಚಾಲಯಗಳ ಸ್ವಚ್ಛತೆ, ಹಾಸ್ಟೆಲ್ ಸುತ್ತಮುತ್ತಲಿನ ಸ್ವಚ್ಛತೆ, ವಿದ್ಯಾರ್ಥಿಗಳ ಕೊಠಡಿಗಳ ಸ್ವಚ್ಛತೆ, ಅಡುಗೆ ಮನೆಯ ಸ್ವಚ್ಛತೆ ಹಾಗೂ ರುಚಿ–ಶುಚಿಯಾದ ಆಹಾರ ಒದಗಿಸುವ ವಿಷಯದಲ್ಲಿ ಕಟ್ಟುನಿಟ್ಟಾದ ಮೇಲ್ವಿಚಾರಣೆ ನಡೆಸಬೇಕೆಂದು ಸೂಚಿಸಿದರು.




ಈ ಕರ್ತವ್ಯಗಳಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಇಒ ಎಚ್ಚರಿಕೆ ನೀಡಿದರು.
ಅದೇ ರೀತಿ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲೇ ಉತ್ತಮ ಬೋಧನಾ ವ್ಯವಸ್ಥೆ ಕಲ್ಪಿಸಬೇಕು. ಸೊಳ್ಳೆಗಳು ಹಾಸ್ಟೆಲ್ ಕೊಠಡಿಗಳಿಗೆ ಪ್ರವೇಶಿಸದಂತೆ ಮೆಸ್ಸುಗಳನ್ನು ಅಳವಡಿಸುವುದು ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಮತ್ತು ಆರೋಗ್ಯಕರ ವಾತಾವರಣ ನಿರ್ಮಿಸಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ. ಎಸ್. ರಂಗಸ್ವಾಮಿ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀ ಮಲ್ಲಿಕಾರ್ಜುನ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಪುಷ್ಪಲತಾ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ ಸೇರಿದಂತೆ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದರು.
ಜಿಲ್ಲೆಯ ಎಲ್ಲಾ ವಸತಿ ನಿಲಯಗಳ ಮೇಲ್ವಿಚಾರಕರು ಹಾಗೂ ಸಿಬ್ಬಂದಿಗಳು ಸಭೆಗೆ ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.