March 23, 2026
FB_IMG_1770121571812.jpg

ಚಿತ್ರದುರ್ಗ ಫೆ.3:
ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ಆಡಳಿತಾತ್ಮಕ ಅನುಮೋದನೆ ಪಡೆದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವ ಎಲ್ಲ ಕಾಮಗಾರಿಗಳಿಗೆ ಆಯಾ ಸ್ಥಳೀಯ ಶಾಸಕರಿಂದ ಭೂಮಿ ಪೂಜೆ ನೆರವೇರಿಸಿ, ಫೆಬ್ರವರಿ ಅಂತ್ಯದೊಳಗೆ ಕೆಲಸ ಆರಂಭಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.
ಈ ಕುರಿತು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖಾವಾರು ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ಯೋಜನೆಯಡಿ ಜಿಲ್ಲೆಗೆ ರೂ.275 ಕೋಟಿ ಅನುದಾನ ಬಿಡುಗಡೆ ಮಾಡಿ ನಾಲ್ಕು ತಿಂಗಳು ಸಂದಿವೆ. ಮೊಳಕಾಲ್ಮೂರು, ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು ಹಾಗೂ ಹೊಸದುರ್ಗ ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ತಲಾ ರೂ.50 ಕೋಟಿ ಹಾಗೂ ಹೊಳಲ್ಕೆರೆ ಮತಕ್ಷೇತ್ರಕ್ಕೆ ರೂ.25 ಕೋಟಿ ನೀಡಲಾಗಿದೆ. ಒಟ್ಟು 304 ಕಾಮಗಾರಿಗಳನ್ನು ಕೈಗೊಳ್ಳುವಂತೆ ಶಾಸಕರುಗಳು ಪ್ರಸ್ತಾಪಿಸಿದ್ದಾರೆ. ಇದರಲ್ಲಿ ರೂ.210 ಕೋಟಿ ವೆಚ್ಚದ 178 ಕಾಮಗಾರಿಗೆ ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ. ರೂ.65 ಕೋಟಿ ವೆಚ್ಚದ 126 ಕಾಮಗಾರಿಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೇ ಆಡಳಿತಾತ್ಮಕ ಮಂಜೂರಾತಿ ಪಡೆದು ಲೋಕೋಪಯೋಗಿ ಇಲಾಖೆ, ಕೆ.ಆರ್.ಐ.ಡಿ.ಎಲ್., ನಗರ ಸ್ಥಳೀಯ ಸಂಸ್ಥೆ ಹಾಗೂ ಪುರಸಭೆಗಳು, ನಿರ್ಮಿತಿ ಕೇಂದ್ರ, ಪಂಚಾಯತ್ ರಾಜ್ ಮತ್ತು ಇಂಜಿನಿಯರಿಂಗ್ ವಿಭಾಗ ವತಿಯಿಂದ ಕೈಗೊಳ್ಳುತ್ತಿರುವ ಕಾಮಗಾರಿಗಳ ವೇಗ ಹೆಚ್ಚಿಸಬೇಕು. ಭೌತಿಕ ಪ್ರಗತಿಯ ಜೊತೆಗೆ ಆರ್ಥಿಕ ಪ್ರಗತಿಯನ್ನು ಸಹ ಸಾಧಿಸಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಅನುದಾನದ ಬಳಕೆ ಹಾಗೂ ಕಾಮಗಾರಿ ಯೋಜನೆ ತಯಾರಿಸುವಾಗ ಅಧಿಕಾರಿಗಳು ಎಚ್ಚರದಿಂದ ಇರಬೇಕು. ಜಿಲ್ಲೆಯಲ್ಲಿ ಡಿ.ಎಂ.ಎಫ್, ಕೆ.ಎಂ.ಇ.ಆರ್.ಸಿ, ಎನ್.ಡಿ.ಆರ್.ಎಫ್, ಎಸ್.ಡಿ.ಆರ್.ಎಫ್ ಯೋಜನೆಗಳು, ಸ್ಥಳೀಯ ಶಾಸಕರು, ಸಂಸದರ ಪ್ರದೇಶಾಭಿವೃದ್ಧಿ ನಿಧಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ಇತರೆ ಯೋಜನೆಗಳ ಅನುದಾನದಡಿ ಸಾಕಷ್ಟು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಕಾಮಗಾರಿಗಳನ್ನು ಹೊರತುಪಡಿಸಿ ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಯೋಜನಯಡಿ ಇತರೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು. ಈ ಕುರಿತು ಆಯಾ ಶಾಸಕರೊಂದಿಗೆ ಚರ್ಚಿಸಿಬೇಕು. ಒಂದು ವೇಳೆ ಎರಡೆರಡು ಅನುದಾನಗಳಲ್ಲಿ ಒಂದೇ ಕಾಮಗಾರಿಗಳನ್ನು ಕೈಗೆತ್ತಿಕೊಂಡಿರುವುದು ಕಂಡುಬಂದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಗಾಯಿತ್ರಿ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ನಾಗರಾಜ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಹನುಮಂತಪ್ಪ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

=======

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading