ಚಳ್ಳಕೆರೆ, ಜು. 3: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಪಠ್ಯ ಶಿಕ್ಷಣಕ್ಕೆ ಸೀಮಿತರಾಗದೆ ಉತ್ತಮ ವ್ಯಕ್ತಿತ್ವ, ಶಿಸ್ತು, ನಾಯಕತ್ವ, ಸಾಮಾಜಿಕ ಕಳಕಳಿ ಹಾಗೂ ರಾಷ್ಟ್ರಸೇವೆಯ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಈ ಎಲ್ಲ ಮೌಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ರೂಪಿಸುವ ಅತ್ಯುತ್ತಮ ವೇದಿಕೆಯೇ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಚಳವಳಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಹೇಳಿದರು.
ನಗರದ ಶಿಕ್ಷಣ ಇಲಾಖೆಯ ಬಿಆರ್‌ಸಿ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಸ್ಥಳೀಯ ಸಂಸ್ಥೆಯ ಸಿಆರ್‌ಪಿ, ಇಸಿಒ ಹಾಗೂ ಬಿಆರ್‌ಸಿ ಸಿಬ್ಬಂದಿಗೆ ಆಯೋಜಿಸಿದ್ದ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಸಮಯಪಾಲನೆ, ಶಿಸ್ತು, ತಂಡದೊಂದಿಗೆ ಕಾರ್ಯನಿರ್ವಹಿಸುವ ಸಾಮರ್ಥ್ಯ ಹಾಗೂ ಸಂಕಷ್ಟದ ಸಂದರ್ಭಗಳಲ್ಲಿ ಧೈರ್ಯದಿಂದ ಕಾರ್ಯನಿರ್ವಹಿಸುವ ಗುಣಗಳನ್ನು ಬೆಳೆಸುತ್ತವೆ. ಆದ್ದರಿಂದ ಪ್ರತಿಯೊಂದು ಸರ್ಕಾರಿ ಹಾಗೂ ಅನುದಾನಿತ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳನ್ನು ಪರಿಣಾಮಕಾರಿಯಾಗಿ ನಡೆಸಲು ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ವಿಶೇಷ ಗಮನಹರಿಸಬೇಕು ಎಂದು ಹೇಳಿದರು.
ಶಾಲೆಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳನ್ನು ಕೇವಲ ಔಪಚಾರಿಕ ಕಾರ್ಯಕ್ರಮಗಳಾಗಿ ಪರಿಗಣಿಸದೆ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ಭಾಗವಾಗಿ ರೂಪಿಸಬೇಕು. ಪರಿಸರ ಸಂರಕ್ಷಣೆ, ಸ್ವಚ್ಛತೆ, ಸಮಾಜಸೇವೆ, ವಿಪತ್ತು ನಿರ್ವಹಣೆ ಹಾಗೂ ಆರೋಗ್ಯ ಜಾಗೃತಿ ಸೇರಿದಂತೆ ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ಸಕ್ರಿಯವಾಗಿ ತೊಡಗಿಸುವ ಮೂಲಕ ಉತ್ತಮ ನಾಗರಿಕರನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಣ ಇಲಾಖೆಯ ಮೇಲಿದೆ ಎಂದು ತಿಳಿಸಿದರು.
ಶಿಕ್ಷಣ ಇಲಾಖೆಯ ಸಿಆರ್‌ಪಿ, ಇಸಿಒ ಹಾಗೂ ಬಿಆರ್‌ಸಿ ಸಿಬ್ಬಂದಿ ಶಾಲೆಗಳಿಗೆ ಭೇಟಿ ನೀಡುವ ವೇಳೆ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿ ಅಗತ್ಯ ಮಾರ್ಗದರ್ಶನ ನೀಡಬೇಕು. ಪ್ರತಿಯೊಬ್ಬ ಶಿಕ್ಷಕರೂ ವಿದ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಈ ಚಳವಳಿಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಿದಾಗ ಮಾತ್ರ ಸಂಘಟನೆಯ ಉದ್ದೇಶ ಸಾರ್ಥಕವಾಗುತ್ತದೆ ಎಂದು ಕರೆ ನೀಡಿದರು.
ಸ್ಥಳೀಯ ಸಂಸ್ಥೆಯ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತ ದೇವರಾಜ್ ಮಾತನಾಡಿ, ಸಂಘಟನೆಯ ಉದ್ದೇಶ, ಶಾಲೆಗಳಲ್ಲಿ ಘಟಕಗಳ ರಚನೆ, ದಾಖಲಾತಿ, ತರಬೇತಿ ಹಾಗೂ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ಶಿಬಿರಗಳಲ್ಲಿ ಭಾಗವಹಿಸುವ ಅವಕಾಶಗಳ ಕುರಿತು ಮಾಹಿತಿ ನೀಡಿದರು. ಶಾಲಾ ಹಂತದಲ್ಲಿಯೇ ಮಕ್ಕಳಲ್ಲಿ ಸೇವಾ ಮನೋಭಾವ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ಪ್ರತಿಯೊಂದು ಶಾಲೆಯೂ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಕಾರ್ಯಾಗಾರದಲ್ಲಿ ಸಿಆರ್‌ಪಿ, ಇಸಿಒ ಹಾಗೂ ಬಿಆರ್‌ಸಿ ಸಿಬ್ಬಂದಿಗೆ ಸ್ಕೌಟ್ಸ್ ಮತ್ತು ಗೈಡ್ಸ್‌ನ ವಿವಿಧ ಕಾರ್ಯಕ್ರಮಗಳು, ತರಬೇತಿ ವಿಧಾನಗಳು, ದಾಖಲಾತಿ ಪ್ರಕ್ರಿಯೆ ಹಾಗೂ ಶಾಲಾ ಮಟ್ಟದಲ್ಲಿ ಅನುಷ್ಠಾನಗೊಳಿಸಬೇಕಾದ ಚಟುವಟಿಕೆಗಳ ಕುರಿತು ಸಮಗ್ರ ಮಾಹಿತಿ ನೀಡಲಾಯಿತು.
ಈ ಸಂದರ್ಭದಲ್ಲಿ ತಿಪ್ಪೇಸ್ವಾಮಿ, ಬಿಆರ್‌ಸಿ ಮಂಜುಬಾಬು, ಸುನಿಲ್ ನಾಯಕ್, ಸಿಆರ್‌ಪಿ ಎನ್. ಮಲ್ಲೇಶ್, ವಿವಿಧ ಇಸಿಒಗಳು, ಸಿಆರ್‌ಪಿಗಳು, ಬಿಆರ್‌ಪಿ ಸಿಬ್ಬಂದಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.