September 15, 2025
FB_IMG_1730812439934.jpg


ಚಿತ್ರದುರ್ಗ ನ.05:
ಬಾಲ್ಯ ವಿವಾಹ ಪ್ರಕರಣಗಳಲ್ಲಿ ನಿಯಮಾನುಸಾರ ಸಂಬಂದಪಟ್ಟವರ ಮೇಲೆ ಎಫ್.ಐ.ಆರ್ ದಾಖಲಿಸದೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಬಾಲ್ಯ ವಿವಾಹ ಸಾಕಷ್ಟು ಪ್ರಮಾಣದಲ್ಲಿ ನಡೆಯುತ್ತಿರುವುದು ಕಳವಳಕಾರಿಯಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಂಕಿ ಅಂಶಗಳ ಪ್ರಕಾರ ಕಳೆದ ಜುಲೈಯಿಂದ ಸೆಪ್ಟೆಂಬರ್ ಅಂತ್ಯದ ವರೆಗೆ ಒಟ್ಟು 18 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿವೆ. ಆದರೆ ಆರೋಗ್ಯ ಇಲಾಖೆಯ ಆರ್.ಸಿ.ಹೆಚ್ ತಂತ್ರಾಂಶದಲ್ಲಿ ಕಳೆದ ಏಪ್ರಿಲ್ ನಿಂದ ಅಕ್ಟೋಬರ್ ಅಂತ್ಯದವರೆಗೆ 194 ಬಾಲ ಗರ್ಭಿಣಿ ಪ್ರಕರಣ ಬೆಳಕಿಗೆ ಬಂದಿವೆ. ಬಾಲ್ಯ ವಿವಾಹ ತಡೆಯುವಲ್ಲಿ ವಿಫಲವಾಗಿರುವ ಕಾರಣದಿಂದಲೇ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಾಗುತ್ತಿವೆ. ದೂರುಗಳನ್ನು ಆಧರಿಸಿ ಬಾಲ್ಯ ವಿವಾಹದ ವಿರುದ್ದ ಕ್ರಮ ಕೈಗೊಳ್ಳುವುದರ ಜೊತೆಗೆ, ಹೆಚ್ಚಿನ ನಿಗಾವಹಿಸಿ ಸ್ವಯಂ ಪ್ರೇರಿತವಾಗಿ ಬಾಲ್ಯ ವಿವಾಹ ಪ್ರಕರಣಗಳನ್ನು ತಡೆಯಲು ಅಧಿಕಾರಿಗಳು ಪ್ರಯತ್ನಿಸಬೇಕು. ಬಾಲ್ಯ ವಿವಾಹಕ್ಕೆ ಯತ್ನಿಸುವವರ ವಿರುದ್ಧ ಎಫ್‍ಐಆರ್ ದಾಖಲಿಸಬೇಕು, ಈ ಪ್ರಕರಣಗಳ ಬಗ್ಗೆ ಹೆಚ್ಚಿನ ಪ್ರಚಾರ ನೀಡುವ ಮೂಲಕ ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ಎನ್ನುವುದನ್ನು ಜನರಿಗೆ ಮನದಟ್ಟು ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಬಾಲ್ಯ ವಿವಾಹ ತಡೆಗಟ್ಟುವಲ್ಲಿ ತಾಲ್ಲೂಕು ಮಟ್ಟದ ಹಾಗೂ ಗ್ರಾಮ ಮಟ್ಟದ ಮಹಿಳಾ ಮತ್ತು ಮಕ್ಕಳ ರಕ್ಷಣೆ ಕಾವಲು ಸಮಿತಿಗಳು ಕಾರ್ಯನಿರ್ವಹಿಸಬೇಕು. ಪ್ರತಿ ತಿಂಗಳು ಶಾಲೆಗಳಲ್ಲಿ 7 ಕ್ಕಿಂತ ಹೆಚ್ಚು ದಿನ ಗೈರಾದ ಮಕ್ಕಳ ವಿವರವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಕ್ಷಣ ಇಲಾಖೆಯಿಂದ ನೀಡಬೇಕು. ಸಂಬಂಧ ಪಟ್ಟ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ನಿರ್ವಹಿಸುವುದರ ಮೂಲಕ ಬಾಲ್ಯ ವಿವಾಹ ತಡೆಗಟ್ಟಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.
ಜಿಲ್ಲೆಯಲ್ಲಿ ಕಳೆದ ಜುಲೈ ನಿಂದ ಸೆಪ್ಟೆಂಬರ್‍ವರೆಗೆ ಒಟ್ಟು 35 ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ದೂರುಗಳು ದಾಖಲಾಗಿದ್ದು. ಇದರಲ್ಲಿ 17 ಪ್ರಕರಣಗಳನ್ನು ತಡೆಯಲಾಗಿದೆ. 18 ಪ್ರಕರಣಗಳಲ್ಲಿ ಬಾಲ್ಯವಿವಾಹ ನಡೆದಿದ್ದು, ಎಫ್.ಐ.ಆರ್. ದಾಖಲಿಸಲಾಗಿದೆ. ಇಲಾಖೆಯಿಂದ ನಿರ್ವಹಿಸುವ ಸಖಿ (ಒನ್ ಸ್ಟಾಪ್ ಸೆಂಟರ್) ಕೇಂದ್ರದಲ್ಲಿ ಸೆಪ್ಟಂಬರ್ ಅಂತ್ಯದವರೆಗೆ 7 ಕೌಟುಂಬಿಕ ಕಲಹ, 4 ಅತ್ಯಾಚಾರ, 22 ಪೊಕ್ಸೋ, 15 ಕಾಣೆ, 14 ಇತರೆ ಸೇರಿ 62 ಪ್ರಕರಣಗಳು ದಾಖಲಾಗಿವೆ. ಸದರಿ ಪ್ರಕರಣಗಳಲ್ಲಿ ಸಂಕಷ್ಟದಲ್ಲಿರುವ ಮಹಿಳೆಯರಿಗೆ ನೆರವು ನೀಡಲಾಗಿದೆ ಎಂದು ಉಪನಿರ್ದೇಶಕಿ ಭಾರತಿ ಬಣಕಾರ್ ತಿಳಿಸಿದರು.
ಜಿಲ್ಲೆಯಲ್ಲಿ 2023-24 ರಲ್ಲಿ ಒಟ್ಟು 193 ಬಾಲ್ಯ ವಿವಾಹ ಪ್ರಕರಣ ಕುರಿತು ಮಕ್ಕಳ ರಕ್ಷಣಾ ಘಟಕಕ್ಕೆ ದೂರು ದಾಖಲಾಗಿದ್ದವು. ಇದರಲ್ಲಿ 102 ಪ್ರಕರಣಗಳನ್ನು ತಡೆಯಲಾಗಿದೆ. ಒಟ್ಟು 91 ಪ್ರಕರಣಗಳಲ್ಲಿ ಎಫ್.ಐ.ಆರ್. ದಾಖಲಿಸಲಾಗಿದೆ. ಏಪ್ರಿಲ್ 2024 ರಿಂದ ಸೆಪ್ಟೆಂಬರ್ ಅಂತ್ಯದವರೆಗೆ 102 ದೂರುಗಳು ದಾಖಲಾಗಿದ್ದು, 53 ಪ್ರಕರಣಗಳಲ್ಲಿ ತಡೆಯಲಾಗಿದೆ. 49 ಪ್ರಕರಣಗಳಲ್ಲಿ ದೂರು ದಾಖಲಿಸಲಾಗಿದೆ. ಇದ ಅವಧಿಯಲ್ಲಿ 76 ಪೋಕ್ಸೋ ಪ್ರಕರಣ ದಾಖಲಾಗಿವೆ. ಮಕ್ಕಳ ಸಹಾಯವಾಣಿ ಕೇಂದ್ರ 1098ಕ್ಕೆ ಒಟ್ಟು 228 ಕರೆಗಳು ಬಂದಿದ್ದು, ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ವಿಚಾರಣೆ ನಡೆಸಿ, ಮಕ್ಕಳಿಗೆ ನೆರವು ನೀಡಲಾಗಿದೆ. ಚಿತ್ರದುಗ್ ಜಿಲ್ಲೆಗೆ ಹೊಸದಾಗಿ ಸರ್ಕಾರಿ ವಿಶೇಷ ದತ್ತು ಕೇಂದ್ರ ಮಂಜೂರು ಆಗಿದ್ದು, ಪ್ರಸ್ತುತ ಬಾಲಕಿಯರ ಬಾಲ ಮಂದಿರದ ಕಟ್ಟದಲ್ಲಿ ದತ್ತು ಸ್ವೀಕಾರ ಕೇಂದ್ರ ಪ್ರಾರಂಭಿಸಲಾಗುವುದು ಎಂದು ಜಿಲ್ಲಾ ಮಹಿಳಾ ರಕ್ಷಣಾಧಿಕಾರಿ ಸವಿತಾ ಸಭೆಯಲ್ಲಿ ಮಾಹಿತಿ ನೀಡಿದರು.
ಆಹಾರ ಸಾಮಗ್ರಿಗಳ ಗುಣಮಟ್ಟ ಪರಿಶೀಲನೆಗೆ ಉಪ ಸಮಿತಿ ರಚನೆ: ಅಂಗನವಾಡಿ ಕೇಂದ್ರಗಳ ಫಲಾನುಭವಿಗಳಿಗೆ ವಿತರಿಸುವ ಉಪಹಾರ, ಆಹಾರ ಸಾಮಗ್ರಿಗಳ ಗುಣಮಟ್ಟ ಪರಿಶೀಲನೆ ಮಾಡಲು ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚನೆ ಮಾಡಿ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಉಪವಿಭಾಗಾಧಿಕಾರಿಗಳಿಗೆ ಸೂಚಿಸಿದರು.
ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯ ಉಪ ಸಮಿತಿಯಲ್ಲಿ ತಹಶೀಲ್ದಾರ್, ತಾ.ಪಂ ಇಒ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಒಳಗೊಂಡ ಉಪ ಸಮಿತಿಯು ಆಹಾರ ಸಾಮಗ್ರಿಗಳ ಪರಿಶೀಲನೆ ಮಾಡಿ, ಮಕ್ಕಳು ಹಾಗೂ ಪೋಷಕರ ಒಪ್ಪಿಗೆಯ ಜೊತೆಗೆ ವರದಿ ನೀಡಬೇಕು. ಆಹಾರ ಸಾಮಗ್ರಿಗಳು ಗುಣಮಟ್ಟದಿಂದ ಕೂಡಿದ್ದರೆ ಮಾತ್ರ ಪಡೆದುಕೊಳ್ಳಬೇಕು. ಗುಣಮಟ್ಟವಿಲ್ಲದ ಆಹಾರ ಸಾಮಗ್ರಿಗಳ ಪಡೆದರೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳೇ ಹೊಣೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಪೂರಕ ಪೌಷ್ಠಿಕ ಆಹಾರ ಶೇ.100ರಷ್ಟು ಪ್ರಗತಿ ಸಾಧಿಸಿ: ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮ, ಮಾತೃಪೂರ್ಣ ಯೋಜನೆಯಡಿ 6 ತಿಂಗಳಿಂದ 3 ವರ್ಷದ ಮಕ್ಕಳಿಗೆ ಹಾಗೂ 3 ವರ್ಷದಿಂದ 6 ವರ್ಷದೊಳಗಿನ ಮಕ್ಕಳಿಗೆ, ಗರ್ಭಿಣಿಯರು, ಬಾಣಂತಿಯರಿಗೆ ನೀಡುವ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರತಿ ತಿಂಗಳು ಮಕ್ಕಳ ಮಾಹಿತಿ ನೀಡಲು ಸೂಚನೆ: ಶಾಲೆ ಬಿಟ್ಟ ಮಕ್ಕಳು ಹಾಗೂ ಏಳು ದಿನಗಳಿಗಿಂತ ಹೆಚ್ಚು ಗೈರು ಹಾಜರಾದ ಮಕ್ಕಳ ಮಾಹಿತಿಯನ್ನು ಪ್ರತಿ ತಿಂಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.
ಶಾಲೆ ಬಿಟ್ಟ ಹಾಗೂ ಏಳು ದಿನಗಳಿಗಿಂತ ಹೆಚ್ಚು ಗೈರಾದ 2,284 ಮಕ್ಕಳನ್ನು ಗುರುತಿಸಲಾಗಿದ್ದು, ಶಾಲೆಬಿಟ್ಟ ಮಕ್ಕಳನ್ನ ಮರಳಿ ಶಾಲೆಗೆ ಕರೆತರಲು ಕ್ರಮ ವಹಿಸಲಾಗುವುದು ಎಂದು ಡಿಡಿಪಿಐ ಮಂಜುನಾಥ್ ಸಭೆಗೆ ಮಾಹಿತಿ ನೀಡಿದರು.
ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ನಿವೇಶನ ಗುರುತಿಸಿ: ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ನಿವೇಶನವನ್ನು ಗುರುತಿಸಲು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಾಕೀತು ಮಾಡಿದರು.
ಗ್ರಾಮೀಣ ಪ್ರದೇಶ ಹಾಗೂ ನಗರ ವ್ಯಾಪ್ತಿಯಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ತ್ವರಿತಗತಿಯಲ್ಲಿ ನಿವೇಶನ ಗುರುತಿಸಬೇಕು. ಈಗಾಗಲೇ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಮಾತನಾಡಿ, ಜಿಲ್ಲೆಯಲ್ಲಿ 144 ಅಂಗನವಾಡಿ ಕೇಂದ್ರಗಳಿಗೆ ನಿವೇಶನ ಲಭ್ಯವಿದ್ದು, 150 ಅಂಗನವಾಡಿ ಕೇಂದ್ರಗಳಿಗೆ ನಿವೇಶನದ ಅವಶ್ಯಕತೆ ಇದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಅಭಿನವ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ ಕಾಳೇಸಿಂಘೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading