ಚಿತ್ರದುರ್ಗ: ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 79 ವರ್ಷಗಳು ಕಳೆದರೂ ಅಸ್ಪೃಶ್ಯತೆ ಎಂಬ ಸಾಮಾಜಿಕ ಪಿಡುಗು ಸಂಪೂರ್ಣವಾಗಿ ನಿವಾರಣೆಯಾಗಿಲ್ಲ. ಸಮಾಜದಲ್ಲಿ ಕೆಲವು ಕಡೆ ಈ ಕಳಂಕ ಬೇರುರಿರುವುದು ದುಃಖಕರ ಸಂಗತಿಯಾಗಿದೆ. ಅಸ್ಪೃಶ್ಯತೆಯನ್ನು ಬುಡಸಮೇತ ನಿರ್ಮೂಲನೆ ಮಾಡಲು ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಿ ಸರ್ವಾಂಗೀಣ ಸಹಕಾರ ನೀಡಬೇಕು ಎಂದು ಮಡಿಲು ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಕಾರ್ಯದರ್ಶಿ ಆನಂದ್. ಡಿ ಆಲಘಟ್ಟ ಅಭಿಪ್ರಾಯಪಟ್ಟರು.




ತಾಲೂಕಿನ ಸಿರಿಗೆರೆ , ಅಳಗವಾಡಿ , ಭರಮಸಾಗರ ಗ್ರಾಮಗಳಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಮಡಿಲು ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಜನಾಂಗದವರ ಮೇಲಿನ ದೌರ್ಜನ್ಯ ತಡೆಗಟ್ಟುವಿಕೆ, ಅಸ್ಪೃಶ್ಯತಾ ನಿವಾರಣೆ ಮತ್ತು ಅವರ ಸರ್ವಾಂಗೀಣ ಅಭಿವೃದ್ಧಿ ಕುರಿತು ಆಯೋಜಿಸಿದ್ದ ಅರಿವು ಮೂಡಿಸುವ ಕಾರ್ಯಕ್ರಮ ಹಾಗೂ ಬೀದಿ ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಮಾಜದಲ್ಲಿ ಸಮಾನತೆ ಮತ್ತು ಮಾನವೀಯ ಮೌಲ್ಯಗಳು ಬಲವಾಗಿ ನೆಲೆಯಾಗಬೇಕಾದರೆ ಪ್ರತಿಯೊಬ್ಬರೂ ಜಾತಿ–ಮತ ಭೇದಭಾವವನ್ನು ತೊರೆದು ಪರಸ್ಪರ ಗೌರವ ಮತ್ತು ಸಹಕಾರದ ಮನೋಭಾವವನ್ನು ಬೆಳೆಸಿಕೊಳ್ಳಬೇಕು, ಅಸ್ಪೃಶ್ಯತೆ ಮಾನವೀಯತೆಗೆ ವಿರುದ್ಧವಾದ ಅಮಾನವೀಯ ಆಚರಣೆಯಾಗಿದ್ದು, ಇದು ಸಂವಿಧಾನಾತ್ಮಕ ಹಕ್ಕುಗಳಿಗೆ ಧಕ್ಕೆ ಉಂಟುಮಾಡುತ್ತದೆ. ಆದ್ದರಿಂದ ಇದನ್ನು ನಿರ್ಮೂಲನೆ ಮಾಡಲು ಸರ್ಕಾರ ಮಾತ್ರವಲ್ಲ, ಸಮಾಜದ ಪ್ರತಿಯೊಂದು ವರ್ಗದ ಜನರು ಜಾಗೃತರಾಗಬೇಕು ಎಂದು ಅವರು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪ್ರಕಾಶ್ ಮಾತನಾಡಿ ಸಮಾಜದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಜನಾಂಗದವರ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹಲವು ಕಾನೂನುಗಳನ್ನು ಜಾರಿಗೆ ತಂದಿದೆ. ನಾಗರಿಕ ಹಕ್ಕು ಸಂರಕ್ಷಣೆ ಅಧಿನಿಯಮ–1955 ಹಾಗೂ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ಪ್ರತಿಬಂಧ) ತಿದ್ದುಪಡಿ ಅಧಿನಿಯಮ–2015 ಮತ್ತು ತಿದ್ದುಪಡಿ ನಿಯಮಗಳು–2016ರ ಅಡಿಯಲ್ಲಿ ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ದೊರಕುವಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅವಕಾಶವಿದು.ಈ ಕಾನೂನುಗಳ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಅರಿವು ಮೂಡಿಸುವುದು ಅತ್ಯಂತ ಅಗತ್ಯವಾಗಿದೆ. ದೌರ್ಜನ್ಯ ಅಥವಾ ಭೇದಭಾವ ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ತಕ್ಷಣ ಮಾಹಿತಿ ನೀಡಿದರೆ ಇಂತಹ ಘಟನೆಗಳನ್ನು ಮೌನವಾಗಿ ಸಹಿಸುವ ಬದಲು ಕಾನೂನು ಮಾರ್ಗದಲ್ಲಿ ಎದುರಿಸಲು ಮುಂದಾಗಬಹುದು ಎಂದರು.
ಯುವ ವಕೀಲ ಅನಿಲ್ ಅಳಗವಾಡಿ ಮಾತನಾಡಿ ಸಮಾಜದಲ್ಲಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಸ್ಥಾಪಿಸುವುದು ಎಲ್ಲರ ಜವಾಬ್ದಾರಿಯಾಗಿದ್ದು. ಪರಿಶಿಷ್ಟ ಜಾತಿ ಮತ್ತು ಜನಾಂಗದವರ ಮೇಲೆ ನಡೆಯುವ ಅನ್ಯಾಯಗಳನ್ನು ತಡೆಗಟ್ಟಲು ಸರ್ಕಾರ ಬದ್ಧವಾಗಿದ್ದು, ಸರ್ಕಾರ ಇದರ ವಿರುದ್ಧ ಜಾಗೃತಿಯನ್ನು ನಿರಂತರವಾಗಿ ಮಾಡುತ್ತಾ ಬರುತ್ತಿದೆ ಎಂದರು.
ಮಡಿಲು ಸಂಸ್ಥೆಯ ನಿರ್ದೇಶಕ ಮಹಾಂತೇಶ್ ಎಸ್ ಆರ್ ಮಾತನಾಡಿ ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜನರಲ್ಲಿ ಸಮಾನತೆ, ಸಹೋದರತ್ವ ಮತ್ತು ಸಾಮಾಜಿಕ ಬಾಂಧವ್ಯವನ್ನು ಬೆಳೆಸುವುದು ಮುಖ್ಯವಾಗಿದೆ. ಜಾತಿ ಆಧಾರಿತ ಭೇದಭಾವ ಮತ್ತು ಅಸ್ಪೃಶ್ಯತೆಯನ್ನು ದೂರ ಮಾಡುವ ಮೂಲಕ ಸಮಾನತೆಯ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಸಿರಿಗೆರೆ ಪಿಡಿಒ ಉಮಾ, ಕಾರ್ಯದರ್ಶಿ ಜೈರಾಮ್, ಮಡಿಲು ಸಂಸ್ಥೆ ಖಂಜಾಜಿ ಪ್ರದೀಪ್ ಸಿಗೇಹಳ್ಳಿ, ಕಲಾವಿದರಾದ ನಾಗರಾಜ್, ಮೋಹನ್, ರಾಜಪ್ಪ, ಮೀನಾಕ್ಷಿ ,ಭಾಗ್ಯಮ್ಮ ಹಾಗೂ ಇತರರು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.