
ಚಿತ್ರದುರ್ಗ ಮೇ.06:
ಕಾರ್ಮಿಕರಿಗೆ ಕಾನೂನು ಅರಿವು ಇದ್ದಾಗ ಮಾತ್ರ ತಮಗೆ ದೊರಕಬೇಕಾದ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಹೇಳಿದರು.
ನಗರದ ಜಿಲ್ಲಾಸ್ಪತ್ರೆ ಆವರಣದ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯದ ಕಟ್ಟಡ ಕಾಮಗಾರಿ ಸಂಕೀರ್ಣದಲ್ಲಿ ಮಂಗಳವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಹಾಗೂ ಸ್ಟಾರ್ ಇನ್ಪ್ರಾಟೆಕ್ ಸಂಯುಕ್ತಾಶ್ರಯದಲ್ಲಿ “ಕಾರ್ಮಿಕ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ” ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಮಿಕರ ಕಾಯ್ದೆಗೆ ಅನುಗುಣವಾಗಿ ಕಾರ್ಮಿಕರಿಗೆ ಸಿಗಬೇಕಾದ ಕನಿಷ್ಠ ವೇತನ ಹಾಗೂ ಸೌಲಭ್ಯಗಳನ್ನು ನೀಡಲು ಸಂಬಂಧಪಟ್ಟ ಏಜೆನ್ಸಿಯವರು ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಹೇಳಿದರು.
ಕಾರ್ಮಿಕ ಇಲಾಖೆಯ ವಿವಿಧ ಸೌಲಭ್ಯಗಳನ್ನು ಪಡೆಯಲು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿಸಿಕೊಂಡು, ಕಾರ್ಮಿಕರ ಕಾರ್ಡ್ ಪಡೆದುಕೊಳ್ಳಬೇಕು. ನೋಂದಾಯಿತ ಫಲಾನುಭವಿಗಳಿಗೆ ಪಿಂಚಣಿ ಸೌಲಭ್ಯ, ವೈದ್ಯಕೀಯ ಸಹಾಯಧನ, ಅಪಘಾತ ಪರಿಹಾರ, ಪ್ರಮುಖ ವೈದ್ಯಕೀಯ ಸಹಾಯಧನ, ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ, ಮಕ್ಕಳ ಮದುವೆಗೆ ಸಹಾಯಧನ ಸೇರಿದಂತೆ ಅನೇಕ ಸೌಲಭ್ಯಗಳು ದೊರೆಯಲಿದೆ ಎಂದು ಹೇಳಿದರು.
ಕೆಲಸದ ಸ್ಥಳದಲ್ಲಿ ಮಹಿಳಾ ಕಾರ್ಮಿಕರಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿ, ಶೌಚಾಲಯ, ಸ್ನಾನದ ಗೃಹ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು. ಕಾರ್ಮಿಕರಿಗೆ ಏನಾದರೂ ಸಮಸ್ಯೆಗಳು ಉದ್ಭವಿಸಿದರೆ ಕಾರ್ಮಿಕ ಅಧಿಕಾರಿಗಳಿಗೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ತಿಳಿಸುವ ಮೂಲಕ ಕಾನೂನು ನೆರವು ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಮಾತನಾಡಿ, ಕಾರ್ಮಿಕರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕು. ಒಪ್ಪತ್ತಿನ ಊಟಕ್ಕಾಗಿ ಬೇರೆ ಬೇರೆ ರಾಜ್ಯಗಳಿಂದ ಕೆಲಸ ಹರಿಸಿ ಬಂದಿದ್ದೀರಾ ಎಂದು ತಿಳಿಸಿದ ಅವರು, ನಿಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಸಲಹೆ ನೀಡಿದರು.
ಅಸಂಘಟಿತ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ಸೌಲಭ್ಯಗಳ ಕೊರತೆ ಇದ್ದು, ಕಾರ್ಮಿಕರ ಕಾರ್ಡ್ ವಿತರಿಸಿ, ಸೌಲಭ್ಯ ದೊರೆಕಿಸಿಕೊಡುವಂತೆ ತಿಳಿಸಿದರು.
ಕಾರ್ಮಿಕ ಅಧಿಕಾರಿ ಅನಿಲ್ ಬಾಲಚಂದ್ರ ಬಗಟಿ ಮಾತನಾಡಿ, ಪಶ್ವಿಮ ಬಂಗಾಳ, ಬಿಹಾರ್, ಆಂದ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯದ ಸುಮಾರು 31 ಕಾರ್ಮಿಕರು ಇಲ್ಲಿ ಕಾರ್ಮಿಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಈ ಎಲ್ಲ ಕಾರ್ಮಿಕರಿಗೆ ಕಾರ್ಮಿಕರ ಕಾರ್ಡ್ ವಿತರಿಸಲು ಅಗತ್ಯ ಕ್ರಮವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಕಾರ್ಮಿಕರ ಕಾರ್ಡ್ ವಿತರಿಸಿ, ಮುನ್ನೆಚ್ಚರಿಕಾ ಆರೋಗ್ಯ ತಪಾಸಣೆ ಮೂಲಕ ಆರೋಗ್ಯ ತಪಾಸಣೆ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಚಿತ್ರದುರ್ಗ ಕಾರ್ಮಿಕ ನಿರೀಕ್ಷಕ ಪಿ.ಭೀಮೇಶ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್, ಸ್ಟಾರ್ ಇನ್ಪ್ರಾಟೆಕ್ ಪ್ರಾಜೆಕ್ಟ್ ಮ್ಯಾನೇಜರ್ ಸುಧೀರ್ ಸೇರಿದಂತೆ ಕಾರ್ಮಿಕರು ಇದ್ದರು.


About The Author
Discover more from JANADHWANI NEWS
Subscribe to get the latest posts sent to your email.