September 16, 2025
1744030275444.jpg




ಚಿತ್ರದುರ್ಗ ಎಪ್ರಿಲ್.07:
ಜಿಲ್ಲೆಯ ಪ್ರತಿ ಪೊಲೀಸ್ ಠಾಣೆಗಳಲ್ಲಿ ವರ್ಷಕ್ಕೆ ಕನಿಷ್ಠ 20 ತೆರೆದ ಮನೆ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ, ಮಕ್ಕಳ ರಕ್ಷಣಾ ನೀತಿ ಕುರಿತು ಮಕ್ಕಳಿಗೆ ಜಾಗೃತಿ ಮೂಡಿಸಬೇಕು. ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳ ಜೊತೆ ಪೊಲೀಸ್ ಅಧಿಕಾರಿಗಳು ಸಂವೇದನಾಶೀಲರಾಗಿ ವರ್ತಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಸೂಚಿಸಿದರು.
ನಗರದ ಜಿಲ್ಲಾ ಶಿಕ್ಷಕರ ತರಬೇತಿ ಕೇಂದ್ರ (ಡಯಟ್) ಸಭಾಂಗಣದಲ್ಲಿ ಸೋಮವಾರ ಮಕ್ಕಳ ವಿಶೇಷ ಪೊಲೀಸ್ ಘಟಕದ ಕಾರ್ಯವೈಖರಿ ಕುರಿತು ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.
ಕಾನೂನು ಸಂಘರ್ಷಕ್ಕೆ ಸಿಲುಕಿದ ಮಕ್ಕಳ ಪೈಕಿ, ಹದಿ ಹರೆಯದವರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದು ಕಳವಳಕಾರಿ ಸಂಗತಿಯಾಗಿದೆ. ಜಿಲ್ಲೆಯಾದ್ಯಂತ ಪ್ರೌಢಶಾಲೆಗಳಲ್ಲಿ ಮಾತ್ರ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಆದರೆ 18 ವರ್ಷದ ಒಳಗಿನವರೆಲ್ಲರೂ ಮಕ್ಕಳು ಎಂದೇ ಪರಿಗಣಿಸಲಾಗುತ್ತದೆ. 16 ರಿಂದ 18 ವರ್ಷದ ಮಕ್ಕಳಲ್ಲಿ ದೈಹಿಕ ಹಾಗೂ ಮಾನಸಿಕ ಬದಲಾವಣೆ ಉಂಟಾಗುತ್ತಿರುತ್ತವೆ. ಈ ಸಮಯದಲ್ಲಿ ಮಕ್ಕಳು ವಿಚಲಿತರಾಗಿ ಕಾನೂನು ಸಂಘರ್ಷಕ್ಕೆ ತುತ್ತಾಗುವ ಸಂಭವಿರುತ್ತದೆ. ಆದ್ದರಿಂದ ಪೊಲೀಸ್ ಇಲಾಖೆ ಅಧಿಕಾರಿಗಳು ವರ್ಷದಲ್ಲಿ ಒಮ್ಮೆಯಾದರು ಪಿಯುಸಿ, ಐ.ಟಿ.ಐ, ಪ್ಯಾರಾ ಮೆಡಿಕಲ್, ಡಿಪ್ಲೋಮೊ, ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ತಪ್ಪದೇ ಹಮ್ಮಿಕೊಳ್ಳಬೇಕು. ಈ ವೇಳೆ ಮಕ್ಕಳು ಗಂಭೀರವಾಗಿ ವಿಷಯಗಳನ್ನು ಗ್ರಹಿಸುವಂತೆ ನೈಜ ಪ್ರಕರಣಗಳ ಹೆಸರು, ಸ್ಥಳ ಬದಲಾಯಿಸಿ ಉದಾಹರಣೆ ಸಹಿತ ಮನಮುಟ್ಟುವಂತೆ ತಿಳಿಸಬೇಕು ಎಂದರು.
ಪ್ರತಿ ಠಾಣೆಗಳಲ್ಲಿಯೂ ಮಕ್ಕಳ ವಿಶೇಷ ಪೊಲೀಸ್ ಘಟಕ ತೆರದು ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಠಾಣೆಗಳಲ್ಲಿ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಇಲಾಖೆಗಳ ನಾಮಫಲಕಗಳನ್ನು ಅಳವಡಿಸಬೇಕು. ಪ್ರತಿ ಗುರುವಾರ ತೆರೆದ ಮನೆ ಕಾರ್ಯಕ್ರಮ ಆಯೋಜಿಸುವಂತೆ ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಕೆಲಸದ ಒತ್ತಡ ನಡುವೆ ಪ್ರತಿ ವಾರ ಕಾರ್ಯಕ್ರಮ ಆಯೋಜಿಸಲು ಕಷ್ಟ ಸಾಧ್ಯ, ಆದರೆ ಪ್ರತಿ ಪೊಲೀಸ್ ಠಾಣೆಯಲ್ಲಿಯೂ ವರ್ಷಕ್ಕೆ ಕನಿಷ್ಠ 20 ತೆರೆದ ಮನೆ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಕೆ.ಟಿ.ತಿಪ್ಪೇಸ್ವಾಮಿ ಹೇಳಿದರು.
ಮೂರು ವರ್ಷದಲ್ಲಿ 300 ಕ್ಕೂ ಹೆಚ್ಚು ಪೋಕ್ಸೋ ಪ್ರಕರಣ :
* ಕಳೆದ ಮಾರ್ಚ್ 2023 ರಿಂದ 2025 ಮಾರ್ಚ್ ತಿಂಗಳ ಅಂತ್ಯದವರೆಗೆ ಜಿಲ್ಲೆಯ 19 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 313 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 05 ಪ್ರಕರಣಗಳು ಸುಳ್ಳು ಎಂದು ತಿಳಿದು ಬಂದಿವೆ. 13 ಪ್ರಕರಣಗಳು ಜಿಲ್ಲೆಯಿಂದ ವರ್ಗಾಯಿಸಲಾಗಿದೆ. 295 ಪ್ರಕರಣಗಳು ನೈಜವಿದ್ದು, 54 ಪ್ರಕರಣಗಳು ತನಿಖೆ ಹಂತದಲ್ಲಿವೆ. ಇವುಗಳ ಪೈಕಿ ಒಟ್ಟು 138 ಪ್ರಕರಣಗಳಲ್ಲಿ ಪೋಕ್ಸೋ ಕಾಯ್ದೆಯ ಜೊತೆಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆಯನ್ನು ಒಳಗೊಂಡು ಪ್ರಕರಣಗಳನ್ನು ದಾಖಲಿಸಲಾಗಿದೆ. 207 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿವೆ. 04 ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ. 53 ಪ್ರಕರಣಗಳಲ್ಲಿ ಖುಲಾಸೆಯಾಗಿದ್ದು, 02 ಪ್ರಕರಣಗಳು ಪತ್ತೆಯಾಗಿಲ್ಲ. 02 ಪ್ರಕರಣದಲ್ಲಿ ಹೆಚ್ಚುವರಿ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದೆ. ಇದರ ಹೊರತಾಗಿ ಇದೇ ಅವಧಿಯಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ 03 ಹಾಗೂ ಬಾಲ ಕಾರ್ಮಿಕ ನಿಷೇಧ ಕಾಯ್ದೆಯಡಿ 05 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.
ಎಸ್‍ಜೆಪಿಯು ಘಟಕ ಕಾರ್ಯವೈಖರಿಗೆ ಮೆಚ್ಚುಗೆ: ಜಿಲ್ಲೆಯ ಮಕ್ಕಳ ವಿಶೇಷ ಪೊಲೀಸ್ ಘಟಕದ (ಎಸ್‍ಜೆಪಿಯು) ಅಧಿಕಾರಿಗಳ ಕಾರ್ಯವೈಖರಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದರು.
ಚತ್ರದುರ್ಗ ಜಿಲ್ಲೆಯಲ್ಲಿ ಎಸ್‍ಜೆಪಿಯು ಘಟಕ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ತರಬೇತಿ ಹಾಗೂ ಅಧಿಕಾರಿಗಳ ಕ್ರಿಯಾಶೀಲತೆಯಿಂದಾಗಿ ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಪೋಕ್ಸೋ ಕಾಯ್ದೆ ಸಮರ್ಪಕ ಅನುಷ್ಠಾನವಾಗಬೇಕು: ಜಿಲ್ಲೆಯ ಎಲ್ಲ ಶಾಲೆಗಳಲ್ಲಿಯೂ ಕಡ್ಡಾಯವಾಗಿ ಪೋಕ್ಸೋ ಕಾಯ್ದೆ ಅನುಷ್ಠಾನವಾಗಬೇಕು ಎಂದು ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
18 ವರ್ಷದೊಳಗಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು, ಕಿರುಕುಳ, ಅತ್ಯಾಚಾರ, ದುರ್ಘಟನೆಗಳನ್ನು ತಡೆಗಟ್ಟಲು ಹಾಗೂ ಮಕ್ಕಳ ರಕ್ಷಣೆ, ಭದ್ರತೆ ಒದಗಿಸುವ ಉದ್ದೇಶದಿಂದ ಪೋಕ್ಸೋ ಕಾಯ್ದೆ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. “ಶಾಲೆಯಲ್ಲಿದೆ ಶಿಕ್ಷಣದ ಜೊತೆಗೆ ರಕ್ಷಣೆ” ಎಂಬ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸುರಕ್ಷಿತ ಹಾಗೂ ಅಸುರಕ್ಷಿತ ಸ್ಪರ್ಶ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.
ಬಾಲ್ಯವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿ ಕುರಿತು ಸಮುದಾಯದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಬಾಲ್ಯ ವಿವಾಹ ತಡೆಯುವ ನಿಟ್ಟಿನಲ್ಲಿ ಸಮುದಾಯದಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕು ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ಪ್ರಕರಣಗಳು ಜಾಸ್ತಿ ಇವೆ ಎಂದು ಸಾಕಷ್ಟು ದೂರುಗಳು ಬರುತ್ತಿವೆ, ಈ ಕುರಿತು ಗಮನಹರಿಸಬೇಕು. ತಹಶೀಲ್ದಾರ್ ನೇತೃತ್ವದಲ್ಲಿ ರಚಿಸಲಾಗಿರುವ ತಾಲ್ಲೂಕು ಟಾಸ್ಕ್ ಪೋರ್ಸ್ ಸಮಿತಿ ವತಿಯಿಂದ ನಿಯಮಿತವಾಗಿ ತಪಾಸಣೆ ಮಾಡಿ, ಬಾಲಕಾರ್ಮಿಕರ ಪತ್ತೆ ಹಚ್ಚಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಚಿತ್ರದುರ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ಹಿರಿಯ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿ ಪಿ.ಕೆ.ದಿನಕರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ. ಸವಿತಾ ಸೇರಿದಂತೆ ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿಗಳು ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading