ಚಳ್ಳಕೆರೆ, ಆ.7: ತಾಲೂಕಿನ ದೇವರಮರಿಕುಂಟೆ ಗ್ರಾಮದ ವಾಲ್ಮೀಕಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಬಿಸಿಯೂಟ ಸೇವಿಸಿದ ಬಳಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣದ ಹಿನ್ನೆಲೆಯಲ್ಲಿ ಚಳ್ಳಕೆರೆ ನ್ಯಾಯಾಂಗ ಅಧಿಕಾರಿಗಳು ಶುಕ್ರವಾರ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಳ್ಳಕೆರೆ ಪ್ರಧಾನ ಸಿವಿಲ್ ನ್ಯಾಯಾಧೀಶೆ ಹೇಮಾ ಎಚ್.ಆರ್. ಹಾಗೂ ಅಪರ ಸಿವಿಲ್ ನ್ಯಾಯಾಧೀಶೆ ಸಂಘಮಿತ್ರಾ ಅವರು ಶಾಲೆಯ ಅಡುಗೆ ಕೋಣೆ, ಆಹಾರ ತಯಾರಿಕೆ ಮತ್ತು ಬಿಸಿಯೂಟ ವಿತರಣಾ ವ್ಯವಸ್ಥೆಯನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪರಿಣಾಮ ಬೀರಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಕ್ರಮಗಳು ಹಾಗೂ ಶುಚಿತ್ವದ ಬಗ್ಗೆ ಮಾಹಿತಿ ಪಡೆದು ಪರಿಶೀಲನೆ ನಡೆಸಿದರು.
ಅಡುಗೆಗೆ ಬಳಸುವ ಅಕ್ಕಿ, ಬೇಳೆ, ತರಕಾರಿ ಸೇರಿದಂತೆ ಎಲ್ಲಾ ಆಹಾರ ಪದಾರ್ಥಗಳನ್ನು ಬಳಕೆಗೆ ಮುನ್ನ ಸ್ವಚ್ಛವಾಗಿ ತೊಳೆದು, ಗುಣಮಟ್ಟ ಪರಿಶೀಲಿಸಿದ ಬಳಿಕವೇ ಬಳಸಬೇಕು. ಅಡುಗೆ ಪಾತ್ರೆಗಳು, ಅಡುಗೆ ಕೋಣೆ ಹಾಗೂ ಆಹಾರ ಸಂಗ್ರಹಣಾ ಸ್ಥಳವನ್ನು ಸದಾ ಸ್ವಚ್ಛವಾಗಿಡಬೇಕು. ವಿದ್ಯಾರ್ಥಿಗಳಿಗೆ ಆಹಾರ ವಿತರಿಸುವ ಮುನ್ನ ಅದರ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳುವಂತೆ ನ್ಯಾಯಾಧೀಶರು ಸೂಚಿಸಿದರು.
ನಿರ್ಲಕ್ಷ್ಯಕ್ಕೆ ಅವಕಾಶ ಬೇಡ
ವಿದ್ಯಾರ್ಥಿಗಳ ಆರೋಗ್ಯದ ವಿಚಾರದಲ್ಲಿ ಶಿಕ್ಷಕರು ಹಾಗೂ ಅಡುಗೆ ಸಿಬ್ಬಂದಿ ಹೆಚ್ಚಿನ ಜವಾಬ್ದಾರಿ ಮತ್ತು ಕಾಳಜಿ ವಹಿಸಬೇಕು. ಆಹಾರ ತಯಾರಿಕೆ ಮತ್ತು ವಿತರಣೆಯ ಯಾವುದೇ ಹಂತದಲ್ಲೂ ನಿರ್ಲಕ್ಷ್ಯ ತೋರದಿದ್ದರೆ ಇಂತಹ ಅಹಿತಕರ ಘಟನೆಗಳನ್ನು ತಪ್ಪಿಸಬಹುದು ಎಂದು ನ್ಯಾಯಾಧೀಶರು ಹೇಳಿದರು.
ಪರಿಶೀಲನೆ ವೇಳೆ ಬಿಸಿಯೂಟದ ವ್ಯವಸ್ಥೆ, ಅಡುಗೆ ಸಿಬ್ಬಂದಿಯ ಕಾರ್ಯವೈಖರಿ ಹಾಗೂ ಆಹಾರ ಪದಾರ್ಥಗಳ ನಿರ್ವಹಣೆ ಕುರಿತು ಮುಖ್ಯಶಿಕ್ಷಕರು ಮತ್ತು ಸಂಬಂಧಿತ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್, ಬಿಸಿಯೂಟ ಸಹಾಯಕ ನಿರ್ದೇಶಕ ಮಂಜುನಾಥ್, ಮುಖ್ಯಶಿಕ್ಷಕ ಸುಧಾಕರ್ ಸೇರಿದಂತೆ ಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.