January 29, 2026
IMG-20260108-WA0126.jpg

ಚಿತ್ರದುರ್ಗ ತಾಲ್ಲೂಕು: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಆಕಾಶ್ ಅವರು ಗುರುವಾರ ದಿಢೀರ್ ಭೇಟಿ ನೀಡಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಜಲಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಪ್ರತಿಯೊಂದು ಮನೆಗೂ ನಳ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಅಧಿಕಾರಿಗಳಿಗೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಚಿತ್ರದುರ್ಗ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಜೆಜೆಎಂ ಯೋಜನೆಯ ಗೃಹ ಕಾರ್ಯಾತ್ಮಕ ನಳ ಸಂಪರ್ಕ ಕಾಮಗಾರಿಗಳನ್ನು ಪರಿಶೀಲಿಸಿ, ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಆದ್ಯತೆ ನೀಡುವಂತೆ ತಾಕೀತು ಮಾಡಿದರು.

ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ನಡೆಯುತ್ತಿರುವ ಬೂದು ನೀರು ನಿರ್ವಹಣಾ ಕಾಮಗಾರಿಗಳನ್ನು ಪರಿಶೀಲಿಸಿದ ಡಾ. ಆಕಾಶ್ ಅವರು, ಬೂದು ನೀರು ಸಂಗ್ರಹ ಘಟಕಗಳಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ಪ್ರತೀ ತಿಂಗಳು ನಿಯಮಿತವಾಗಿ ಸ್ವಚ್ಛಗೊಳಿಸಬೇಕು ಎಂದು ಸೂಚಿಸಿದರು. 15ನೇ ಹಣಕಾಸು ಆಯೋಗದ ಅನುದಾನ ಹಾಗೂ ಗ್ರಾಮ ಪಂಚಾಯಿತಿ ಇತರೆ ಅನುದಾನಗಳನ್ನು ಬಳಸಿ ಗ್ರಾಮ ವ್ಯಾಪ್ತಿಯಲ್ಲಿ ಸ್ವಚ್ಛತೆ ಮತ್ತು ನೈರ್ಮಲೀಕರಣಕ್ಕೆ ಹೆಚ್ಚಿನ ಒತ್ತು ನೀಡುವಂತೆ ಹೇಳಿದರು.
ದೊಡ್ಡಸಿದ್ದವ್ವನಹಳ್ಳಿ, ಜೆ.ಎನ್.ಕೋಟೆ, ಗೋನೂರು, ಸಿದ್ದಾಪುರ ಗ್ರಾಮ ಪಂಚಾಯಿತಿಗಳ ಜೊತೆಗೆ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಶಾಲೆಗಳು, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಬೂದು ನೀರು ನಿರ್ವಹಣಾ ಕಾಮಗಾರಿಗಳನ್ನು ವೀಕ್ಷಿಸಿದರು.

ದೊಡ್ಡಸಿದ್ದವ್ವನಹಳ್ಳಿ ಗ್ರಾಮ ಪಂಚಾಯಿತಿ ಭೇಟಿ ವೇಳೆ ಪಂಚಾಯಿತಿ ಸುತ್ತಮುತ್ತ ಸ್ವಚ್ಛತೆ ಹಾಗೂ ಶೌಚಾಲಯಗಳ ಸಮರ್ಪಕ ನಿರ್ವಹಣೆ ಮಾಡುವಂತೆ ಸೂಚಿಸಿದರು. ಜೆ.ಎನ್.ಕೋಟೆ ಗ್ರಾಮದಲ್ಲಿನ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಮಕ್ಕಳ ಪೌಷ್ಠಿಕ ಆಹಾರ ವಿತರಣೆ ಹಾಗೂ ಹಾಜರಾತಿ ಪರಿಶೀಲಿಸಿದರು. ಸಜ್ಜನಕೆರೆ, ಇಂಗಳದಾಳ್, ಕುಂಚಿಗನಾಳ್, ಮಲ್ಲಾಪುರ ಗ್ರಾಮಗಳಲ್ಲಿ ಬೂದು ನೀರು ಸಂಸ್ಕರಣೆಗೆ ಚರಂಡಿಯಲ್ಲಿ ನಿರ್ಮಾಣವಾಗುತ್ತಿರುವ ಇನ್‌ಲೈನ್ ಟ್ರೀಟ್‌ಮೆಂಟ್ ಕಾಮಗಾರಿಗಳನ್ನು ಪರಿಶೀಲಿಸಿದರು.
ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾನಂಗಿ ಗ್ರಾಮದಲ್ಲಿನ ಪ್ರಾಥಮಿಕ ಆರೋಗ್ಯ ಉಪಕೇಂದ್ರಕ್ಕೆ ಭೇಟಿ ನೀಡಿ, ದಾಸ್ತಾನು ಕೊಠಡಿ ಹಾಗೂ ದಾಖಲಾತಿಗಳನ್ನು ಪರಿಶೀಲಿಸಿದರು. ಸಿದ್ದಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಹಾಜರಾತಿ, ಅಡುಗೆ ಕೋಣೆಯ ಆಹಾರ ಸಾಮಗ್ರಿಗಳು, ಶಾಲಾ ಆವರಣದ ಸ್ವಚ್ಛತೆ ಹಾಗೂ ಶೌಚಾಲಯ ನಿರ್ವಹಣೆ ಕುರಿತು ಮಾಹಿತಿ ಪಡೆದರು. ನಂತರ ಸಿದ್ದಾಪುರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಕಾರ್ಯಪಾಲಕ ಅಭಿಯಂತರ ಅಮರನಾಥ್ ಜೈನ್, ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಮೂರ್ತಿ, ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ. ರವಿಕುಮಾರ್, ಜಿಲ್ಲಾ ಐಇಸಿ ಸಮಾಲೋಚಕ ಬಿ.ಸಿ. ನಾಗರಾಜ್, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading