September 8, 2026
IMG-20260908-WA0174


ಚಳ್ಳಕೆರೆ: ನಗರದ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ರೆಡ್‌ಕ್ರಾಸ್ ಘಟಕ ಹಾಗೂ ಐಕ್ಯುಎಸಿ ಸಹಭಾಗಿತ್ವದಲ್ಲಿ ಅಲ್ಲು ಅರ್ಜುನ್ ಫ್ಯಾನ್ಸ್ ಅಸೋಸಿಯೇಷನ್ ಪದಾಧಿಕಾರಿಗಳು ಏರ್ಪಡಿಸಿದ್ದ ಎಚ್‌ಪಿವಿ ಲಸಿಕೆ ಅರಿವು ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ರೂಪ, ಕ್ಯಾನ್ಸರ್‌ಗೆ ಕಾರಣವಾಗುವ ಜೀವನಶೈಲಿ, ಆಹಾರ ಪದ್ಧತಿ ಸೇರಿದಂತೆ ವಿವಿಧ ವಿಚಾರಗಳ ಕುರಿತು ಅರಿವು ಮೂಡಿಸಿದರು. ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಪಿಡುಗು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಇದು ಯಾವುದೇ ವಯಸ್ಸಿನವರಲ್ಲಿಯೂ ಕಾಣಿಸಿಕೊಳ್ಳಬಹುದಾದ ಕಾಯಿಲೆಯಾಗಿದ್ದು, ವಯಸ್ಸಿನ ನಿರ್ಬಂಧವಿಲ್ಲ ಎಂದು ತಿಳಿಸಿದರು.
ವಿದ್ಯಾರ್ಥಿನಿಯರೊಂದಿಗೆ ಸಂವಾದದ ರೂಪದಲ್ಲಿ ಕಾರ್ಯಕ್ರಮ ನಡೆಸಿಕೊಟ್ಟ ಅವರು, ಕ್ಯಾನ್ಸರ್ ಕುರಿತು ಜನಸಾಮಾನ್ಯರಲ್ಲಿ ಇರುವ ಮೌಢ್ಯ ಮತ್ತು ತಪ್ಪು ಕಲ್ಪನೆಗಳನ್ನು ದೂರ ಮಾಡಬೇಕಿದೆ ಎಂದರು. ಮಹಿಳೆಯರಲ್ಲಿ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಎಚ್‌ಪಿವಿ ಲಸಿಕೆ ಮಹತ್ವದ ಪಾತ್ರ ವಹಿಸಲಿದ್ದು, ಪುರುಷರೂ ಕೂಡ ಲಸಿಕೆ ಪಡೆಯುವ ಕುರಿತು ಪರಿಗಣಿಸಬೇಕು ಎಂದು ತಿಳಿಸಿದರು.
ಹೆಚ್ಚುತ್ತಿರುವ ಕ್ಯಾನ್ಸರ್ ಪಿಡುಗಿನ ಗಂಭೀರತೆಯನ್ನು ಅರಿತಿರುವ ಸರ್ಕಾರವು ಲಸಿಕೆಯನ್ನು ಸರ್ಕಾರಿ ಆರೋಗ್ಯ ವ್ಯವಸ್ಥೆಯ ಮೂಲಕ ಲಭ್ಯವಾಗುವಂತೆ ಕ್ರಮ ಕೈಗೊಂಡಿದ್ದು, ಅರ್ಹರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಡಾ. ರೂಪ ಸಲಹೆ ನೀಡಿದರು. ಅಲ್ಲದೆ, ಲಸಿಕೆ ಪಡೆಯಲು ಸೂಕ್ತ ವಯಸ್ಸು ಹಾಗೂ ವಯಸ್ಸಿಗೆ ಅನುಗುಣವಾಗಿ ಅಗತ್ಯವಿರುವ ಲಸಿಕೆ ಹಂತಗಳ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಕೆ. ದೇವಪ್ಪ ಮಾತನಾಡಿ, ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು. “ಆರೋಗ್ಯವೇ ಭಾಗ್ಯ” ಎಂಬುದನ್ನು ಅರಿತು ಆರೋಗ್ಯದ ಬಗ್ಗೆ ಜಾಗೃತರಾಗಬೇಕು ಎಂದು ಕಿವಿಮಾತು ಹೇಳಿದರು.
ವೇದಿಕೆಯಲ್ಲಿ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ. ಎಚ್. ಬಸವರಾಜ್, ಪ್ರಾಧ್ಯಾಪಕರಾದ ಫೈರೋಜಾ, ನಾಗರಾಜ್ ಎಂ.ವಿ., ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ಗಂಗಾಧರ್, ಕಾಲೇಜಿನ ಅತಿಥಿ ಉಪನ್ಯಾಸಕರು ಹಾಗೂ ಅಲ್ಲು ಅರ್ಜುನ್ ಅಭಿಮಾನಿ ಸಂಘದ ಪದಾಧಿಕಾರಿಗಳಾದ ದಿಲೀಪ್, ಅಮೋಘ, ನವೀನ್, ಹರ್ಷ, ಜಿತು, ಅಭಿ, ಮಂಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading