ಚಿತ್ರದುರ್ಗಡಿ.09:
ಜಿಲ್ಲೆಯಲ್ಲಿ ಕೃಷಿ ಉತ್ಪಾದಕತೆ ಹೆಚ್ಚಳಕ್ಕೆ ಕ್ರಮವಹಿಸಬೇಕು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಹಾಗೂ ಪ್ರಧಾನಮಂತ್ರಿ ಧನ ಧಾನ್ಯ ಕೃಷಿ ಯೋಜನೆಯ ಕೇಂದ್ರ ನೋಡಲ್ ಅಧಿಕಾರಿ ಡಾ.ಎಂ.ಎನ್.ಅಜಯ್ ನಾಗಭೂಷಣ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪ್ರಧಾನಮಂತ್ರಿ ಧನ ಧಾನ್ಯ ಕೃಷಿ ಯೋಜನೆ (ಪಿಎಂಡಿಡಿಕೆವೈ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಮುಖ್ಯ ಕೃಷಿ ಬೆಳೆಗಳಾದ ಶೇಂಗಾ, ರಾಗಿ, ತೊಗರಿ, ಸಿರಿಧಾನ್ಯಗಳ ಉತ್ಪಾದಕತೆ ಹಾಗೂ ಇಳುವರಿ ಪ್ರಮಾಣ ಹೆಚ್ಚಳ ಮಾಡುವ ನಿಟ್ಟಿನಲ್ಲಿ ವ್ಯವಸ್ಥಿತವಾಗಿ ಗೊಬ್ಬರಗಳ ಬಳಕೆ, ಮಣ್ಣಿನ ಫಲವತ್ತತೆ ನಿರ್ವಹಣೆ, ಉತ್ತಮ ತಳಿಗಳ ಅಳವಡಿಕೆ, ಸೂಕ್ಷ್ಮ ನೀರಾವರಿ ಪದ್ಧತಿಗಳಾದ ಸ್ಪಿಂಕ್ಲರ್, ಡ್ರಿಪ್ ಅಳವಡಿಕೆ ಮಾಡುವ ಮೂಲಕ ಕೃಷಿ ಉತ್ಪಾದಕತೆ ಹೆಚ್ಚಳ ಮಾಡಬೇಕು ಎಂದು ತಿಳಿಸಿದರು.
ರೈತರ ಆದಾಯ ಹೆಚ್ಚಿಸಲು ಹಾಗೂ ಕೃಷಿ ವಲಯದ ಬೆಳವಣಿಗೆ ಉತ್ತೇಜನಕ್ಕಾಗಿ ಕೃಷಿ ಉತ್ಪಾದಕ ಸಂಸ್ಥೆಗಳು, ಸ್ವ ಸಹಾಯ ಸಂಘಗಳ ಮೂಲಕ ಕೃಷಿ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ, ಪ್ಯಾಕೇಜಿಂಗ್, ಬ್ರ್ಯಾಂಡಿಂಗ್ ಪ್ರಕ್ರಿಯೆ ಮೂಲಕ ವ್ಯವಸ್ಥಿತವಾಗಿ ಸೂಕ್ತ ಮಾರುಕಟ್ಟೆ ಸೌಲಭ್ಯ ಕಲ್ಪಿಸಬೇಕು ಎಂದರು.
ಭದ್ರಾ ಮೇಲ್ದಂಡೆ ಯೋಜನೆಯಡಿ ಜಿಲ್ಲೆಗೆ ಸೂಕ್ಷ್ಮ ನೀರಾವರಿ ಸೌಲಭ್ಯ ಕಲ್ಪಿಸಲಿದ್ದು, ಮುಂದಿನ ದಿನಗಳಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದೆ. ಇದಕ್ಕೆ ಸೂಕ್ತವಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು. ಭದ್ರಾ ಮೇಲ್ದಂಡೆ ಯೋಜನೆ ಯಶಸ್ವಿಯಾಗಿ ಅನುಷ್ಠಾನವಾಗುವ ನಿಟ್ಟಿನಲ್ಲಿ ಸಣ್ಣ ನೀರಾವರಿ ಇಲಾಖೆ, ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದು ಸಲಹೆ ನೀಡಿದರು.
ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಸಿರಿಧಾನ್ಯಗಳಿಗೂ ಬೆಂಬಲ ಬೆಲೆ ನಿಗಧಿಪಡಿಸಲಾಗಿದ್ದು, ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ನಿಗಧಿಪಡಿಸಿರುವ ಕುರಿತು ರೈತರಿಗೆ ಜಾಗೃತಿ ಮೂಡಿಸಿದರೆ ಬೆಳೆಗಳ ಇಳುವರಿ ಹಾಗೂ ಆದಾಯವೂ ಹೆಚ್ಚಳವಾಗಲಿದೆ. ಉತ್ತಮ ಬೇಸಾಯ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ರೀತಿಯಲ್ಲಿ ಪ್ರೇರೇಪಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಕೃಷಿ ಕೂಲಿಕಾರ್ಮಿಕರ ಸಮಸ್ಯೆ ನೀಗಿಸುವುದಕ್ಕಾಗಿ ಕೃಷಿ ಯಾಂತ್ರೀಕರಣಕ್ಕೆ ಒತ್ತು ನೀಡಬೇಕು ಎಂದು ತಿಳಿಸಿದ ಅವರು, ಜಿಲ್ಲೆಯಲ್ಲಿ 20 ಹೊಸ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಪ್ರಾರಂಭ ಮಾಡಲು ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಂಟಿ ಕೃಷಿ ನಿರ್ದೇಶಕ ಬಿ. ಮಂಜುನಾಥ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಆನಂದ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಸವಿತಾ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಎಂ.ರಾಘವೇಂದ್ರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.