oplus_0
ಚಳ್ಳಕೆರೆ: ತಾಲೂಕಿನಲ್ಲಿ ನಡೆಯಲಿರುವ ವಿವಿಧ ಜಾತ್ರೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಚಳ್ಳಕೆರೆ ತಾಲೂಕು ಅಬಕಾರಿ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.
ಸೆಪ್ಟೆಂಬರ್ 14ರಿಂದ 16ರವರೆಗೆ ಚಳ್ಳಕೆರೆ ತಾಲೂಕು ವ್ಯಾಪ್ತಿಯಲ್ಲಿ ನಡೆಯಲಿರುವ ಶ್ರೀ ಮಾರಮ್ಮ ಜಾತ್ರೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಅಬಕಾರಿ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ.
ಜಾತ್ರಾ ಪ್ರದೇಶಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಹಾಗೂ ಸಾಗಾಟ ನಡೆಯದಂತೆ ನಿಗಾ ವಹಿಸಲಾಗುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವನೆ ಮತ್ತು ಅಕ್ರಮ ಮದ್ಯ ವ್ಯವಹಾರಕ್ಕೆ ಕಡಿವಾಣ ಹಾಕಲು ಇಲಾಖೆ ಮುಂದಾಗಿದೆ.
ಇದರ ಭಾಗವಾಗಿ ಕಳೆದ ಒಂದು ವರ್ಷದ ಅವಧಿಯಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿ, 216 ಲೀಟರ್‌ಗೂ ಅಧಿಕ ಮದ್ಯ ಹಾಗೂ 20 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜಾತ್ರೆ ಸಂದರ್ಭದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಸಹ ಅಕ್ರಮ ಚಟುವಟಿಕೆಗಳು ಕಂಡುಬಂದರೆ ಅಬಕಾರಿ ಇಲಾಖೆಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.
ಜಾತ್ರೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆಯಲು ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಚಳ್ಳಕೆರೆ ವಲಯ ಅಬಕಾರಿ ಅಧಿಕಾರಿಗಳು ಮನವಿ ಮಾಡಿದ್ದಾರೆ.

About The Author
Discover more from JANADHWANI NEWS
Subscribe to get the latest posts sent to your email.