ಚಿತ್ರದುರ್ಗಸೆ.11:
ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026ರ ಸಂಬಂಧ ಹಕ್ಕು ಮತ್ತು ಆಕ್ಷೇಪಣೆಗಳ ಸಲ್ಲಿಕೆ ಹಾಗೂ ಪಟ್ಟಿಯಲ್ಲಿನ ಲೋಪದೋಷಗಳನ್ನು ಸರಿಪಡಿಸುವ ಪ್ರಕ್ರಿಯೆಗೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಬೂತ್ ಮಟ್ಟದ ಏಜೆಂಟರು ಸಂಪೂರ್ಣ ಸಹಕಾರ ನೀಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಸ್.ರಮ್ಯ ಮನವಿ ಮಾಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026ರ ಸಂಬಂಧ ಹಕ್ಕು ಮತ್ತು ಆಕ್ಷೇಪಣೆಗಳ ಕುರಿತು ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮ್ಯಾಪಿಂಗ್ ಆಗದೇ ಇರುವ ಹಾಗೂ ಮತದಾರರ ವಿವರಗಳು ತಪ್ಪಾಗಿರುವ ಮತದಾರರ ಪಟ್ಟಿಯ ಲೋಪದೋಷ ತಿದ್ದುಪಡಿಗೆ ಸಂಬಂಧಿಸಿದಂತೆ ಒಟ್ಟು 68,752 ನೋಟೀಸ್‍ಗಳನ್ನು ಸೃಜಿಸಲಾಗಿದ್ದು, ಈ ಪೈಕಿ 51,219 ನೋಟೀಸ್‍ಗಳನ್ನು ತಲುಪಿಸಲಾಗಿದೆ. ಆಯೋಗದ ವೇಳಾಪಟ್ಟಿಯಂತೆ ಸೆಪ್ಟೆಂಬರ್ 6 ರಿಂದ ವಿಚಾರಣೆಗಳು ಆರಂಭಗೊಂಡಿದ್ದು, ಅಕ್ಟೋಬರ್ 12ರವರೆಗೆ ಸಹಾಯಕ ಮತದಾರರ ನೋಂದಣಾಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಈ ಹಂತದಲ್ಲಿ ಕಾರ್ಯನಿರ್ವಹಿಸಲು ಜಿಲ್ಲೆಯಾದ್ಯಂತ 102 ಸಹಾಯಕ ಮತದಾರರ ನೋಂದಣಾಧಿಕಾರಿಗಳು ಮತ್ತು ಹೆಚ್ಚುವರಿ ಸಹಾಯಕ ಮತದಾರರ ನೋಂದಣಾಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.
ಮತದಾರರ ನೋಂದಣಿ ಹಾಗೂ ಪರಿಶೀಲನಾ ನಮೂನೆಗಳಲ್ಲಿ ನಮೂದಿಸಿರುವ ಹೆಸರು, ತಂದೆಯ ಹೆಸರು ಹಾಗೂ ಆಧಾರ್ ಕಾರ್ಡ್ ಸೇರಿದಂತೆ ಇತರೆ ದಾಖಲೆಗಳಲ್ಲಿನ ವಿವರಗಳ ನಡುವೆ ವ್ಯತ್ಯಾಸಗಳು ಕಂಡುಬರುತ್ತಿವೆ. ನಿಯಮಾವಳಿ ಪ್ರಕಾರ ಕನಿಷ್ಠ ಶೇ. 60ರಷ್ಟು ಹೆಸರು ಹೊಂದಾಣಿಕೆಯಾಗದಿದ್ದಲ್ಲಿ ತಾಂತ್ರಿಕವಾಗಿ ತಡೆ ಹಿಡಿಯಲಾಗುತ್ತದೆ. ಇಂತಹ ವ್ಯತ್ಯಾಸಗಳಿರುವ ಪ್ರಕರಣಗಳನ್ನು ಗುರುತಿಸಿ ಈಗಾಗಲೇ ತಾಲ್ಲೂಕು ಕಚೇರಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟಕ್ಕೆ ಪಟ್ಟಿ ಕಳುಹಿಸಲಾಗಿದೆ. ಚಿತ್ರದುರ್ಗ ನಗರ ವ್ಯಾಪ್ತಿಯಲ್ಲೇ ಇಂತಹ ಸುಮಾರು 30 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಕಂಡುಬಂದಿದ್ದು, ಇವುಗಳ ತಿದ್ದುಪಡಿಗೆ ಕ್ರಮ ವಹಿಸಲಾಗಿದೆ ಎಂದರು.
ಅರ್ಹ ಮತದಾರರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ವಂಚಿತರಾಗಬಾರದು. ಆಯಾ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರು ತಮ್ಮ ವ್ಯಾಪ್ತಿಯಲ್ಲಿ ಇಂತಹ ವ್ಯತ್ಯಾಸಗಳಿರುವ ಮತದಾರರನ್ನು ಸಂಪರ್ಕಿಸಿ, ಸೂಕ್ತ ದಾಖಲೆಗಳೊಂದಿಗೆ ತಾಲ್ಲೂಕು ಕಚೇರಿ ಅಥವಾ ನಿಗದಿತ ಕೇಂದ್ರಗಳಲ್ಲಿ ನಡೆಯುವ ವಿಚಾರಣೆಗೆ ಹಾಜರಾಗುವಂತೆ ಜಾಗೃತಿ ಮೂಡಿಸಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026ರ ಪ್ರಕ್ರಿಯೆಯಲ್ಲಿ ಯಾವುದೇ ಒಬ್ಬ ಅರ್ಹ ಮತದಾರನೂ ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
ಯಾರೇ ಅರ್ಹ ಮತದಾರರಿದ್ದರೂ ಅವರು ಹೊರಗುಳಿಯಬಾರದು. ವಿಚಾರಣೆಗೆ ಹಾಜರಾಗಲು ಪೂರ್ವಭಾವಿಯಾಗಿ ನೋಟಿಸ್ ನೀಡಲಾಗುತ್ತಿದ್ದು, ಮತದಾರ ಅಥವಾ ಅವರ ಕುಟುಂಬಸ್ಥರು ಸೂಕ್ತ ದಾಖಲೆಗಳೊಂದಿಗೆ ಆಗಮಿಸಬೇಕು. ಒಂದು ವೇಳೆ ನಿಗದಿತ ದಿನದಂದು ಬರಲು ಸಾಧ್ಯವಾಗದಿದ್ದರೆ, ಮತ್ತೊಂದು ಅವಕಾಶವನ್ನು ಕಲ್ಪಿಸಲಾಗುವುದು. ಸರ್ಕಾರ ನೀಡಿರುವ ಜಾತಿ-ಆದಾಯ ಪ್ರಮಾಣಪತ್ರಗಳು, ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್‍ಗಳನ್ನು ನಿವಾಸಿ ದಾಖಲೆಯಾಗಿ ಸ್ವೀಕರಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಜಿಲ್ಲೆಯಲ್ಲಿ ನಮೂನೆ-6 ರಡಿ 18,000 ಯುವ ಮತದಾರರನ್ನು ನೋಂದಾಯಿಸುವ ಗುರಿ ಹೊಂದಿದ್ದು, ಇದುವರೆಗೆ 9,887 ಅರ್ಜಿಗಳು ಸ್ವೀಕೃತವಾಗಿವೆ. ಇನ್ನು ಉಳಿದಿರುವ 5,000ಕ್ಕೂ ಹೆಚ್ಚು ಯುವ ಮತದಾರರನ್ನು ಸೇರ್ಪಡೆಗೊಳಿಸಲು ಕಾಲೇಜುಗಳಲ್ಲಿ ವಿಶೇಷ ಜಾಗೃತಿ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ ಎಂದರು.
ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರು ಆಡಳಿತ ಯಂತ್ರದೊಂದಿಗೆ ಸಕ್ರಿಯವಾಗಿ ಕೈಜೋಡಿಸಿ, ಮತದಾರರ ಪಟ್ಟಿಯನ್ನು ಪರಿಶುದ್ಧ ಹಾಗೂ ದೋಷರಹಿತಗೊಳಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಚುನಾವಣಾ ತಹಶೀಲ್ದಾರ್ ಬೀಬೀ ಫಾತಿಮಾ, ಗ್ರೇಡ್-2 ತಹಶೀಲ್ದಾರ್ ಮಲ್ಲಿಕಾರ್ಜುನ ನಾಯಕ, ಜಿಲ್ಲಾ ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ, ಎಎಪಿ ಜಿಲ್ಲಾ ಕಾರ್ಯದರ್ಶಿ ಎಂ.ರಾಮಪ್ಪ, ಸಿಪಿಐ (ಎಂ) ಡಿಒಸಿ ಸಿ.ಕೆ.ಗೌಸ್‍ಪೀರ್, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯವವಂತ ಕುಮಾರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಕೆ.ಪಿ.ಸಂಪತ್ ಕುಮಾರ್, ಕಾರ್ಯದರ್ಶಿ ಸಿ.ಜೆ.ನಾಸಿರುದ್ದೀನ್, ಬಿಎಸ್‍ಪಿ ಜಿಲ್ಲಾಧ್ಯಕ್ಷ ಪ್ರಕಾಶ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಹೆಚ್.ಮೋಹನ್ ಕುಮಾರ್, ಕಾರ್ಯದರ್ಶಿ ಪ್ರಕಾಶ್ ಇದ್ದರು.


About The Author
Discover more from JANADHWANI NEWS
Subscribe to get the latest posts sent to your email.