ಚಿತ್ರದುರ್ಗ:
ಕೇಂದ್ರ ಸರ್ಕಾರ ಹೊಸದಾಗಿ ಜಾರಿಗೆ ತರಲು ಮುಂದಾಗಿರುವ ವಿಬಿ ಜಿ–ರಾಮ್ ಜಿ ಸ್ಕೀಂ ರಾಜ್ಯದ ಕೂಲಿ ಕಾರ್ಮಿಕರು ಹಾಗೂ ಗ್ರಾಮ ಪಂಚಾಯಿತಿಗಳಿಗೆ ಮರಣ ಶಾಸನವಾಗಲಿದೆ ಎಂದು ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ತೀವ್ರವಾಗಿ ಟೀಕಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋನಿಯಾ ಗಾಂಧೀಜಿಯವರ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಜಾರಿಗೆ ತಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ದೇಶದ ಅತ್ಯುತ್ತಮ ಯೋಜನೆಗಳಲ್ಲಿ ಒಂದಾಗಿದ್ದು, ಐಎಂಎಫ್ ಕೂಡ ಈ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಆದರೆ ಈಗ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಈ ಯೋಜನೆಯ ಮೂಲ ಸ್ವರೂಪವನ್ನೇ ಬದಲಾಯಿಸಿ ಹೊಸ ಸ್ಕೀಂ ತರಲು ಮುಂದಾಗಿರುವುದು ಖಂಡನೀಯ ಎಂದು ಹೇಳಿದರು.
ಈ ಹಿಂದೆ ಕಾಯಿದೆಯಾಗಿ ಜಾರಿಯಲ್ಲಿದ್ದ ಮನರೇಗಾ ಯೋಜನೆಯನ್ನು ರದ್ದುಗೊಳಿಸಿ ಸ್ಕೀಂ ರೂಪದಲ್ಲಿ ಜಾರಿಗೆ ತರುವ ಮೂಲಕ ಪಂಚಾಯಿತಿಗಳ ಅಧಿಕಾರವನ್ನು ಕಸಿದುಕೊಳ್ಳಲಾಗುತ್ತಿದೆ. ಈ ಹೊಸ ಸ್ಕೀಂನಿಂದ ಕೂಲಿ ಕಾರ್ಮಿಕರಿಗೆ ತೀವ್ರ ತೊಂದರೆ ಆಗಲಿದ್ದು, ಮಧ್ಯವರ್ತಿಗಳ ಹಾವಳಿ ಹೆಚ್ಚಾಗಲಿದೆ. ಆದ್ದರಿಂದ ಈ ಸ್ಕೀಂ ಅನ್ನು ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮಹಾತ್ಮ ಗಾಂಧೀಜಿಯವರ ಹೆಸರಿನಲ್ಲಿ ಜಾರಿಗೆ ತಂದ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಬದಲಾಯಿಸಿ ಜಿ–ರಾಮ್ ಜಿ ಎಂದು ನಾಮಕರಣ ಮಾಡುವ ಮೂಲಕ ಗಾಂಧೀಜಿಯವರನ್ನು ನಿತ್ಯ ಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಬದಲಾವಣೆ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸಲಾಗುವುದು. ಪ್ರತಿ ಗ್ರಾಮ ಪಂಚಾಯಿತಿ ಹಂತದಲ್ಲೂ ಹೋರಾಟ ಹಮ್ಮಿಕೊಳ್ಳಬೇಕಾಗಿದೆ ಎಂದು ಕರೆ ನೀಡಿದರು.
ಕೇಂದ್ರ ಸರ್ಕಾರ ಯಾವುದೇ ಚರ್ಚೆ ನಡೆಸದೇ ಏಕಾಏಕಿ ಈ ಸ್ಕೀಂ ಜಾರಿಗೆ ಮುಂದಾಗಿರುವುದು ರಾಜ್ಯಗಳ ಹಕ್ಕಿಗೆ ಧಕ್ಕೆ ತಂದಿದೆ. ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳು ಇದನ್ನು ವಿರೋಧಿಸುತ್ತಿವೆ. ಈ ಸ್ಕೀಂ ಜಾರಿಯಾಗಬಾರದೆಂದು ಜನಜಾಗೃತಿ ಮೂಡಿಸಲು ಜನವರಿ 26ರಂದು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
ಈ ಹಿಂದೆ ಮನರೇಗಾ ಯೋಜನೆಗೆ ಕೇಂದ್ರ–ರಾಜ್ಯಗಳ ಪಾಲು ಶೇ 90:10 ಇದ್ದು, ಈಗ ಶೇ 60:40ಕ್ಕೆ ಇಳಿಸಲಾಗಿದೆ. ಇದರಿಂದ ರಾಜ್ಯಗಳಿಗೆ ಶೇ 30ರಷ್ಟು ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದೆ. ಈಗಾಗಲೇ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಇದು ದೊಡ್ಡ ಆರ್ಥಿಕ ಬಾಧ್ಯತೆಯಾಗಲಿದೆ ಎಂದು ಹೇಳಿದರು.
ಹೊಸ ಸ್ಕೀಂನಲ್ಲಿ ಮಾನವ ದಿನಗಳಿಗೆ ಯಾವುದೇ ಖಾತ್ರಿ ಇಲ್ಲ, ಪಂಚಾಯಿತಿಗಳಿಗೆ ಕಾಮಗಾರಿಗಳ ಆಯ್ಕೆ ಹಕ್ಕು ನೀಡಿಲ್ಲ. ಎಲ್ಲ ನಿರ್ಧಾರಗಳನ್ನೂ ಕೇಂದ್ರ ಸರ್ಕಾರವೇ ಕೈಗೊಳ್ಳಲಿದ್ದು, ಆಯ್ದ ಪಂಚಾಯಿತಿಗಳಿಗೆ ಮಾತ್ರ ಈ ಸ್ಕೀಂ ಅನ್ವಯವಾಗುವಂತೆ ಮಾಡಲಾಗಿದೆ. ಇದು ಮನರೇಗಾ ಯೋಜನೆಯೊಂದಿಗೆ ಹೋಲಿಸಿದರೆ ಅಜಗಜಾಂತರ ವ್ಯತ್ಯಾಸ ಹೊಂದಿದೆ ಎಂದು ಸಚಿವ ಸುಧಾಕರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಎನ್.ವೈ. ಗೋಪಾಲಕೃಷ್ಣ, ಬಿ.ಜಿ. ಗೋವಿಂದಪ್ಪ, ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್, ದ್ರಾಕ್ಷಿ ರಸಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ.ಯೋಗೇಶ್ ಬಾಬು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್ಪೀರ್, ಕಾರ್ಯಾಧ್ಯಕ್ಷ ಕೆ.ಎಂ. ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಕೆ.ಪಿ. ಸಂಪತ್ಕುಮಾರ್, ಮಾಜಿ ಅಧ್ಯಕ್ಷ ಆರ್.ಕೆ. ಸರ್ದಾರ್, ಬಿ.ಟಿ. ಜಗದೀಶ್ ಹಾಗೂ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ನಂದಿನಿ ಗೌಡ ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.