ಬೆಂಗಳೂರು:
ಒಳ ಮೀಸಲಾತಿಯ ತುತ್ತು ಪರಿಶಿಷ್ಟರ ಕೈಗೆ ಬಂದಿದ್ದು ಬಾಯಿಗೆ ಬರದಂತಾಗಿದೆ ಎಂದು ನಿವೃತ್ತ ಕೆಎಎಸ್ ಅಧಿಕಾರಿ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಆಕಾಂಕ್ಷಿ ಎನ್. ರಘುಮೂರ್ತಿ ಹೇಳಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಒಳ ಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪರಿಶಿಷ್ಟರು ಹೋರಾಟದ ಮೂಲಕ ಸಂವಿಧಾನದ ಸವಲತ್ತುಗಳನ್ನು ಪಡೆಯಬೇಕಾದ ಪರಿಸ್ಥಿತಿ ಉಂಟಾಗಿರುವುದು ದೌರ್ಭಾಗ್ಯಕರವಾಗಿದೆ ಎಂದರು. ಸಂವಿಧಾನದ ಆಶಯದಂತೆ ಕೆಲಸ ಮಾಡಬೇಕಾದ ಶಾಸಕಾಂಗ ಹಾಗೂ ಕಾರ್ಯಾಂಗವು ಮುಷ್ಕರ ಮತ್ತು ಚಳುವಳಿಗಳಿಲ್ಲದೆ ಶೋಷಿತರಿಗೆ ಯಾವುದೇ ಸೌಲಭ್ಯಗಳನ್ನು ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
2022ರಲ್ಲಿ ಆಗಿನ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ತಲಾ 2 ಮತ್ತು 4 ಶೇಕಡಾ ಮೀಸಲಾತಿ ಹೆಚ್ಚಳ ಮಾಡಿತ್ತು. ಅದನ್ನು ಆಧರಿಸಿ ಈಗಿನ ಸರ್ಕಾರ ಒಳ ಮೀಸಲಾತಿ ಅನುಷ್ಠಾನಕ್ಕೆ ಮುಂದಾಗಿದ್ದು, ಇದಕ್ಕೆ ರಾಜ್ಯಪಾಲರ ಅಂಕಿತವೂ ದೊರಕಿದೆ ಎಂದು ಹೇಳಿದರು.
ಈ ಸಂಬಂಧ ಮಹೇಂದ್ರಕುಮಾರ್ ಅವರು ಇಂದ್ರಸಾಹ್ನಿ ಪ್ರಕರಣವನ್ನು ಉಲ್ಲೇಖಿಸಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯ, ಅಂತಿಮ ಆದೇಶಕ್ಕೆ ಒಳಪಟ್ಟು ಒಳ ಮೀಸಲಾತಿಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಸೂಚಿಸಿದೆ ಎಂದು ತಿಳಿಸಿದರು.
ಇನ್ನೊಂದು ಪ್ರಕರಣದಲ್ಲಿ ಅಲೆಮಾರಿ ಜನಾಂಗದವರು ಹಿಂದುಳಿದ ಹಾಗೂ ಅತಿ ಹಿಂದುಳಿದ ವರ್ಗಗಳ ಮೀಸಲಾತಿ ಕುರಿತು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ಅದಕ್ಕೂ ನ್ಯಾಯಾಲಯ ಇದೇ ರೀತಿಯ ನಿರ್ದೇಶನ ನೀಡಿದೆ ಎಂದು ಹೇಳಿದರು.
ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಹೆಚ್ಚುವರಿ ಅಡ್ವಕೇಟ್ ಜನರಲ್ ಅವರು ನೀಡಿದ ಅಭಿಪ್ರಾಯದಂತೆ, ಪರಿಶಿಷ್ಟ ಜಾತಿಗೆ 4 ಶೇಕಡಾ ಮತ್ತು ಪರಿಶಿಷ್ಟ ಪಂಗಡಕ್ಕೆ 2 ಶೇಕಡಾ ಸೇರಿ ಒಟ್ಟು 6 ಶೇಕಡಾ ಹುದ್ದೆಗಳನ್ನು ಮೀಸಲಿಟ್ಟು, ಉಳಿದ 94 ಶೇಕಡಾ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಆದರೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಹೊರಡಿಸಿರುವ ಆದೇಶದಲ್ಲಿ ಈ ಅಂಶಗಳ ಸ್ಪಷ್ಟತೆ ಇಲ್ಲದಿರುವುದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಲ್ಲಿ ಆತಂಕಕ್ಕೆ ಕಾರಣವಾಗಿದೆ ಎಂದು ಅವರು ತಿಳಿಸಿದರು.
ಈ ಕುರಿತು ಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಸಚಿವರು ತಕ್ಷಣ ಮಧ್ಯಪ್ರವೇಶಿಸಿ ಸೂಕ್ತ ಕ್ರಮ ಕೈಗೊಂಡು ರಾಜ್ಯದ ಪರಿಶಿಷ್ಟರ ಹಿತವನ್ನು ಕಾಯಬೇಕು ಎಂದು ಆಗ್ರಹಿಸಿದರು.
About The Author
Discover more from JANADHWANI NEWS
Subscribe to get the latest posts sent to your email.