ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ: ಮಹೇಶ್ವರಿ ಅವಿರೋಧ ಆಯ್ಕೆ
ಬೋಸಮ್ಮ ಮಂಜುನಾಥ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ; ಏಕೈಕ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ.






ನಾಯಕನಹಟ್ಟಿ: ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಬೋಸಮ್ಮ ಮಂಜುನಾಥ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಮಹೇಶ್ವರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಪಕ್ಷದ ಪಾಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ಚಳ್ಳಕೆರೆ ತಹಸೀಲ್ದಾರ್ ರೆಹಾನ್ ಪಾಷಾ ಅವರು ಅಧಿಕೃತವಾಗಿ ಘೋಷಿಸಿದರು.
ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ನಡೆದ ಉಪಾಧ್ಯಕ್ಷ ಸ್ಥಾನದ ಚುನಾವಣಾ ಪ್ರಕ್ರಿಯೆಯಲ್ಲಿ ನಿಗದಿಪಡಿಸಿದಂತೆ ಬೆಳಗ್ಗೆ 10ರಿಂದ 11 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಈ ಸಂದರ್ಭದಲ್ಲಿ ಮಹೇಶ್ವರಿ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದು, ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರು ಏಕೈಕ ಅಭ್ಯರ್ಥಿಯಾಗಿದ್ದರು. ಹೀಗಾಗಿ ಯಾವುದೇ ಸ್ಪರ್ಧೆಯಿಲ್ಲದೆ ಮಹೇಶ್ವರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರೆಹಾನ್ ಪಾಷಾ ತಿಳಿಸಿದರು.
ಅಭಿವೃದ್ಧಿ ಕಾರ್ಯಗಳಿಗೆ ಪ್ರಾಮಾಣಿಕವಾಗಿ ಶ್ರಮಿಸುವೆ: ಮಹೇಶ್ವರಿ.
ನೂತನ ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಮಹೇಶ್ವರಿ ಮಾತನಾಡಿ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಿ ಅವಿರೋಧವಾಗಿ ಆಯ್ಕೆ ಮಾಡಿದ ಸರ್ವ ಸದಸ್ಯರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಚುನಾವಣಾ ಪ್ರಕ್ರಿಯೆಗೆ ಸಹಕರಿಸಿದ ಮುಖ್ಯಾಧಿಕಾರಿಗಳು, ಪಟ್ಟಣ ಪಂಚಾಯಿತಿ ಸಿಬ್ಬಂದಿ ವರ್ಗದವರು ಹಾಗೂ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಬೆಂಬಲ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಎಲ್ಲರ ಸಹಕಾರದೊಂದಿಗೆ ಪಟ್ಟಣದ ಅಭಿವೃದ್ಧಿ ಕಾರ್ಯಗಳಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಾಲರಾಜ್, ತಳಕು ಮತ್ತು ನಾಯಕನಹಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ರೆಡ್ಡಿ, ಪ್ರಭುಸ್ವಾಮಿ, ಬಂಡೆ ಕಪಿಲೆ ಓಬಣ್ಣ, ಮಲ್ಲೂರಹಟ್ಟಿ ಗೌಡ್ರು ತಿಪ್ಪೇಸ್ವಾಮಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಶ್ರೀಕಾಂತ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ಅನ್ವರ್, ಸದಸ್ಯರಾದ ಅಬಕಾರಿ ತಿಪ್ಪೇಸ್ವಾಮಿ, ಕೆ.ಪಿ. ತಿಪ್ಪೇಸ್ವಾಮಿ, ಪಿ. ಓಬಯ್ಯ ದಾಸ್, ಎಂ.ಟಿ. ಮಂಜುನಾಥ್, ಸರ್ವಮಂಗಳ ಉಮಾಪತಿ, ಈರಕ್ಕ, ಸುನಿತಾ ಜಿ.ಬಿ., ಮುದಿಯಪ್ಪ, ಪಾಲಮ್ಮ ಹಾಗೂ ಗುರು ಶಾಂತಮ್ಮ ಉಪಸ್ಥಿತರಿದ್ದರು.
ಕಾಂಗ್ರೆಸ್ ಮುಖಂಡರಾದ ಬೋಸೆದೇವರಹಟ್ಟಿ ಧನಂಜಯ, ಬಗರ್ ಹುಕುಂ ಕಮಿಟಿ ಸದಸ್ಯ ಪಿ.ಜಿ. ಬೋರನಾಯಕ, ಮಲ್ಲೂರಹಳ್ಳಿ ಜೆಸಿಬಿ ಮಲ್ಲಿಕಾರ್ಜುನ, ಚನ್ನಬಸಯ್ಯನಹಟ್ಟಿ ಕೆ.ಓ. ರಾಜಯ್ಯ, ಕೊರಡಿಹಳ್ಳಿ ಸುರೇಂದ್ರಪ್ಪ, ರಾಮಸಾಗರ ಕಾಟಯ್ಯ, ವಕೀಲ ಮಲ್ಲೇಶ್, ಗಿಡ್ಡಾಪುರ ರುದ್ರಮುನಿ ಹಾಗೂ ಜಾಗನೂರಹಟ್ಟಿ ಪಿ. ಮುತ್ತಯ್ಯ ಸೇರಿದಂತೆ ಹಲವು ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.
