November 13, 2026
IMG-20261113-WA0163


ನಾಯಕನಹಟ್ಟಿ: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ, ಅನಾವರಣಗೊಳಿಸಲು ಪ್ರತಿಭಾ ಕಾರಂಜಿಯಂತಹ ವೇದಿಕೆಗಳು ಸಹಕಾರಿಯಾಗಿವೆ ಎಂದು ಚಳ್ಳಕೆರೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಅಭಿಪ್ರಾಯಪಟ್ಟರು.

ಶುಕ್ರವಾರ ಹೋಬಳಿಯ ಗೌಡಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೋಗಿಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ 2026-27ನೇ ಸಾಲಿನ ನಾಯಕನಹಟ್ಟಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣ ಇಲಾಖೆಯು ಪ್ರತಿವರ್ಷ ಮಕ್ಕಳಲ್ಲಿರುವ ಪ್ರತಿಭೆ ಹಾಗೂ ಸೃಜನಶೀಲತೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಮಕ್ಕಳಲ್ಲಿ ಅಡಗಿರುವ ವಿವಿಧ ರೀತಿಯ ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆ ಹಾಗೂ ಸೃಜನಾತ್ಮಕ ಕೌಶಲ್ಯಗಳನ್ನು ಹೊರತರುವಲ್ಲಿ ಈ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸುತ್ತದೆ. ಇಂತಹ ಕಾರ್ಯಕ್ರಮಗಳು ಮಕ್ಕಳಿಗೆ ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಆಸಕ್ತಿ ಬೆಳೆಸಲು ನೆರವಾಗುತ್ತವೆ. ವಿದ್ಯಾರ್ಥಿಗಳ ಆತ್ಮವಿಶ್ವಾಸ ಮತ್ತು ವ್ಯಕ್ತಿತ್ವ ವಿಕಸನಕ್ಕೂ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ನಾಯಕನಹಟ್ಟಿ ಕ್ಲಸ್ಟರ್ ವ್ಯಾಪ್ತಿಯ 26 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ ಛದ್ಮವೇಷ, ದೇಶಭಕ್ತಿ ಗೀತೆ, ಚಿತ್ರಕಲೆ, ಆಶುಭಾಷಣ ಸೇರಿದಂತೆ ವಿವಿಧ ಸಾಂಸ್ಕೃತಿಕ ಹಾಗೂ ಸೃಜನಾತ್ಮಕ ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳ ಕಲಾ ಪ್ರದರ್ಶನಗಳು ಕಾರ್ಯಕ್ರಮಕ್ಕೆ ಮೆರುಗು ನೀಡಿದವು.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಬಿ. ತಿಪ್ಪೇಸ್ವಾಮಿ, ಉಪಾಧ್ಯಕ್ಷ ಎಂ. ರಂಗನಾಥ್, ಪ್ರಥಮ ದರ್ಜೆ ಗುತ್ತಿಗೆದಾರ ಡಿ.ಜಿ. ಗೋವಿಂದಪ್ಪ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಎಚ್.ಬಿ. ತಿಪ್ಪೇಸ್ವಾಮಿ, ಎಸ್. ವೆಂಕಟೇಶ್ ದಳಪತಿ, ಎ.ಜಿ. ಮಂಜಣ್ಣ, ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ಹೋಬಳಿ ಅಧ್ಯಕ್ಷ ಕೆ.ಜಿ. ಮಂಜುನಾಥ್, ಎಸ್‌ಡಿಎಂಸಿ ಮಾಜಿ ಉಪಾಧ್ಯಕ್ಷ ಡಿ.ಬಿ. ಬಾಲರಾಜ್, ಕರಿ ಬಸವರಾಜ್, ಜಿ.ಎನ್. ನಾಗೇಂದ್ರ, ಬಿಆರ್‌ಸಿ ಎಚ್.ಪಿ. ಮಂಜುಬಾಬು, ಅಕ್ಷರ ದಾಸೋಹ ನಿರ್ದೇಶಕ ಮಂಜುನಾಥ ಸ್ವಾಮಿ, ಟಿಪಿಇಒ ಸುನೀಲ್ ನಾಯ್ಕ, ಇಸಿಒ ಜೆ. ತಿಪ್ಪೇಸ್ವಾಮಿ, ಲಕ್ಷ್ಮೀಕಾಂತ ರೆಡ್ಡಿ, ಬಿಆರ್‌ಪಿ ತಿಪ್ಪೇಸ್ವಾಮಿ, ಆರ್. ಸದಾಶಿವಯ್ಯ, ಆರ್. ಈಶ್ವರಪ್ಪ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ ಪಿ.ಎಂ. ವಿಶ್ವನಾಥ, ಸಿಆರ್‌ಪಿ ಜಿ. ಪಾಲಯ್ಯ, ಬಿಟಿ ಓಂಕಾರಪ್ಪ, ಕೆ. ಶಿವಣ್ಣ, ಸಿ. ಹನುಮಂತಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ವಿ. ಈಶ್ವರಪ್ಪ, ಹೋಬಳಿ ಅಧ್ಯಕ್ಷ ಬಿ.ಎಚ್. ತಿಪ್ಪೇರುದ್ರಪ್ಪ, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ತಿಪ್ಪೇಸ್ವಾಮಿ, ಜೋಗಿಹಟ್ಟಿ ಶಾಲೆಯ ಬಡ್ತಿ ಮುಖ್ಯ ಶಿಕ್ಷಕ ಎಚ್. ಮಲ್ಲಿಕಾರ್ಜುನಯ್ಯ, ಎನ್. ತಿಪ್ಪೇಸ್ವಾಮಿ ಸೇರಿದಂತೆ ನಾಯಕನಹಟ್ಟಿ ಕ್ಲಸ್ಟರ್ ವ್ಯಾಪ್ತಿಯ ಹಿರಿಯ ಶಿಕ್ಷಕರು, ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading