January 29, 2026
FB_IMG_1768410110719.jpg

ಚಿತ್ರದುರ್ಗ ಜ. 14 :
ಜಿಲ್ಲೆಯಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಕುರಿತು ವ್ಯಾಪಕವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರೋಣ ವಾಸುದೇವ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ವಿವಿಧ ಅಧಿಕಾರಿಗಳೊಂದಿಗೆ ಏರ್ಪಡಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಸ್ತೆ ಅಪಘಾತಗಳು ಅಪಾಯಕಾರಿಯಾಗಿದ್ದು, ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಪ್ರತಿಯೊಬ್ಬರೂ ಸಂಚಾರ ನಿಯಮಗಳನ್ನು ಪಾಲಿಸಬೇಕು. ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ವ್ಯಾಪಕವಾಗಿ ಹಮ್ಮಿಕೊಳ್ಳುವಂತೆ ಈಗಾಗಲೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಕೂಡ ಸೂಚನೆ ನೀಡಿದೆ. ಅದರಂತೆ ಪೊಲೀಸ್ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಜನಜಾಗೃತಿ ಮೂಡಿಸುವಂತಹ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಯೋಜಿಸುವಂತೆ ನ್ಯಾ. ರೋಣ ವಾಸುದೇವ ಅವರು ಸೂಚನೆ ನೀಡಿದರು.ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ 670 ತಪಾಸಣೆಗಳನ್ನು ಕೈಗೊಂಡಿದ್ದು, ಈ ಪೈಕಿ 05 ಗಂಡು, 06 ಹೆಣ್ಣು ಸೇರಿದಂತೆ ಒಟ್ಟು 11 ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಲಾಗಿದೆ. ಇದರಲ್ಲಿ 07 ಪ್ರಕರಣಗಳಲ್ಲಿ ಮೊಕದ್ದಮೆಗಳನ್ನು ಹೂಡಲಾಗಿದೆ. ಬಾಲಕಾರ್ಮಿಕ ಪದ್ಧತಿ ನಿಷೇಧ ಹಾಗೂ ಕಾಯ್ದೆಯ ಕುರಿತು ಜಿಲ್ಲೆಯಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕನಿಷ್ಟ ವೇತನ ಕಾಯ್ದೆಯಡಿ 06 ಕ್ಲೇಮ್ ಅರ್ಜಿಗಳನ್ನು ಸಹಾಯಕ ಕಾರ್ಮಿಕ ಆಯುಕ್ತರಲ್ಲಿ ದಾಖಲಿಸಿದ್ದು, 01 ಮೊಕದ್ದಮೆಯನ್ನು ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ದಾಖಲಿಸಲಾಗಿದೆ ಎಂದು ಕಾರ್ಮಿಕ ಇಲಾಖೆ ಅಧಿಕಾರಿಗಳು ಸಭೆಗೆ ವಿವರ ನೀಡಿದರು. ಬಾಲ ಕಾರ್ಮಿಕ ಪದ್ಧತಿ ಸಾಮಾಜಿಕ ಪಿಡುಗಾಗಿದ್ದು, ಇದರ ನಿರ್ಮೂಲನೆ ಅಗತ್ಯವಿದೆ. ಹೀಗಾಗಿ ಜಿಲ್ಲೆಯಲ್ಲಿ ಬಾಲಕಾರ್ಮಿಕರನ್ನು ಪತ್ತೆ ಹಚ್ಚುವ ಕಾರ್ಯ ಪರಿಣಾಮಕಾರಿಯಾಗಿ ಆಗಬೇಕು ಎಂದು ನ್ಯಾ. ರೋಣ ವಾಸುದೇವ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕಳೆದ 2023 ರಲ್ಲಿ 131, 2024 ರಲ್ಲಿ 150 ಹಾಗೂ 2025 ರ ಡಿಸೆಂಬರ್ ಅಂತ್ಯದವರೆಗೆ 167 ಸೇರಿದಂತೆ ಕಳೆದ ಮೂರು ವರ್ಷಗಳಲ್ಲಿ ಒಟ್ಟು 448 ಪೋಕ್ಸೋ ಕೇಸ್‍ಗಳು ದಾಖಲಾಗಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾಹಿತಿ ನೀಡಿದರು. ಪೋಕ್ಸೋ ಕಾಯ್ದೆ ಕುರಿತಂತೆ ಶಾಲಾ ಕಾಲೇಜು ಹಂತಗಳಲ್ಲಿ ವ್ಯಾಪಕವಾಗಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ನ್ಯಾ. ರೋಣ ವಾಸುದೇವ ಅವರು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಆಕಾಶ್, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿಜಯ್, 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೀರಣ್ಣ ಸೋಮಶೇಖರ್, 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಗಂಗಾಧರ ಚನ್ನಬಸಪ್ಪ ಹಡಪದ ಸೇರಿದಂತೆ ವಿವಿಧ ನ್ಯಾಯಾಧೀಶರುಗಳಾದ ಮಮತಾ ಡಿ., ಚೈತ್ರಾ ಎ.ಎಂ., ಉಜ್ವಲ ವೀರಣ್ಣ ಸಿದ್ದಣ್ಣನವರ, ರಶ್ಮಿ ಎಸ್. ಮರಡಿ, ಪೂಜಾ ಬೆಲಕೇರಿ, ಡಿವೈಎಸ್‍ಪಿ ದಿನಕರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಕಾಳಿಸಿಂಘೆ, ಡಿಡಿಪಿಐ ಮಂಜುನಾಥ್, ಡಿಡಿಪಿಯು ತಿಮ್ಮಯ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ನ್ಯಾಯಾಂಗ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading