ಗೌರಸಮುದ್ರ: ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನವೆಂಬರ್ 14ರಂದು ಮಕ್ಕಳ ದಿನಾಚರಣೆಯನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ರೇವತಿ, ದ್ವಿತೀಯ ಸ್ಥಾನ ಪಡೆದ ಸಹನಾ ಹಾಗೂ ತೃತೀಯ ಸ್ಥಾನ ಪಡೆದ ಮೋನಿಕಾ ಅವರಿಗೆ ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀಮತಿ ಪಿ. ಶುಭಾಶಿನಿ ಅವರ ವತಿಯಿಂದ ಶೀಲ್ಡ್, ಪುಸ್ತಕ, ಪೆನ್ ಹಾಗೂ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.
ವಿಶೇಷವೆಂದರೆ, ಶ್ರೀಮತಿ ಪಿ. ಶುಭಾಶಿನಿ ಅವರು ಕಳೆದ ಐದು ವರ್ಷಗಳಿಂದ ನಿರಂತರವಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರುತ್ತಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯವಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿವರ್ಷವೂ ಹೆಣ್ಣು ಮಕ್ಕಳು ಶೈಕ್ಷಣಿಕ ಸಾಧನೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಮುಂದಿನ ವರ್ಷವಾದರೂ ಗಂಡು ಮಕ್ಕಳು ಉತ್ತಮ ಅಂಕಗಳನ್ನು ಗಳಿಸಿ ಸಾಧನೆ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಅನಸೂಯ ಟೀಚರ್, ವಿದ್ಯಾವತಿ ಟೀಚರ್, ನಾಗರಾಜು ಸರ್, ಹುಲಿಗನ್ನ ಸರ್ ಹಾಗೂ ನಿವೃತ್ತ ಶಿಕ್ಷಕರಾದ ಜಿ.ಎಂ. ರುದ್ರನಾಯಕ ಸರ್, ಶಶಿಕುಮಾರ್, ನಾಗರಾಜು, ರವಿ ಮತ್ತು ಮಹಾಂತೇಶ್ ಸೇರಿದಂತೆ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮಕ್ಕಳ ದಿನಾಚರಣೆಯ ಅಂಗವಾಗಿ ನಡೆದ ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿ, ಸಾಧನೆಯ ಹಂಬಲ ಹಾಗೂ ಸ್ಪರ್ಧಾತ್ಮಕ ಮನೋಭಾವವನ್ನು ಹೆಚ್ಚಿಸುವಲ್ಲಿ ಪ್ರೇರಣಾದಾಯಕವಾಗಿ ಮೂಡಿಬಂತು.
About The Author
Discover more from JANADHWANI NEWS
Subscribe to get the latest posts sent to your email.
