ಹಿರಿಯೂರು:
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳೆಯರಿಗೆ ಆರ್ಥಿಕ ನೆರವು ನೀಡುವುದರ ಜೊತೆಗೆ ಮಹಿಳೆಯರು ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳಲು ಅಗತ್ಯವಾದ ಉದ್ಯೋಗ ತರಬೇತಿ ಕಾರ್ಯಕ್ರಮಗಳನ್ನು ಸಹ ಹಮ್ಮಿಕೊಳ್ಳುತ್ತಾ ಬಂದಿದ್ದು, ಮಧ್ಯಮವರ್ಗದ ಕುಟುಂಬಗಳಿಗೆ ಈ ಯೋಜನೆಯು ಒಂದು ವರದಾನವಾಗಿದೆ ಎಂಬುದಾಗಿ ನಗರಸಭೆ ಉಪಾಧ್ಯಕ್ಷೆ ಶ್ರೀಮತಿ ಅಂಬಿಕಾಆರಾಧ್ಯ ಹೇಳಿದರು.
ನಗರದ ರೋಟರಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ), ವಿ.ವಿ.ಪುರ ಹಾಗೂ ನಗರಸಭೆ ಹಿರಿಯೂರು ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದ ಅನಕ್ಷರಸ್ಥ ಮಹಿಳೆಯರೂ ಸಹ ಬದುಕಿನಲ್ಲಿ ಸ್ವಾವಲಂಬನೆ ಸಾಧಿಸಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆರವಾಗಿದ್ದು, ತಾಲ್ಲೂಕಿನಲ್ಲಿ ಮಹಿಳಾ ವಿಚಾರಗೋಷ್ಟಿಯನ್ನು ನಡೆಸುವ ಮೂಲಕ ತಮಲ್ಲಿರುವ ಜ್ಞಾನವನ್ನು ವಿಚಾರ ವಿನಿಮಯ ಮಾಡಿಕೊಂಡು ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಲು ಒಂದು ಉತ್ತಮ ವೇದಿಕೆಯನ್ನು ಸೃಷ್ಟಿಸಿದೆ ಎಂಬುದಾಗಿ ಅವರು ಹೇಳಿದರು.
ಇದೇ ಸಂದರ್ಭದಲ್ಲಿ ವಕೀಲರು ಹಾಗೂ ಕಾನೂನು ಸಲಹೆಗಾರರಾದ ಶ್ರೀಮತಿ ಸೌಮ್ಯ, ನಿವೃತ್ತ ಶಿಕ್ಷಕರಾದ ಶ್ರೀಮತಿ ಯಮುನ ಸಂಸ್ಕಾರ ಸಂಸ್ಕೃತಿಯ ಬಗ್ಗೆ ಮಾಹಿತಿ ನೀಡಿದರು.ಯೋಜನಾಧಿಕಾರಿಗಳಾದ ಆರ್.ಅನಿಲ್ ವಿ.ವಿ.ಪುರ ಕಾರ್ಯಕ್ರಮಕ್ಕೆ ಎಲ್ಲರನ್ನೂ ಸ್ವಾಗತಿಸಿದರು.
ಈ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕರಾದ ವಿನಯ್ ಕುಮಾರ್ ಸುವರ್ಣ ರವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿಗಳು, ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು, ಜ್ಞಾನವಿಕಾಸ ಕೇಂದ್ರದ ಸದಸ್ಯರುಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
