
ಚಿತ್ರದುರ್ಗ ಏ. 17
ಚಿತ್ರದುರ್ಗದಲ್ಲಿ ಪ್ರೊ. ಎಂ. ಗೋವಿಂದರಾವ್ ಅಧ್ಯಕ್ಷತೆಯ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಬೆಂಗಳೂರು ವಿಭಾಗ ಮಟ್ಟದ ಸಂವಾದ ಸಭೆ ಏ. 28 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದು, ಸಭೆಯಲ್ಲಿ ತುಮಕೂರು, ದಾವಣಗೆರೆ, ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳ ಜನಪ್ರತಿನಿಧಿಗಳು, ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸುವರು. ಹೀಗಾಗಿ ಈ ಸಂವಾದ ಸಭೆಯನ್ನು ವ್ಯವಸ್ಥಿತವಾಗಿ ಕೈಗೊಳ್ಳಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಬೆಂಗಳೂರು ವಿಭಾಗ ಮಟ್ಟದ ಸಂವಾದ ಸಭೆಯನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ಏರ್ಪಡಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಡಾ. ಡಿ.ಎಂ. ನಂಜುಂಡಪ್ಪ ವರದಿಯು ಸುಮಾರು 22 ವರ್ಷಗಳಷ್ಟು ಹಳೆಯದಾಗಿದ್ದು, ಆ ಸಂದರ್ಭದಲ್ಲಿ ಇದ್ದಂತಹ 175 ತಾಲ್ಲೂಕುಗಳ ಸಂಖ್ಯೆ ಈಗ 240 ಆಗಿದೆ. ಹೀಗಾಗಿ ಕಳೆದ 2023 ರ ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ, ಡಾ. ಡಿ.ಎಂ. ನಂಜುಂಡಪ್ಪ ವರದಿಯ ಅನುಷ್ಠಾನದಿಂದ ತಾಲ್ಲೂಕುಗಳಲ್ಲಿ ಅಭಿವೃದ್ಧಿ ಹೊಂದಿರುವ ಹಾಗೂ ಅಭಿವೃದ್ಧಿ ಹೊಂದದಿರುವ ಬಗ್ಗೆ ಗುರುತಿಸಿ, ಹೊಸದಾಗಿ ಸೂಚ್ಯಂಕವನ್ನು ಕಂಡು ಹಿಡಿದು ಪ್ರಾದೇಶಿಕ ಅಸಮತೋಲನವನ್ನು ನಿವಾರಣೆ ಮಾಡಲು ರಾಜ್ಯ ಸರ್ಕಾರವು ಆರ್ಥಿಕ ತಜ್ಞ ಪ್ರೊ. ಎಂ. ಗೋವಿಂದರಾವ್ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯನ್ನು ರಚಿಸಿದ್ದು, ಸಮಿತಿಯ ತೀರ್ಮಾನದಂತೆ ಜಿಲ್ಲಾ ಹಂತದಲ್ಲಿ ಕ್ಷೇತ್ರ ಭೇಟಿಗಳನ್ನು ಹಮ್ಮಿಕೊಂಡು ಪ್ರಾಥಮಿಕ ಮಾಹಿತಿ ಕಲೆ ಹಾಕಲು ಸಭೆಗಳನ್ನು ಏರ್ಪಡಿಸಿ, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ಉದ್ದಿಮೆದಾರರು, ವರ್ತಕರು ಮತ್ತು ಸಾರ್ವಜನಿಕರಿಂದ ಮನವಿ, ಅಭಿಪ್ರಾಯ ಹಾಗೂ ಸಲಹೆಗಳನ್ನು ಪಡೆಯಲು ಮುಂದಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರು ವಿಭಾಗದಲ್ಲಿ ಬರುವ ತುಮಕೂರು, ದಾವಣಗೆರೆ, ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ಸಂವಾದ ಸಭೆಯನ್ನು ಬರುವ ಏ. 28 ರಂದು ಚಿತ್ರದುರ್ಗದಲ್ಲಿ ನಡೆಸಲಿದೆ. ಹೀಗಾಗಿ ಈ ಸಭೆಗೆ ನಾಲ್ಕೂ ಜಿಲ್ಲೆಗಳ ಲೋಕಸಭೆ, ರಾಜ್ಯಸಭೆ ಸದಸ್ಯರು, ವಿಧಾನಸಭೆ, ವಿಧಾನಪರಿಷತ್ ಸದಸ್ಯರು, ಉನ್ನತ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಚೇಂಬರ್ ಆಫ್ ಕಾಮರ್ಸ್‍ನವರು ಮುಂತಾದವರು ಜಿಲ್ಲೆಗೆ ಆಗಮಿಸಲಿದ್ದಾರೆ. ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ಇಲಾಖೆಗೆ ಸಂಬಂಧಿಸಿದ ಕಾರ್ಯಕ್ರಮ ಇದಾಗಿದ್ದು, ಹೀಗಾಗಿ ಎಲ್ಲ ಜನಪ್ರತಿನಿಧಿಗಳು, ಉನ್ನತ ಅಧಿಕಾರಿಗಳು, ಸಂಘ ಸಂಸ್ಥೆಗಳನ್ನು ಜಿಲ್ಲೆಗೆ ಗೌರವಯುತವಾಗಿ ಬರಮಾಡಿಕೊಂಡು, ಅವರಿಗೆ ಉತ್ತಮ ವ್ಯವಸ್ಥೆ ಕಲ್ಪಿಸಿಕೊಡಬೇಕಿದೆ. ಈ ನಿಟ್ಟಿನಲ್ಲಿ ಪ್ರತಿ ಜಿಲ್ಲೆಗೂ ಪ್ರತ್ಯೇಕವಾಗಿ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗುವುದು. ಈ ಅಧಿಕಾರಿಗಳು ಆಯಾ ಜಿಲ್ಲೆಯ ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಿಕೊಂಡು, ಜನಪ್ರತಿನಿಧಿಗಳು, ಉನ್ನತ ಅಧಿಕಾರಿಗಳು, ಸಂಘ ಸಂಸ್ಥೆಗಳ ಬರುವಿಕೆ ಬಗ್ಗೆ ಮಾಹಿತಿ ಸಂಗ್ರಹಿಸಬೇಕು, ಹಾಗೂ ಅವರ ವಾಸ್ತವ್ಯಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಬೇಕು. ವಹಿಸಲಾಗುವ ಜವಾಬ್ದಾರಿಯನ್ನು ಆಯಾ ಅಧಿಕಾರಿಗಳು ಸಮರ್ಪಕವಾಗಿ ನಿರ್ವಹಿಸಿ, ಯಾವುದೇ ಕೊರತೆ ಆಗದ ರೀತಿ ಸಿದ್ಧತೆ ಮಾಡಿಕೊಳ್ಳಬೇಕು, ಶಿಷ್ಟಾಚಾರ ಪಾಲನೆಯಲ್ಲಿ ಯಾವುದೇ ಲೋಪದೋಷಗಳು ಆಗಬಾರದು ಎಂದು ಸೂಚನೆ ನೀಡಿದರು.
ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯು ಪ್ರಮುಖವಾಗಿ ಆಯಾ ಜಿಲ್ಲೆಯಲ್ಲಿ ತಾಲ್ಲೂಕುವಾರು ಅಭಿವೃದ್ಧಿ ಕುರಿತಂತೆ ಅಂಕಿ-ಅಂಶ ಸಂಗ್ರಹಣೆಗೆ ಹೆಚ್ಚು ಒತ್ತು ನೀಡುವುದರಿಂದ, ಸಂಬಂಧಿಸಿದ ಅಧಿಕಾರಿಗಳು ಆಯಾ ತಾಲ್ಲೂಕು ವ್ಯಾಪ್ತಿಯಲ್ಲಿನ ಹಾಗೂ ಜಿಲ್ಲಾ ಮಟ್ಟದಲ್ಲಿನ ಜನಸಂಖ್ಯೆ, ಸಾಕ್ಷರತೆ ಪ್ರಮಾಣ, ಎಸ್‍ಸಿಪಿ/ಟಿಎಸ್‍ಪಿ ಯೋಜನೆಗಳ ಅನುಷ್ಠಾನ, ಅನುದಾನ ಹಂಚಿಕೆ, ಅನುದಾನ ಖರ್ಚು-ವೆಚ್ಚಗಳ ವಿವರ, ಆರೋಗ್ಯ ಸೂಚ್ಯಂಕ, ವಿವಿಧ ಯೋಜನೆಗಳ ಅನುಷ್ಠಾನ ಕುರಿತು ಸೇರಿದಂತೆ ಸಮಗ್ರ ವಿವರವನ್ನು ಸಂಗ್ರಹಿಸಿ, ಪಿಪಿಟಿ ಮೂಲಕ ಮಾಹಿತಿಯನ್ನು ಸಭೆಗೆ ಒದಗಿಸುವಂತಾಗಬೇಕು. ಚಿತ್ರದುರ್ಗ ಜಿಲ್ಲೆಯೂ ಸೇರಿದಂತೆ ಎಲ್ಲ 04 ಜಿಲ್ಲೆಗಳ ಅಂಕಿ-ಅಂಶಗಳನ್ನು ಆಯಾ ಜಿಲ್ಲಾಡಳಿತದಿಂದ ಸಂಗ್ರಹಿಸಿ, ಪಿಪಿಟಿ ವರದಿ ಸಿದ್ಧಪಡಿಸಿಕೊಂಡು, ಸಮಿತಿ ಸಭೆಯಲ್ಲಿ ಕೇಳಲಾಗುವ ಎಲ್ಲ ಮಾಹಿತಿಯೂ ಒಂದೆಡೆ ದೊರೆಯುವ ರೀತಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಗಾಯತ್ರಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಚೇಂಬರ್ ಆಫ್ ಕಾಮರ್ಸ್‍ನ ಪದಾಧಿಕಾರಿಗಳು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.