August 17, 2026
FB_IMG_1786979715762



ಬೆಂಗಳೂರು: ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ವಿಳಂಬವಾಗಬಾರದು. ಬಾಕಿ ಇರುವ ಯೋಜನೆಗಳು ಹಾಗೂ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಿ, ಸರ್ಕಾರದ ಯೋಜನೆಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ತಲುಪುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವ ಟಿ. ರಘುಮೂರ್ತಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಇಲಾಖೆಯ ಕಾರ್ಯವೈಖರಿ ಹಾಗೂ ವಿವಿಧ ಯೋಜನೆಗಳ ಅನುಷ್ಠಾನದ ಪ್ರಗತಿ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು.
ಇಲಾಖೆಯಲ್ಲಿ ಈಗಾಗಲೇ ಕೈಗೊಂಡಿರುವ ಎಲ್ಲ ಯೋಜನೆಗಳ ಅನುಷ್ಠಾನದ ಸಮಗ್ರ ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಪ್ರತಿಯೊಂದು ಯೋಜನೆ ಯಾವ ಹಂತದಲ್ಲಿದೆ, ಬಾಕಿ ಇರುವ ಕಾಮಗಾರಿಗಳು ಯಾವುವು ಹಾಗೂ ಅವುಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಕ್ರಮಗಳೇನು ಎಂಬುದರ ಕುರಿತು ಸ್ಪಷ್ಟ ಮಾಹಿತಿ ನೀಡುವಂತೆ ನಿರ್ದೇಶನ ನೀಡಿದರು.
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಯೋಜನೆಗಳು ಸಮಾಜದ ದುರ್ಬಲ ವರ್ಗಗಳ ಅಭಿವೃದ್ಧಿಗೆ ನೇರವಾಗಿ ಸಂಬಂಧಿಸಿರುವುದರಿಂದ, ಅವುಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಸಚಿವರು ಹೇಳಿದರು. ಬಾಕಿ ಇರುವ ಯೋಜನೆಗಳನ್ನು ಗುರುತಿಸಿ, ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಶಿಕ್ಷಣ, ವಸತಿ, ಆರ್ಥಿಕ ಸಬಲೀಕರಣ, ಮೂಲಸೌಕರ್ಯ ಸೇರಿದಂತೆ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳ ಅನುಷ್ಠಾನಕ್ಕೆ ವೇಗ, ಸಮನ್ವಯ ಮತ್ತು ಪರಿಣಾಮಕಾರಿ ಕಾರ್ಯನಿರ್ವಹಣೆ ಅಗತ್ಯವಾಗಿದೆ. ಪರಿಶಿಷ್ಟ ಪಂಗಡಗಳ ಸಮಗ್ರ ಅಭಿವೃದ್ಧಿಯೇ ಸರ್ಕಾರದ ಆದ್ಯತೆಯಾಗಿದ್ದು, ಇಲಾಖೆಯ ಪ್ರತಿಯೊಂದು ಯೋಜನೆಯೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುವ ನಿಟ್ಟಿನಲ್ಲಿ ನಿರಂತರವಾಗಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಟಿ. ರಘುಮೂರ್ತಿ ತಿಳಿಸಿದರು.
ಸಭೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಕನಗವಲ್ಲಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ದುಡಘಂಟಿ, ಇಲಾಖೆಯ ನಿರ್ದೇಶಕ ಅಶೋಕ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading