September 15, 2025
1747531846842.jpg



ಚಿತ್ರದುರ್ಗಮೇ.17:
ದಾವಣಗೆರೆ -ಚಿತ್ರದುರ್ಗ- ತುಮಕೂರು ನೇರ ರೈಲ್ವೆ ಯೋಜನೆಯನ್ನು 2027ರ ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳಿಸಿ, ಲೋಕಾರ್ಪಣೆಗೊಳಿಸಲಾಗುವುದು ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ದಾವಣಗೆರೆ-ಚಿತ್ರದುರ್ಗ-ತುಮಕೂರು ನೂತನ ರೈಲ್ವೆ ಮಾರ್ಗದ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಳೆದ 20 ರಿಂದ 30 ವರ್ಷಗಳವರೆಗೆ ದೇಶದಲ್ಲಿ ನೆನೆಗುದಿಗೆ ಬಿದ್ದಿರುವ ಎಲ್ಲ 7.25 ಲಕ್ಷ ಯೋಜನೆಗಳಿದ್ದವು, ಈ ಯೋಜನೆಗಳನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸುತ್ತಿದ್ದೇವೆ. 33 ಸಾವಿರ ಕೋಟಿ ರೂಪಾಯಿಗಳ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.
ದೇಶ ಅಭಿವೃದ್ಧಿಯಾಗಬೇಕಾದರೆ ದೇಶದ ಎಲ್ಲ ರಾಜ್ಯಗಳು ಅಭಿವೃದ್ಧಿಯಾಗಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿಯವರ ಆಶಯವಾಗಿದ್ದು, ಪ್ರತಿಷ್ಟಿತ ಯೋಜನೆಯಾದ ರಾಯದುರ್ಗ-ತುಮಕೂರು ಯೋಜನೆಯು ಕೂಡ ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ಮುಕ್ತಾಯವಾಗಿದ್ದು, ಟೆಂಡರ್ ಕರೆಯಲಾಗಿದ್ದು, ಇನ್ನೂ ಎರಡು ಕಡೆ ಶೀಘ್ರದಲ್ಲಿ ಕೆಲಸ ಪ್ರಾರಂಭವಾಗಲಿದೆ. ಅದೇ ರೀತಿ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಯೋಜನೆಯ ಸಮಸ್ಯೆಯನ್ನು ಬಗೆಹರಿಸಿ, ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ಶೀಘ್ರವಾಗಿ ಕಾಮಗಾರಿ ಅನುಷ್ಠಾನಗೊಳಿಸಲಾಗುವುದು. ದಾವಣಗೆರೆ -ಚಿತ್ರದುರ್ಗ- ತುಮಕೂರು ನೇರ ರೈಲ್ವೆ ಯೋಜನೆ ಹಾಗೂ ತುಮಕೂರು-ರಾಯದುರ್ಗ ರೈಲ್ವೆ ಮಾರ್ಗವನ್ನು 2027 ರ ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳಿಸಿ ಏಕಕಾಲಕ್ಕೆ ಲೋಕಾರ್ಪಣೆ ಮಾಡಲಾಗುವುದು ಎಂದರು.
ಹಿರಿಯೂರು-ಚಳ್ಳಕೆರೆ ರೈಲ್ವೆ ಮಾರ್ಗ :
**ಈಗಾಗಲೆ ದಾವಣಗೆರೆ-ಚಿತ್ರದುರ್ಗ-ತುಮಕೂರು ರೈಲ್ವೆ ಮಾರ್ಗದಡಿ ಹಿರಿಯೂರು ತಾಲ್ಲೂಕಿನಲ್ಲಿ ರೈಲ್ವೆ ಮಾರ್ಗ ಸಾಗುತ್ತಿದೆ. ಈ ರೈಲ್ವೆ ಯೋಜನೆಗಳ ಜತೆಗೆ ಚಳ್ಳಕೆರೆಯಿಂದ ಹಿರಿಯೂರಿಗೆ ಹೊಸದಾಗಿ ರೈಲ್ವೆ ಸಂಪರ್ಕ ಕಲ್ಪಿಸಿ, ಹೊಸ ರೈಲ್ವೆ ಮಾರ್ಗ ಯೋಜನೆ ರೂಪಿಸಿ ಅನುಷ್ಟಾನಗೊಳಿಸಬೇಕು, ಇದರಿಂದಾಗಿ ಉತ್ತರ ಕರ್ನಾಟಕದಿಂದ ಬೆಂಗಳೂರು ಮಾರ್ಗಕ್ಕೆ ನೇರ ರೈಲ್ವೆ ಮಾರ್ಗ ಕಲ್ಪಿಸಿದಂತಾಗುತ್ತದೆ ಎಂಬುದಾಗಿ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹಾಗೂ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಅವರು ಬೇಡಿಕೆ ಸಲ್ಲಿಸಿದ್ದು, ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಸರ್ವೇ ಮಾಡಿಸಿ, ಸೂಕ್ತ ಕ್ರಮ ವಹಿಸಲಾಗುವುದು ಎಂದು ಸಚಿವ ವಿ. ಸೋಮಣ್ಣ ಭರವಸೆ ನೀಡಿದರು.
ಎಲ್ಲ ರೈಲ್ವೆ ಕೆಳ ಸೇತುವೆಗಳಲ್ಲಿನ ಪರಿಸ್ಥಿತಿ ಕುರಿತು ವರದಿ :
**ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಹಾಗೂ ಸಂಸದ ಗೋವಿಂದ ಕಾರಜೋಳ ಅವರು ನಗರದ ತುರುವನೂರು ರಸ್ತೆ ಹಾಗೂ ಮೆದೆಹಳ್ಳಿ ರಸ್ತೆಯಲ್ಲಿನ ರೈಲ್ವೆ ಕೆಳ ಸೇತುವೆಯಲ್ಲಿ ಉಂಟಾಗಿರುವ ತೀವ್ರ ಸಮಸ್ಯೆಯ ಬಗ್ಗೆ ಫೋಟೋ ಸಹಿತ ಸಚಿವರಿಗೆ ಮಾಹಿತಿ ನೀಡಿ, ಜಿಲ್ಲೆಯಲ್ಲಿರುವ ಬಹಳಷ್ಟು ರೈಲ್ವೆ ಕೆಳ ಸೇತುವೆಗಳು ಅವೈಜ್ಞಾನಿಕವಾಗಿ ನಿರ್ಮಾಣವಾಗಿದ್ದು, ಇದರಿಂದ ಮಳೆಗಾಲದಲ್ಲಿ ತೀವ್ರ ತೊಂದರೆಯಾಗುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ಮಳೆ ನೀರು ನಿಂತು ಸಾರ್ವಜನಿಕರ ಸಂಚಾರಕ್ಕೆ ಹಾಗೂ ಅಪಾಯಕ್ಕೂ ಕಾರಣವಾಗುತ್ತಿದೆ ಎಂದರು. ಇದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ ರೈಲ್ವೆ ಸಚಿವ ವಿ. ಸೋಮಣ್ಣ ಅವರು, ಕಳೆದ ಬಾರಿ ಜಿಲ್ಲೆಗೆ ಬಂದಾಗಲೇ ಈ ಕುರಿತು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ, ಆದರೆ ರೈಲ್ವೆ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ, ಸಮಸ್ಯೆ ಬಗೆಹರಿದಿಲ್ಲ. ಚಿತ್ರದುರ್ಗ ನಗರದ ಸೇರಿದಂತೆ ಜಿಲ್ಲೆಯಾದ್ಯಂತ ಇರುವ ರೈಲ್ವೆ ಕೆಳ ಸೇತುವೆಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಸೂಕ್ತ ಪರಿಹಾರ ಕ್ರಮಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಎಲ್ಲ ರೈಲ್ವೆ ಕೆಳ ಸೇತುವೆಗಳ ಬಗ್ಗೆ ರೈಲ್ವೆ ಅಧಿಕಾರಿಗಳು ಖುದ್ದು ಭೇಟಿ ನೀಡಿ, ಅಲ್ಲಿನ ವಸ್ತು ಸ್ಥಿತಿ ಬಗ್ಗೆ ಹಾಗೂ ಸಮಸ್ಯೆಗಳಿದ್ದಲ್ಲಿ, ಅದರ ನಿವಾರಣೆಗೆ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಸಮಗ್ರ ವರದಿ ಸಲ್ಲಿಸಬೇಕು. ಅಲ್ಲದೆ ಪರಿಹಾರ ಕಾರ್ಯಗಳ ಬಗ್ಗೆ ಕ್ರಿಯಾ ಯೋಜನೆ ರೂಪಿಸಿ, ಅನುಮೋದನೆಗಾಗಿ ಸಲ್ಲಿಸಬೇಕು ಎಂದು ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಹೊಸದಾಗಿ ನಿರ್ಮಾಣವಾಗುವ ರೈಲ್ವೆ ಮೇಲ್ಸೇತುವೆ ಹಾಗೂ ಕೆಳಸೇತುವೆಗಳಿಗೆ ಭೂಸ್ವಾಧೀನ ಆಗಬೇಕಾಗಿದೆ. ರಾಜ್ಯ ಸರ್ಕಾರಕ್ಕೆ ಭೂಸ್ವಾಧೀನ ಮಾಡುವಂತೆ ಮನವಿ ಮಾಡಲಾಗಿದೆ. ಭೂಸ್ವಾಧೀನಕ್ಕೆ ಹಾಗೂ ಸೇತುವೆಗಳ ಕಾಮಗಾರಿಗೆ ತಗಲುವ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ ಎಂದು ಹೇಳಿದರು. ನೇರ ರೈಲ್ವೆ ಮಾರ್ಗದಲ್ಲಿನ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ : ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೆ ಮಾರ್ಗದಲ್ಲಿ ಈಗಾಗಲೆ ಶೇ. 90 ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ಆದರೆ ಇನ್ನೂ ಕೆಲವೆಡೆ ಭೂಸ್ವಾಧೀನ ಪ್ರಕ್ರಿಯೆ ನಾನಾ ಕಾರಣಗಳಿಂದಾಗಿ ಬಾಕಿ ಉಳಿದಿದೆ. ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯಕ್ ಅವರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಈ ಪ್ರಕ್ರಿಯೆ ತ್ವರಿತಗೊಳಿಸಲು ಶ್ರಮಿಸುತ್ತಿದ್ದಾರೆ ಎಂದು ಶ್ಲಾಘಿಸಿದ ಸಚಿವ ವಿ. ಸೋಮಣ್ಣ ಅವರು, ಬಾಕಿ ಉಳಿದಿರುವ ಎಲ್ಲ ಭೂಸ್ವಾಧೀನ ಕಾರ್ಯದ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ರೈಲ್ವೆ ಇಲಾಖೆಗೆ ಭೂಮಿ ಹಸ್ತಾಂತರಿಸಿದಲ್ಲಿ, ಅವರು ಕಾಮಗಾರಿ ಕೈಗೊಳ್ಳಲು ಅನುಕೂಲವಾಗಲಿದೆ ಎಂದು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಮಾತನಾಡಿ, ಈ ಮಾರ್ಗದಲ್ಲಿ ಚಿತ್ರದುರ್ಗ ಹಾಗೂ ಹಿರಿಯೂರು ತಾಲ್ಲೂಕು ಸೇರಿ 1211 ಎಕರೆ ಜಮೀನಿನ ಅವಶ್ಯಕತೆ ಇದ್ದು, ಈ ಪೈಕಿ 1026 ಎಕರೆ ಜಮೀನು ಅವಾರ್ಡ್ ಆಗಿ, ಜಮೀನು ಮಾಲೀಕರಿಗೆ ಪರಿಹಾರ ವಿತರಿಸಲಾಗಿದೆ. ಭರಮಸಾಗರ-ಚಿತ್ರದುರ್ಗ ಮಾರ್ಗದವರೆಗಿನ 36 ಕಿ.ಮೀ. ವ್ಯಾಪ್ತಿಯಲ್ಲಿ 348 ಎಕರೆ ಪೈಕಿ 312 ಎಕರೆ ಈಗಾಗಲೆ ರೈಲ್ವೆ ಇಲಾಖೆಗೆ ಹಸ್ತಾಂತರಿಸಿದ್ದು, ರೈಲ್ವೆ ಕಾಮಗಾರಿ ನಡೆದಿದೆ. ಹೆಚ್ಚುವರಿಯಾಗಿ 41 ಎಕರೆ ಭೂಮಿಗೆ ರೈಲ್ವೆ ಇಲಾಖೆ ಬೇಡಿಕೆ ಸಲ್ಲಿಸಿದ್ದು, ಸ್ವಾಧೀನ ಪ್ರಕ್ರಿಯೆ ಪ್ರಾರಂಬಿಸಲಾಗಿದೆ. ಚಿತ್ರದುರ್ಗ-ಹಿರಿಯೂರು ಮಾರ್ಗದ 36 ಕಿ.ಮೀ. ವ್ಯಾಪ್ತಿಯಲ್ಲಿ ಅಗತ್ಯವಿರುವ 383 ಎಕರೆ ಪೈಕಿ 338 ಎಕರೆ ಈಗಾಗಲೆ ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗಿದೆ, 44 ಎಕರೆ ಹೆಚ್ಚುವರಿಯಾಗಿ ಡಿ.ಎಸ್. ಹಳ್ಳಿಯಲ್ಲಿ ಸ್ಟೇಷನ್ ನಿರ್ಮಾಣಕ್ಕೆ ರೈಲ್ವೆ ಇಲಾಖೆ ಬೇಡಿಕೆ ಸಲ್ಲಿಸಿದ್ದು, ಸ್ವಾಧೀನ ಪ್ರಕ್ರಿಯೆ ನಡೆದಿದೆ. ಹಿರಿಯೂರು-ತಾವರೆಕೆರೆ ಮಾರ್ಗದ 29 ಕಿ.ಮೀ. ವ್ಯಾಪ್ತಿಯಲ್ಲಿ 478 ಎಕರೆ ಪೈಕಿ 374 ಎಕರೆ ಜಮೀನು ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ಬಾಕಿ 104 ಎಕರೆ ಜಮೀನನ್ನು ಕೂಡ ರೈಲ್ವೆ ಇಲಾಖೆಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆದಿದೆ. ರೈಲ್ವೆ ಯೋಜನೆಗಾಗಿ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ರೈಲ್ವೆ ಇಲಾಖೆಗೆ ಹಸ್ತಾಂತರಿಸಲಾಗುವುದು ಎಂದರು. ಕಾರ್ಗೋ ಎಕನಾಮಿಕ್ ಕಾರಿಡಾರ್‍ಗೆ ಟಿ.ಬಿ. ಜಯಚಂದ್ರ ಮನವಿ : ರಾಜ್ಯದಲ್ಲಿ ಉತ್ತಮ ನೀರಾವರಿ ವ್ಯವಸ್ಥೆ ಇದ್ದು, ಗುಣಮಟ್ಟದ ಕೃಷಿ ಬೆಳೆ ಬೆಳೆಯಲಾಗುತ್ತಿದೆ. ಆದರೆ ಸೂಕ್ತ ರೀತಿಯಲ್ಲಿ ಮಾರುಕಟ್ಟೆ ಮತ್ತು ಸಾಗಾಣಿಕೆ ವ್ಯವಸ್ಥೆ ಮಧ್ಯ ಕರ್ನಾಟಕದಲ್ಲಿ ಇಲ್ಲದ ಕಾರಣ, ಬೇರೆ ರಾಜ್ಯಗಳಿಗೆ ಹಾಗೂ ಜಾಗತಿಕ ಮಟ್ಟಕ್ಕೆ ಇಲ್ಲಿನ ಕೃಷಿ ಉತ್ಪನ್ನ ಸೇರಿದಂತೆ ಇತರೆ ಸಾಮಗ್ರಿಗಳನ್ನು ಸಕಾಲಕ್ಕೆ ಸಾಗಾಣಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದ ರೈತರ ಆದಾಯ ಕೂಡ ವೃದ್ದಿಯಾಗುತ್ತಿಲ್ಲ. ಹೀಗಾಗಿ ಮಧ್ಯ ಕರ್ನಾಟಕಕ್ಕೆ ರೈಲ್ವೆ ಮಾರ್ಗದಲ್ಲಿ ಕೃಷಿ ಉತ್ಪನ್ನ ಸೇರಿದಂತೆ ವಿವಿಧ ಸಾಮಗ್ರಿಗಳ ಸಾಗಾಣಿಕೆಗೆ ವ್ಯವಸ್ಥೆ ಆಗುವುದು ಅತ್ಯಗತ್ಯವಾಗಿದೆ. ಈಗಾಗಲೆ ದಾವಣಗೆರೆ-ತುಮಕೂರು ನೇರ ರೈಲ್ವೆ ಮಾರ್ಗ ನಿರ್ಮಾಣವಾಗುತ್ತಿದ್ದು, ಈ ಮಾರ್ಗದಲ್ಲಿ ಬರುವ ಶಿರಾ ಬಳಿ ಅಥವಾ ಈ ಮಾರ್ಗದಲ್ಲಿ ರೈಲ್ವೆ ಇಲಾಖೆ ನಿರ್ಧರಿಸುವ ಯಾವುದೇ ಸ್ಥಳದಲ್ಲಿ ರೈಲ್ವೆ ಕಾರ್ಗೋ ಕಾರಿಡಾರ್ ನಿರ್ಮಾಣ ಮಾಡುವಂತೆ ಸಿರಾ ಶಾಸಕ ಹಾಗೂ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರು ರೈಲ್ವೆ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಮಾಡಿ, ಈ ಕುರಿತ ಮನವಿ ಪತ್ರವನ್ನು ಸಲ್ಲಿಸಿದರು. ಮನವಿ ಸ್ವೀಕರಿಸಿದ ಸಚಿವ ಸೋಮಣ್ಣ ಪ್ರತಿಕ್ರಿಯಿಸಿ, ಈ ಕುರಿತು ರೈಲ್ವೆ ಅಧಿಕಾರಿಗಳೊಂದಿಗೆ ಸಾಧ್ಯಾಸಾಧ್ಯತೆಗಳ ಬಗ್ಗೆ ಪರಿಶೀಲಿಸಿ, ರೈಲ್ವೆ ಕಾರ್ಗೋ ಕಾರಿಡಾರ್ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.


ಈ ಸಂದರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಸಂಸದ ಗೋವಿಂದ ಎಂ. ಕಾರಜೋಳ, ಶಾಸಕರಾದ ಟಿ.ರಘುಮೂರ್ತಿ, ಡಾ.ಎಂ.ಚಂದ್ರಪ್ಪ, ಕೆ.ಸಿ.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ರೈಲ್ವೆ ಇಲಾಖೆ ಮುಖ್ಯ ಆಡಳಿತಾಧಿಕಾರಿ (ನಿರ್ಮಾಣ) ಅಜಯ್ ಶರ್ಮಾ, ವಿಭಾಗೀಯ ರೈಲ್ವೆ ವ್ಯವಸ್ಥಾಪಕ (ಡಿಜಿಎಂ) ಮುದಿತ್ ಮಿತ್ತಲ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ನೇರ ರೈಲ್ವೆ ಯೋಜನೆ ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್, ಸೇರಿದಂತ ರೈಲ್ವೆ ಇಲಾಖೆ ಅಧಿಕಾರಿಗಳು ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading