June 18, 2026
FB_IMG_1781786816322

ಚಿತ್ರದುರ್ಗಜೂನ್18:
ಹವಾಮಾನ ಬದಲಾವಣೆಯಿಂದ ಜಿಲ್ಲೆಯು ಎದುರಿಸುತ್ತಿರುವ ಜಲ ಸಂಪನ್ಮೂಲಗಳ ಕೊರತೆ, ತಾಪಮಾನ ಏರಿಕೆ ಸೇರಿದಂತೆ ವಿವಿಧ ಪರಿಸರ ಸಂಬಂಧಿತ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ತಿಳಿಸಿದರು.

ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಧೀನದಲ್ಲಿರುವ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ) ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಸಹಯೋಗದಲ್ಲಿ ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಮುಂಬರುವ ದಿನಗಳಲ್ಲಿ ಹವಾಮಾನ ಬದಲಾವಣೆಯ ತೀವ್ರತೆ ತಗ್ಗಿಸಲು ಕೈಗೊಳ್ಳಬೇಕಾದ ಸಿದ್ಧತೆಗಳು ಮತ್ತು ಕಾರ್ಯತಂತ್ರಗಳ ಬಗ್ಗೆ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದ ಅವರು, ಪರಿಸರ ಸಂರಕ್ಷಣೆಗೆ ಎಲ್ಲ ಇಲಾಖೆಗಳ ಸಾಮೂಹಿಕ ಪ್ರಯತ್ನ ಅಗತ್ಯ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ ಅವರು ಕಾರ್ಯಕ್ರಮದ ಉದ್ದೇಶ ವಿವರಿಸಿ, ಅಧಿಕಾರಿಗಳು ಈ ತರಬೇತಿಯ ಸಂಪೂರ್ಣ ಉಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕರ್ನಾಟಕ ಸರ್ಕಾರದ ನಿರ್ದೇಶನದಂತೆ ‘ಎಂಪ್ರಿ’ ಸಂಸ್ಥೆಯು ಸಿದ್ಧಪಡಿಸಿರುವ ಈ ಕ್ರಿಯಾ ಯೋಜನೆಗೆ 2024ರಲ್ಲಿ ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ಅನುಮೋದನೆ ದೊರೆತಿದೆ. ಈ ಯೋಜನೆಯಡಿ ರಾಜ್ಯದ ವಿವಿಧ ಇಲಾಖೆಗಳು 2025–2030ರ ಅವಧಿಗೆ ಪ್ರಮುಖ ಕಾರ್ಯಕ್ಷಮತಾ ಸೂಚಕಗಳು ಹಾಗೂ ಗುರಿಗಳನ್ನು ನಿಗದಿಪಡಿಸಿಕೊಂಡಿವೆ. ಕಳೆದ ಸಾಲಿನಲ್ಲಿ ರಾಜ್ಯದ 22 ಜಿಲ್ಲೆಗಳಲ್ಲಿ ಯಶಸ್ವಿಯಾಗಿ ನಡೆದಿದ್ದ ಈ ತರಬೇತಿ ಕಾರ್ಯಕ್ರಮವನ್ನು, ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ 31 ಜಿಲ್ಲೆಗಳಿಗೆ ವಿಸ್ತರಿಸಲಾಗಿದೆ ಎಂದು ಎಂಪ್ರಿ ಸಂಸ್ಥೆಯ ಸಂಘಟಕರು ತಿಳಿಸಿದರು.
ಎಂಪ್ರಿ ಸಂಸ್ಥೆಯ ಸಂಶೋಧನಾ ವಿಜ್ಞಾನಿ ಡಾ. ಪವಿತ್ರಾ ಪಿ. ನಾಯಕ್, ರಾಜ್ಯ ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆಯ ಕಾರ್ಯ ನೀತಿ, ವಿವಿಧ ಇಲಾಖೆಗಳ ಪಾತ್ರ, ಅಲ್ಪಾವಧಿಯ ಹವಾಮಾನ ಮಾಲಿನ್ಯಕಾರಕಗಳ ಪರಿಣಾಮಗಳು ಹಾಗೂ ಜಿಲ್ಲಾಮಟ್ಟದ ದತ್ತಾಂಶಗಳ ಕುರಿತು ಉಪನ್ಯಾಸ ನೀಡಿದರು. ಬೆಂಗಳೂರಿನ ಎಸಿಐಡಬ್ಲ್ಯುಆರ್‍ಎಂ ಸಂಸ್ಥೆಯ ಸಂಶೋಧನಾ ವಿಜ್ಞಾನಿ ತೇಜು ಕುಮಾರ್ ಅವರು ಜಲ ಸಂಪನ್ಮೂಲ ವಲಯಕ್ಕೆ ಸಂಬಂಧಿಸಿದ ಹವಾಮಾನ ಕ್ರಿಯಾ ಯೋಜನೆ ಹಾಗೂ ಅದರ ಅನುಷ್ಠಾನದ ಕುರಿತು ಮಾಹಿತಿ ನೀಡಿದರು.
ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ಜಯಲಕ್ಷ್ಮಿ, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಹರೀಶ್, ಜಿಲ್ಲಾ ಪಂಚಾಯತ್ ಪ್ರಭಾರಿ ಎನ್‍ಆರ್‍ಡಿಎಂಎಸ್ ಅಧಿಕಾರಿ ಆನಂದ್, ಎಂಪ್ರಿ ಸಂಸ್ಥೆಯ ತರಬೇತಿ ಅಸೋಸಿಯೇಟ್ ರುಚಿತಾ ಹಾಗೂ ತರಬೇತಿ ಸಹಾಯಕ ಎನ್.ರಾಘವೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಶಿಕ್ಷಣ ಸಂಸ್ಥೆಗಳ ಸದಸ್ಯರು ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading