June 19, 2026

ಚಳ್ಳಕೆರೆ ತಾಲ್ಲೂಕಿನ ರೇಣುಕಾಪುರ ಗ್ರಾಮ ಪಂಚಾಯತ್‌ನಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಬೇಟಿ ಬಚಾವೋ, ಬೇಟಿ ಪಡಾವೋ’ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಿ.ಸಿ. ಶಶಿರಾಜ್, ಎಸ್‌ಡಿಎ ವೀರನಾಯಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಮೇಲ್ವಿಚಾರಕಿ ಶ್ರೀಮತಿ ಆರ್. ಜ್ಯೋತಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀಮತಿ ರೇಖಾ, ಮುಖ್ಯಶಿಕ್ಷಕ ಮಂಜಣ್ಣ, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಮಕ್ಕಳು ಹಾಗೂ ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಿ.ಸಿ. ಶಶಿರಾಜ್ ಅವರು, ಹೆಣ್ಣುಮಕ್ಕಳಿಗೆ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಹೆಣ್ಣು ಸಮಾಜದ ಕಣ್ಣಾಗಿದ್ದು, ಅವರಿಗೆ ಗೌರವ ನೀಡಬೇಕು. ‘ಬೇಟಿ ಬಚಾವೋ, ಬೇಟಿ ಪಡಾವೋ’ ಯೋಜನೆಯ ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಮಹಿಳಾ ಮೇಲ್ವಿಚಾರಕಿ ಶ್ರೀಮತಿ ಆರ್. ಜ್ಯೋತಿ ಅವರು ಮಾತನಾಡಿ, ಗಂಡು-ಹೆಣ್ಣು ಎಂಬ ಭೇದಭಾವ ಮಾಡದೆ ಸಮಾನವಾಗಿ ಕಾಣಬೇಕು. ಹೆಣ್ಣು ಭ್ರೂಣ ಹತ್ಯೆ ಕಾನೂನುಬಾಹಿರವಾಗಿದ್ದು, ಅದನ್ನು ಯಾವುದೇ ಕಾರಣಕ್ಕೂ ಪ್ರೋತ್ಸಾಹಿಸಬಾರದು ಎಂದು ಹೇಳಿದರು. ಜೊತೆಗೆ ಮಹಿಳೆಯರು ಹಾಗೂ ಮಕ್ಕಳ ಕಳ್ಳಸಾಗಣೆ ಮತ್ತು ಶೋಷಣೆ ಕುರಿತು ಜಾಗೃತಿ ಮೂಡಿಸಿದರು.
ಅವರು ಮಕ್ಕಳ ಸಹಾಯವಾಣಿ ಸಂಖ್ಯೆ 1098, ಮಹಿಳಾ ಸಹಾಯವಾಣಿ 181 ಹಾಗೂ ಪೊಲೀಸ್ ತುರ್ತು ಸಹಾಯವಾಣಿ 112 ಕುರಿತು ಮಾಹಿತಿ ನೀಡಿ, ಅಗತ್ಯ ಸಂದರ್ಭಗಳಲ್ಲಿ ಈ ಸೇವೆಗಳನ್ನು ಬಳಸಿಕೊಳ್ಳುವಂತೆ ತಿಳಿಸಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀಮತಿ ರೇಖಾ ಅವರು ಬಾಲ್ಯ ವಿವಾಹದ ದುಷ್ಪರಿಣಾಮಗಳು, ಕಾನೂನಿನಡಿ ವಿಧಿಸಲಾಗುವ ಶಿಕ್ಷೆ ಹಾಗೂ ದಂಡದ ಕುರಿತು ವಿವರಿಸಿದರು. ಅಲ್ಲದೆ ದತ್ತು ಸ್ವೀಕಾರ ಕೇಂದ್ರಗಳು, ಪೋಕ್ಸೋ (POCSO) ಕಾಯ್ದೆ ಮತ್ತು ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮವು ಹೆಣ್ಣುಮಕ್ಕಳ ಶಿಕ್ಷಣ, ರಕ್ಷಣೆ ಹಾಗೂ ಸಮಾನತೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರವಹಿಸಿತು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading