ನಾಯಕನಹಟ್ಟಿ, ಜು.19: ಮಧ್ಯ ಕರ್ನಾಟಕದ ಐತಿಹಾಸಿಕ ಧಾರ್ಮಿಕ ಕ್ಷೇತ್ರವಾಗಿರುವ, “ಮಾಡಿದಷ್ಟು ನೀಡು ಭಿಕ್ಷೆ” ಎಂಬ ತತ್ವವನ್ನು ನಾಡಿಗೆ ಸಾರಿದ ಶರಣ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇಗುಲಕ್ಕೆ ಉದ್ಯಮಿ ಹಾಗೂ ಸಮಾಜಸೇವಕ ಮಾಲೂರು ಶಿವಕುಮಾರ್ ಎಂ. ನಾಯಕ ಭೇಟಿ ನೀಡಿ ಒಳಮಠ ಮತ್ತು ಹೊರಮಠಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಸ್ವಾಮಿಯ ದರ್ಶನ ಪಡೆದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಯಕಯೋಗಿ ಶ್ರೀ ಗುರು ತಿಪ್ಪೇರುದ್ರಸ್ವಾಮಿಯ ಪರಮ ಭಕ್ತನಾಗಿರುವ ನಾನು ಸ್ವಾಮಿಯ ದರ್ಶನ ಪಡೆಯಬೇಕೆಂಬ ಆಶಯದಿಂದ ಇಲ್ಲಿಗೆ ಬಂದಿದ್ದೇನೆ. ಕ್ಷೇತ್ರದ ಜನತೆ, ಮುಖಂಡರ ಅಭಿಪ್ರಾಯ ಹಾಗೂ ಆಶೀರ್ವಾದದೊಂದಿಗೆ ಮುಂದಿನ ದಿನಗಳಲ್ಲಿ ಮೊಳಕಾಲ್ಮೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ,” ಎಂದು ಭರವಸೆ ನೀಡಿದರು.
ಅನಂತರ ಹೋಬಳಿಯ ಮಲ್ಲೂರಹಳ್ಳಿ ಗ್ರಾಮದಲ್ಲಿ ಮಲ್ಲೂರಹಳ್ಳಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಆಯೋಜಿಸಲಾಗಿದ್ದ ಕ್ರಿಕೆಟ್ ಪಂದ್ಯಾವಳಿಯನ್ನು ವೀಕ್ಷಿಸಿ ಮಾತನಾಡಿದ ಅವರು, ತಮಗೂ ಕ್ರಿಕೆಟ್ ಆಟದ ಬಗ್ಗೆ ವಿಶೇಷ ಆಸಕ್ತಿ ಇದೆ ಎಂದು ತಿಳಿಸಿದರು. ಕ್ರಿಕೆಟ್ ವಿಶ್ವದ ಜನಪ್ರಿಯ ಕ್ರೀಡೆಯಾಗಿದ್ದು, ಯುವಕರು ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ದೇಶಕ್ಕೆ ಹೆಸರು ಮತ್ತು ಕೀರ್ತಿ ತಂದುಕೊಡುವ ಜೊತೆಗೆ ಮುಂದಿನ ಪೀಳಿಗೆಗೆ ಮಾದರಿಯಾಗಬೇಕು ಎಂದು ಕರೆ ನೀಡಿದರು.
ಮುಂದಿನ ದಿನಗಳಲ್ಲಿ ಇನ್ನಷ್ಟು ದೊಡ್ಡ ಮಟ್ಟದಲ್ಲಿ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜಿಸಲು ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಅವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಅಭಿಮಾನಿಗಳು, ಹಿತೈಷಿಗಳು ಹಾಗೂ ವಿವಿಧ ಮುಖಂಡರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.