ಹಿರಿಯೂರು ಜು.19. ಬಹುದಿನಗಳ ಬೇಡಿಕೆಯಾಗಿದ್ದ ಕಲ್ವಳ್ಳಿ ಭಾಗದ ಎಲ್ಲಾ ಕೆರೆಗಳನ್ನು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿರುವುದು ರೈತರು ಹಾಗೂ ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ.
ಈ ಕುರಿತು ಕಲ್ವಳ್ಳಿ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಚಂದ್ರಗಿರಿ ದಿಂಡಾವರ ಸಂತಸ ವ್ಯಕ್ತಪಡಿಸಿದ್ದು, “ಈ ಯೋಜನೆಗೆ ಅನುಮೋದನೆ ದೊರೆತಿರುವುದು ನಮ್ಮೆಲ್ಲರಿಗೂ ಹರ್ಷ ತಂದಿದೆ. ಈ ಯೋಜನೆಗೆ ಶ್ರಮಿಸಿದ ದಿವಂಗತ ಮಾಜಿ ಸಚಿವ ಡಿ. ಸುಧಾಕರ್ ಅವರ ಕೊಡುಗೆ ಸದಾ ಸ್ಮರಣೀಯ. ಹಾಗೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಲಸಂಪನ್ಮೂಲ ಸಚಿವ ರಾಮಲಿಂಗ ರೆಡ್ಡಿ ಅವರಿಗೆ ನಮ್ಮ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ” ಎಂದು ತಿಳಿಸಿದ್ದಾರೆ.
ಅತಿ ಶೀಘ್ರದಲ್ಲೇ ಯೋಜನೆಗೆ ಗುದ್ದಲಿ ಪೂಜೆ ನೆರವೇರಲಿದ್ದು, ಕಾಮಗಾರಿ ಆರಂಭವಾಗುವ ವಿಶ್ವಾಸವಿದೆ ಎಂದು ಅವರು ಹೇಳಿದರು.
ಈ ಯೋಜನೆ ಸಾಕಾರಗೊಳ್ಳಲು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಶ್ರಮಿಸಿದ ಎಲ್ಲಾ ರೈತಪರ ಸಂಘಟನೆಗಳು, ರೈತ ಮುಖಂಡರು, ರೈತರು ಹಾಗೂ ಹೋರಾಟಗಾರರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿರುವ ಚಂದ್ರಗಿರಿ ದಿಂಡಾವರ, ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸಿ ರೈತರಿಗೆ ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸಬೇಕೆಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.