ಚಳ್ಳಕೆರೆ: ದೀನದಲಿತರು, ಬಡವರು ಹಾಗೂ ಹಿಂದುಳಿದ ವರ್ಗಗಳ ಜನರಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರು ರಾಜ್ಯದ ಜನಮಾನಸದಲ್ಲಿ ಶಾಶ್ವತವಾಗಿ ಉಳಿದಿದ್ದಾರೆ ಎಂದು ತಹಶೀಲ್ದಾರ್ ರೆಹಾನ್ ಪಾಷಾ ಹೇಳಿದರು.
ನಗರದ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಡಿ. ದೇವರಾಜ ಅರಸುರವರ 111ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ಬಡವರು, ರೈತರು, ದೀನದಲಿತರು ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದ ದೇವರಾಜ ಅರಸುರವರು ಸಾಮಾಜಿಕ ಪರಿವರ್ತನೆಯ ಹರಿಕಾರರಾಗಿದ್ದರು. ‘ಉಳುವವನೇ ಭೂಮಿಯ ಒಡೆಯ’ ಎಂಬ ಮಹತ್ವದ ಭೂ ಸುಧಾರಣಾ ನೀತಿ, ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ಹಲವು ಜನಪರ ಯೋಜನೆಗಳಿಗೆ ಅವರು ಬುನಾದಿ ಹಾಕಿದರು. ಜೀತ ಪದ್ಧತಿ ನಿರ್ಮೂಲನೆ ಸೇರಿದಂತೆ ಶೋಷಿತ ಸಮುದಾಯಗಳ ಬದುಕಿನಲ್ಲಿ ಮಹತ್ವದ ಬದಲಾವಣೆ ತಂದರು ಎಂದು ಸ್ಮರಿಸಿದರು.
ಬಸವಣ್ಣ, ಗೌತಮ ಬುದ್ಧ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಆಶಯಗಳನ್ನು ತಮ್ಮ ಆಡಳಿತದಲ್ಲಿ ಅಳವಡಿಸಿಕೊಂಡ ದೇವರಾಜ ಅರಸುರವರ ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ. ಅವರ ವಿಚಾರಧಾರೆಗಳನ್ನು ಮುಂದುವರಿಸಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಡವರು, ಮಹಿಳೆಯರು ಹಾಗೂ ಹಿಂದುಳಿದ ಮತ್ತು ಶೋಷಿತ ವರ್ಗಗಳ ಪರವಾಗಿ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದ್ದಾರೆ ಎಂದು ರೆಹಾನ್ ಪಾಷಾ ಹೇಳಿದರು.
ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ ಮಾತನಾಡಿ, ಒಬ್ಬ ವ್ಯಕ್ತಿ ರಾಜಕೀಯ, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕಾದರೆ ದೇವರಾಜ ಅರಸುರವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 20 ಅಂಶಗಳ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸುವ ಮೂಲಕ ದೀನದಲಿತರ ಏಳಿಗೆಗೆ ಅರಸುರವರು ಕಾರಣರಾಗಿದ್ದರು ಎಂದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಸ್. ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ದೇವರಾಜ ಅರಸುರವರು ದೀನದಲಿತರ ಬಂಧುವಾಗಿ ಕಾರ್ಯನಿರ್ವಹಿಸಿದ್ದರು. ಎಲ್.ಜಿ. ಹಾವನೂರು ಆಯೋಗದ ವರದಿಯನ್ನು ಅನುಷ್ಠಾನಗೊಳಿಸುವ ಮೂಲಕ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟರು. ಗ್ರಾಮೀಣ ಪ್ರದೇಶಗಳ ರೈತರ ಕೃಷಿ ಸಾಲ ಮನ್ನಾ ಸೇರಿದಂತೆ ರೈತರ ಹಿತ ಕಾಪಾಡುವ ಹಲವು ಕ್ರಮಗಳನ್ನು ಕೈಗೊಂಡಿದ್ದರು ಎಂದು ತಿಳಿಸಿದರು.
ನಿವೃತ್ತ ಪ್ರಾಂಶುಪಾಲ ಶಿವಲಿಂಗಪ್ಪ ಅವರು ದೇವರಾಜ ಅರಸುರವರ ಜೀವನ, ಆಡಳಿತ ಮತ್ತು ಸಾಮಾಜಿಕ ನ್ಯಾಯದ ಪರಿಕಲ್ಪನೆ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಇಒ ಶಶಿಧರ್, ಬಿಇಒ ಕೆ.ಎಸ್. ಸುರೇಶ್, ಸಿಡಿಪಿಒ ರಾಜನಾಯಕ್, ದೇವಲ ನಾಯಕ್, ಮಂಜುನಾಥ, ಆನಂದ್, ಮೈತ್ರಿ, ದ್ಯಾಮಣ್ಣ, ಕೆ. ವೀರಭದ್ರಯ್ಯ, ಶ್ರೀನಿವಾಸ್ ಸೇರಿದಂತೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿ ಉಪಸ್ಥಿತರಿದ್ದರು.




About The Author
Discover more from JANADHWANI NEWS
Subscribe to get the latest posts sent to your email.