ನಾಯಕನಹಟ್ಟಿ: ಕನ್ನಡ ಭಾಷೆ, ನಾಡು, ನುಡಿ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಸಂಕಲ್ಪವನ್ನು ಪ್ರತಿಯೊಬ್ಬ ಕನ್ನಡಿಗರೂ ಮಾಡಬೇಕು ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಟಿ. ಮಂಜುಳಾ ಶ್ರೀಕಾಂತ್ ತಿಳಿಸಿದರು.
ಶುಕ್ರವಾರ ಪಟ್ಟಣದ ಹಟ್ಟಿ ಮಲ್ಲಪ್ಪ ನಾಯಕ ವೃತ್ತದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಹೋಬಳಿ ಘಟಕ, ವರ್ತಕರ ಸಂಘ, ಕಟ್ಟಡ ಕಾರ್ಮಿಕರ ಸಂಘ, ಮೆಕಾನಿಕ್ ಸಂಘ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕರ್ನಾಟಕದಲ್ಲಿ ಕನ್ನಡವೇ ಸತ್ಯ, ಕನ್ನಡವೇ ನಿತ್ಯ, ಕನ್ನಡವೇ ನಮ್ಮ ಉಸಿರು. ಕನ್ನಡ ಸಾರ್ವಭೌಮ ಭಾಷೆಯಾಗಿದ್ದು, ಸಾವಿರಾರು ವರ್ಷಗಳ ಇತಿಹಾಸ ಮತ್ತು ಶ್ರೀಮಂತ ಸಂಸ್ಕೃತಿಯನ್ನು ಹೊಂದಿದೆ. ಕನ್ನಡ ಭಾಷೆ ನಾಡಿನ ಜನರ ಬದುಕಿನ ಜೀವನಾಡಿಯಾಗಿದೆ. ಆದ್ದರಿಂದ ನಾವೆಲ್ಲರೂ ಕಂಕಣಬದ್ಧರಾಗಿ ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಪಟ್ಟಣ ಪಂಚಾಯಿತಿ ಸದಸ್ಯ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ಅನ್ವರ್ ಮಾತನಾಡಿ, ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಸಂರಕ್ಷಣೆ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಪ್ರತಿ ಮನೆಯಲ್ಲೂ ಕನ್ನಡ ಭಾಷೆಗೆ ಆದ್ಯತೆ ದೊರೆಯಬೇಕು. ದೈನಂದಿನ ವ್ಯವಹಾರಗಳಲ್ಲಿಯೂ ಕನ್ನಡವನ್ನು ಬಳಸುವ ಮೂಲಕ ಭಾಷೆಯ ಬೆಳವಣಿಗೆಗೆ ಕೈಜೋಡಿಸಬೇಕು ಎಂದರು.
ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎಚ್. ಗಂಗಾಧರಪ್ಪ ಮಾತನಾಡಿ, ಕರ್ನಾಟಕ ಶಾಂತಿ, ಸೌಹಾರ್ದತೆ ಹಾಗೂ ಸಹಬಾಳ್ವೆಗೆ ಹೆಸರಾಗಿರುವ ನಾಡು. ಕುವೆಂಪು ಅವರ ಆಶಯದಂತೆ ಎಲ್ಲೇ ಇರಿ, ಹೇಗೆ ಇರಿ, ಎಂದೆಂದಿಗೂ ಕನ್ನಡಿಗರಾಗಿರಿ ಎಂಬ ಭಾವನೆ ಪ್ರತಿಯೊಬ್ಬರಲ್ಲೂ ಇರಬೇಕು. ವಿವಿಧ ಭಾಷೆಗಳನ್ನು ಮಾತನಾಡುವ ಜನರು ಇಲ್ಲಿ ವಾಸಿಸುತ್ತಿದ್ದು, ಅನ್ಯಭಾಷಿಕರು ಕನ್ನಡವನ್ನು ಕಲಿತು ಇಲ್ಲಿನ ನಡೆ-ನುಡಿ ಹಾಗೂ ಸಂಸ್ಕೃತಿಯನ್ನು ಗೌರವಿಸಿ ಅಳವಡಿಸಿಕೊಳ್ಳಬೇಕು ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಂ. ಶಿವಸ್ವಾಮಿ ಮಾತನಾಡಿ, 71ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಪಟ್ಟಣದ ವರ್ತಕರ ಸಂಘ ಹಾಗೂ ವಿವಿಧ ಕನ್ನಡಪರ ಸಂಘಟನೆಗಳು ಸಹಕಾರ ನೀಡಿವೆ. ಇಂತಹ ಸಂಘಟಿತ ಪ್ರಯತ್ನದಿಂದ ಪ್ರತಿವರ್ಷ ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುವಂತಾಗಬೇಕು ಎಂದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರಾದ ಸರ್ವಮಂಗಳ ಎಸ್. ಉಮಾಪತಿ, ಬಿ. ವಿನುತಾ ಮಂಜುನಾಥ್, ಶ್ರೀ ಹಟ್ಟಿ ಮಲ್ಲಪ್ಪ ನಾಯಕ ಸಂಘದ ನಿರ್ದೇಶಕ ಕಾಕಸೂರಯ್ಯ, ಶ್ರೀ ತಿಪ್ಪೇರುದ್ರಸ್ವಾಮಿ ಗ್ರಾಮೀಣ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎಂ.ವೈ.ಟಿ. ಸ್ವಾಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಂ. ಶಿವಸ್ವಾಮಿ, ನಾಯಕನಹಟ್ಟಿ ಹೋಬಳಿ ಘಟಕದ ಅಧ್ಯಕ್ಷ ಮಲ್ಲೂರಹಳ್ಳಿ ಬಿ. ಕಾಟಯ್ಯ, ಉಪಾಧ್ಯಕ್ಷ ಟಿ. ಬಸಪ್ಪ ನಾಯಕ, ವರ್ತಕರ ಸಂಘದ ಅಧ್ಯಕ್ಷ ಗೋವಿಂದಗೌಡ್ರು ಎತ್ತಿನಹಟ್ಟಿ, ಗೌರವಾಧ್ಯಕ್ಷ ನಲಗೇತನಹಳ್ಳಿ ಎ.ಟಿ. ಚನ್ನಕೇಶವ, ಜಿ.ವೈ. ತಿಪ್ಪೇಸ್ವಾಮಿ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ವರ್ತಕರ ಸಂಘದ ಸದಸ್ಯರು, ಮೆಕಾನಿಕ್ ಸಂಘದ ಪದಾಧಿಕಾರಿಗಳು, ಶಿಕ್ಷಕರು, ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.
