ಚಿತ್ರದುರ್ಗಮಾರ್ಚ್21:
ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ಶುಕ್ರವಾರ ಆರಂಭಗೊಂಡಿದ್ದು, ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ) ವಿಭಾಗದಲ್ಲಿ ಸ್ಥಾಪಿಸಿರುವ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಗುಲಾಬಿ ಹೂವು ಹಾಗೂ ಸಿಹಿ ನೀಡಿ ಸ್ವಾಗತಿಸಿ, ಶುಭ ಹಾರೈಸಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿಗಳು, ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ವಿದ್ಯಾರ್ಥಿ ಜೀವನದ ಒಂದು ಪ್ರಮುಖ ಘಟ್ಟವಾಗಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಯು ಇದೇ ಮಾರ್ಚ್ 21 ರಿಂದ ಪ್ರಾರಂಭವಾಗಿದ್ದು, ಏಪ್ರಿಲ್ 04 ರವರೆಗೆ ನಡೆಯಲಿದ್ದು, ಈ ಪರೀಕ್ಷೆಯನ್ನು ಹಬ್ಬದಂತೆ ಆಚರಣೆ ಮಾಡಬೇಕು. ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಯಾವುದೇ ಭಯಭೀತಿ ಇಲ್ಲದೇ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕು. ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಕಳೆದ ಆರು ತಿಂಗಳಿಂದಲೂ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಹಲವು ಪ್ರಯತ್ನಗಳನ್ನು ನಡೆಸಲಾಗಿದೆ. ವಿದ್ಯಾರ್ಥಿಗಳು ಉತ್ಸಾಹ ಮತ್ತು ಆತ್ಮ ವಿಶ್ವಾಸದಿಂದ ಪರೀಕ್ಷೆ ಬರೆಯಬೇಕು. ಹೀಗಾಗಿ ಇಂದು ಪರೀಕ್ಷಾ ಕೇಂದ್ರದಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿ, ಸಂತೋಷದಿಂದ ವಿದ್ಯಾರ್ಥಿಗಳನ್ನು ಸ್ವಾಗತಿಸಿ, ಶುಭ ಹಾರೈಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್, ಪೌರಾಯುಕ್ತೆ ಎಂ.ರೇಣುಕಾ ಸೇರಿದಂತೆ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಇದ್ದರು.


===========
About The Author
Discover more from JANADHWANI NEWS
Subscribe to get the latest posts sent to your email.