ಚಳ್ಳಕೆರೆ: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಸುದೀರ್ಘ ಸೇವೆ ಸಲ್ಲಿಸಿ, 2026ನೇ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ಇಂದು ಸಂಜೆ ದಿನಪತ್ರಿಕೆಯ ಚಳ್ಳಕೆರೆ ವರದಿಗಾರ ಟಿ.ಜೆ. ತಿಪ್ಪೇಸ್ವಾಮಿ ಅವರನ್ನು ನಗರದ ಪ್ರವಾಸಿ ಮಂದಿರದಲ್ಲಿ ಗೆಳೆಯರ ಬಳಗದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ನಗರಸಭಾ ಸದಸ್ಯ ಎಂ. ಶಿವಮೂರ್ತಿ ಅವರು, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಳೆದ 30ಕ್ಕೂ ಹೆಚ್ಚು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಟಿ.ಜೆ. ತಿಪ್ಪೇಸ್ವಾಮಿ ಅವರು ತಮ್ಮ ವೃತ್ತಿಜೀವನದುದ್ದಕ್ಕೂ ಸಾಮಾಜಿಕ ಸಮಸ್ಯೆಗಳು, ಜನಪರ ವಿಚಾರಗಳು ಹಾಗೂ ಕನ್ನಡ ನಾಡು-ನುಡಿಯ ಹೋರಾಟಗಳಿಗೆ ನಿರಂತರವಾಗಿ ಧ್ವನಿಯಾಗಿದ್ದಾರೆ. ಅವರ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ಜಿಲ್ಲಾಡಳಿತ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿರುವುದು ಚಳ್ಳಕೆರೆ ತಾಲ್ಲೂಕಿನ ಜನತೆಗೆ ಹೆಮ್ಮೆಯ ಸಂಗತಿಯಾಗಿದೆ. ಇಂತಹ ಸಾಧಕರು ಯುವ ಪತ್ರಕರ್ತರಿಗೆ ಪ್ರೇರಣೆಯಾಗಬೇಕು ಎಂದು ತಿಳಿಸಿದರು.
ಹಿರಿಯ ಪತ್ರಕರ್ತ ಡಿ. ಈಶ್ವರಪ್ಪ ಮಾತನಾಡಿ, ಪತ್ರಿಕೋದ್ಯಮ ಕೇವಲ ವೃತ್ತಿಯಲ್ಲ, ಅದು ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ಜವಾಬ್ದಾರಿಯುತ ಕ್ಷೇತ್ರವಾಗಿದೆ. ಈ ನಿಟ್ಟಿನಲ್ಲಿ ತಿಪ್ಪೇಸ್ವಾಮಿ ಅವರು 33 ವರ್ಷಗಳಿಂದ ಪ್ರಾಮಾಣಿಕವಾಗಿ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಗೆಳೆಯರೊಂದಿಗೆ ಸೇರಿ ಕನ್ನಡಪರ ಹಾಗೂ ನಾಗರಿಕ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ವಿವಿಧ ಹೋರಾಟಗಳಲ್ಲಿ ಗುರುತಿಸಿಕೊಂಡಿರುವ ಅವರು ಕವಿಯಾಗಿ, ಬರಹಗಾರರಾಗಿಯೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಪತ್ರಕರ್ತ ಜಾಣಗೆರೆ ವೆಂಕಟರಾಮಯ್ಯ ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಲ್ಲದೆ, ಕರ್ನಾಟಕ ರಕ್ಷಣಾ ವೇದಿಕೆಯನ್ನು ಜಿಲ್ಲೆಯಲ್ಲಿ ಸ್ಥಾಪಿಸಿ ಬೆಳೆಸುವಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಸುದೀರ್ಘ ಸೇವೆ ಮತ್ತು ಹೋರಾಟದ ಬದುಕಿಗೆ ಸಂದಿರುವ ಜಿಲ್ಲಾ ಮಟ್ಟದ ಪ್ರಶಸ್ತಿ ಅಭಿನಂದನಾರ್ಹವಾಗಿದೆ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಟಿ.ಜೆ. ತಿಪ್ಪೇಸ್ವಾಮಿ ಅವರು, ಗೆಳೆಯರ ಬಳಗದವರು ತಮಗೆ ತೋರಿದ ಆತ್ಮೀಯತೆ ಮತ್ತು ಗೌರವಕ್ಕೆ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ನಗರಸಭಾ ಸದಸ್ಯ ಎಸ್.ಎಂ. ಅನಾಸ್, ಗಾಂಧಿನಗರ ಮಸೀದಿ ಅಧ್ಯಕ್ಷ ದಾದಾಪೀರ್, ಬಷೀರ್ ಹಯಾತ್, ವೀರಭದ್ರಪ್ಪ ಸೇರಿದಂತೆ ಗೆಳೆಯರ ಬಳಗದ ಸದಸ್ಯರು ಉಪಸ್ಥಿತರಿದ್ದು, ಪ್ರಶಸ್ತಿ ಪುರಸ್ಕೃತ ಟಿ.ಜೆ. ತಿಪ್ಪೇಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸಿದರು.
About The Author
Discover more from JANADHWANI NEWS
Subscribe to get the latest posts sent to your email.
