December 15, 2025
1742828240572.jpg



ಚಿತ್ರದುರ್ಗ  ಮಾರ್ಚ್.24:
ರಾಜ್ಯದ ಸರಾಸರಿಗಿಂತಲೂ, ಜಿಲ್ಲೆಯಲ್ಲಿ ತಾಯಿ ಮರಣ, ಶಿಶು ಮರಣ ಹಾಗೂ ಸಿಜೇರಿಯನ್ ಪ್ರಮಾಣ ಹೆಚ್ಚಳಕ್ಕೆ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರು ಕಳವಳ ವ್ಯಕ್ತಪಡಿಸಿ, ತಾಯಿ ಮರಣ, ಶಿಶು ಮರಣಕ್ಕೆ ಸಂಬಂಧಿಸಿದಂತೆ ಪ್ರತಿ ಕೇಸ್‍ಗೂ ಪ್ರತ್ಯೇಕ ವಿಶ್ಲೇಷಣಾ ವರದಿ ಸಲ್ಲಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸೋಮವಾರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯದ ಸರಾಸರಿಗಿಂತಲೂ ಜಿಲ್ಲೆಯಲ್ಲಿ ತಾಯಿ ಮರಣ, ಶಿಶು ಮರಣ ಹಾಗೂ ಸಿಜೇರಿಯನ್ ಪ್ರಮಾಣ ಹೆಚ್ಚಳಕ್ಕೆ ಕೆಡಿಪಿ ಸಭೆಯಲ್ಲಿ ಸಚಿವರು ಸೇರಿದಂತೆ ಶಾಸಕರು ತೀವ್ರ ಕಳವಳ ವ್ಯಕ್ತಪಡಿಸಿದರು. ಹೊಳಲ್ಕೆರೆ ಶಾಸಕ ಡಾ. ಎಂ.ಚಂದ್ರಪ್ಪ ಮಾತನಾಡಿ, ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿಯೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿವೆ. ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರು ಇದ್ದಾರೆ. ಜತೆಗೆ ಪೂರಕ ಪೌಷ್ಠಿಕ ಆಹಾರ, ಅಗತ್ಯ ಔಷಧಿಗಳು ಇವೆ. ಆದಾಗ್ಯೂ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಯಾಕೆ ತಾಯಿ ಮರಣ ಸಂಭವಿಸುತ್ತದೆ. ಬಡವರ ಹೆಣ್ಣು ಮಕ್ಕಳ ಸಾವಿಗೆ ಬೆಲೆ ಇಲ್ಲವೇ? ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಅವರು, ಇದರ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ಸೂಚನೆ ನೀಡಿದರು. ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಮಾತನಾಡಿ, ಹೊಸದುರ್ಗ ತಾಲ್ಲೂಕಿನಲ್ಲಿಯೂ ಗರ್ಭಿಣಿಯರ ಸಾವು ಹಾಗೂ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳವಾಗುತ್ತಿದೆ. ತಾಯಿ ಮರಣ, ಶಿಶು ಮರಣ ತಡೆಯುವವರು ಯಾರು ಎಂದು ಪ್ರಶ್ನಿಸಿದ ಅವರು, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾತನಾಡಿ, ಸಹಜ ಹೆರಿಗೆ ಮಾಡಿಸಲು ಶಿಫಾರಸ್ಸು ಮಾಡುವಂತೆ ಮನೆಗೆ ಬಂದು ಅಳಲು ತೋಡಿಕೊಳ್ಳುತ್ತಿದ್ದಾರೆ. ಸಾರ್ವಜನಿಕರಿಗೆ ಸಹಜ ಹೆರಿಗೆಯ ಅರಿವು ಆಗಿದೆ. ಆದರೆ ವೈದ್ಯಾಧಿಕಾರಿಗಳೇ ಸಿಜೇರಿಯನ್‍ಗೆ ಮುಂದಾಗುತ್ತಿದ್ದಾರೆ. ಸಹಜ ಹೆರಿಗೆ ಮಾಡಿಸುವಂತೆ ಶಿಫಾರಸ್ಸು ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, ತಾಯಿ ಮರಣ, ಶಿಶು ಮರಣ ಹಾಗೂ ಸಿಜೇರಿಯನ್ ಹೆಚ್ಚಳ ಕುರಿತಂತೆ ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ವರದಿ ನೀಡುವಂತೆ ನೋಟಿಸ್ ನೀಡುವಂತೆ ತಾಕೀತು ಮಾಡಿದರು. ತಾಯಿ ಮರಣ, ಶಿಶು ಮರಣಕ್ಕೆ ಸಂಬಂಧಿಸಿದಂತೆ ಪ್ರತಿ ಕೇಸ್‍ಗೂ ಪತ್ಯೇಕ ವಿಶ್ಲೇಷಣಾ ವರದಿ ನೀಡುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ತಾಯಿ ಮರಣ, ಶಿಶು ಮರಣ ಕಡಿಮೆ ಮಾಡುವ ನಿಟ್ಟಿನಲ್ಲಿ ಪ್ರತಿ ತಿಂಗಳು 6ನೇ ತಾರೀಖು ಹಾಗೂ 24 ನೇ ತಾರೀಖು ಗರ್ಭೀಣಿಯರಿಗೆ ವಿವಿಧ ಪರೀಕ್ಷೆಗಳನ್ನು ನಡೆಸಿ, ಅವರಿಗೆ ಕಬ್ಬಿಣಾಂಶದ ಮಾತ್ರೆ ಸೇರಿದಂತೆ ವಿವಿಧ ಅಗತ್ಯ ಚಿಕಿತ್ಸೆ ಔಷಧಗಳನ್ನು ನೀಡಲಾಗುತ್ತಿದೆ ಎಂದು ಡಾ. ರೇಣುಪ್ರಸಾದ್ ಮಾಹಿತಿ ನೀಡಿದರು.
1544 ಶಾಲೆ ಕೊಠಡಿಗಳ ಅವಶ್ಯಕತೆ:


ಜಿಲ್ಲೆಯಲ್ಲಿ ಒಟ್ಟು 1544 ಶಾಲೆ ಕೊಠಡಿಗಳ ನಿರ್ಮಾಣದ ಅವಶ್ಯಕತೆಯಿದೆ ಎಂದು ಡಿಡಿಪಿಐ ಮಂಜುನಾಥ್ ಸಭೆಗೆ ಮಾಹಿತಿ ನೀಡಿದರು. ಶಾಲೆ ನಿರ್ಮಾಣ ಕಾರ್ಯ ದೇವಾಲಯ ನಿರ್ಮಾಣದಷ್ಟೇ ಪವಿತ್ರವಾದ ಕೆಲಸ. ಇದಕ್ಕೆ ಒತ್ತು ನೀಡಿ ಶಾಸಕರ ಅನುದಾನ, ಡಿಎಂಎಫ್, ಕೆ.ಎಂ.ಇ.ಆರ್.ಸಿ ಸೇರಿದಂತೆ ಎಲ್ಲ ಯೋಜನೆಗಳಲ್ಲಿಯೂ ಅನುದಾನ ಒದಗಿಸಲಾಗಿದೆ. 2022-23 ರಲ್ಲಿ 591 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಒದಗಿಸಲಾಗಿದೆ. ಇದರಲ್ಲಿ ಇನ್ನೂ 202 ಕಾಮಗಾರಿಗಳು ಪೂರ್ಣಗೊಂಡಿಲ್ಲ. ಪಂಚಾಯತ್ ರಾಜ್ ಮತ್ತು ಇಂಜಿನಿಯರಿಂಗ್ ವಿಭಾಗಕ್ಕೆ ವಹಿಸಿದ 362 ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗಳಲ್ಲಿ 175 ಪೂರ್ಣಗೊಂಡಿವೆ. 113 ಪ್ರಗತಿಯಲ್ಲಿವೆ. 74 ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿ ಆರಂಭವಾಗಿಲ್ಲ. ಇದಕ್ಕೆ ಪಂಚಾಯತ್ ರಾಜ್ ಮತ್ತು ಇಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರನ್ನು ಹೊಣೆ ಮಾಡಿ ಕಠಿಣ ಕ್ರಮ ಕೈಗೊಳ್ಳುವಂತೆ ಸಚಿವ ಡಿ.ಸುಧಾಕರ್ ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್ ಅವರಿಗೆ ಸೂಚನೆ ನೀಡಿದರು.

ಬೋರವೆಲ್ ಬಾಕಿ ಪಾವತಿಗೆ ಸೂಚನೆ:


ಕಳೆದ ವರ್ಷದ ಬೇಸಿಗೆ ಕಾಲದಲ್ಲಿ ಕುಡಿಯುವ ನೀರಿನ ಸಲುವಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕೊರೆಯಿಸಿದ 390 ಬೋರ್‍ವೆಲ್‍ಗಳ ಬಾಕಿ ರೂ.5 ಕೋಟಿ ಪಾವತಿ ಬಾಕಿಯಿದೆ. ಸದ್ಯ ಲಭ್ಯ ಇರುವ ಅನುದಾನದಲ್ಲಿ ಬಾಕಿ ಮೊತ್ತ ಪಾವತಿಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಈ ಬಾರಿ ಬೇಸಿಗೆ ಕಾಲದಲ್ಲಿ ಬೋರ್‍ವೆಲ್ ಕೊರೆಯಲು ಗುತ್ತಿಗೆದಾರರು ಮುಂದೆ ಬರುವುದಿಲ್ಲ. ಇದರಿಂದ ಕುಡಿಯುವ ನೀರಿನ ಸರಬರಾಜಿಗೆ ತೊಂದರೆ ಎದುರಾಗುತ್ತದೆ. ಜಿಲ್ಲಾಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಸಚಿವ ಡಿ.ಸುಧಾಕರ್ ಸೇರಿದಂತೆ ಎಲ್ಲಾ ಶಾಸಕರು ಸೂಚಿಸಿದರು.

ಪ್ರಸಕ್ತ ಅವಧಿಯಲ್ಲಿಯೇ ರಸ್ತೆ ಅಗಲೀಕರಣಕ್ಕೆ ನಿರ್ದೇಶನ:


ಚಿತ್ರದುರ್ಗ ನಗರದ ಪಿ.ಬಿ ರಸ್ತೆ ಅಗಲೀಕರಣ ಕಾರ್ಯ ನಮ್ಮ ಅಧಿಕಾರ ಅವಧಿಯಲ್ಲಿಯೇ ಪೂರ್ಣಗೊಳ್ಳಬೇಕು. ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ್ ಹಾಗೂ ನಗರಸಭೆ ಅಧಿಕಾರಿಗಳು ಸೂಕ್ತ ದಾಖಲೆಗಳನ್ನು ಸಂಗ್ರಹಿಸಿ, ರಸ್ತೆ ಅಗಲೀಕರಣ ಕಾರ್ಯಕ್ಕೆ ಮುಂದಾಗಬೇಕು ಎಂದು ಸಚಿವ ಡಿ.ಸುಧಾಕರ್ ಸಭೆಯಲ್ಲಿ ನಿರ್ದೇಶನ ನೀಡಿದರು.
ಸರ್ವೋಚ್ಚ ನ್ಯಾಯಾಲಯವೇ ಧಾರ್ಮಿಕ ಶ್ರದ್ದಾ ಕೇಂದ್ರಗಳನ್ನೇ ರಸ್ತೆ ಅಗಲೀಕರಣಕ್ಕಾಗಿ ಮುಲಾಜು ತೋರದೆ ತೆರವುಗೊಳಿಸುವಂತೆ ಆದೇಶ ನೀಡಿದೆ. ಹಳೆಯ ಪಿ.ಬಿ ರಸ್ತೆಯನ್ನು ಅನಧಿಕೃತವಾಗಿ ಒತ್ತುವರಿ ಮಾಡಿದವರನ್ನು ತೆರವುಗೊಳಿಸಲು ಯಾವುದೇ ಮುಲಾಜು ತೋರಬೇಡಿ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.
ಚಳ್ಳಕೆರೆ ಹಾಗೂ ಹಿರಿಯೂರಿನಿಂದ ಚಿತ್ರದುರ್ಗ ನಗರ ಪ್ರವೇಶ ಮಾಡುವ ಪಿ.ಬಿ. ರಸ್ತೆ ಸರ್ಕಾರಿ ವಿಜ್ಞಾನ ಕಾಲೇಜಿನಿಂದ ಆಸ್ಪತ್ರೆಯವರೆಗೆ ಸಾಕಷ್ಟು ವಿಸ್ತಾರವಾಗಿದೆ. ಅದರೆ ನಗರದ ಮುಖ್ಯಭಾಗದಲ್ಲಿ ಒತ್ತುವಾರಿಯಾಗಿದೆ. ಇದಕ್ಕಿಂತ ಬೇರೆ ನಿದರ್ಶನ ಬೇಕಿಲ್ಲ. ಅಧಿಕಾರಿಗಳು ಒತ್ತುವರಿ ತೆರವಿಗೆ ಮುಂದಾಗಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ದಾವಣಗೆರೆ ಮಹಾನಗರ ಪಾಲಿಕೆ ಒತ್ತುವರಿಯಾಗಿದ್ದ ಪಿ.ಬಿ.ರಸ್ತೆಯನ್ನು ತೆರವುಗಳಿಸಿ ಕ್ರಮ ಕೈಗೊಂಡಿದೆ. ಚಿತ್ರದುರ್ಗ ನಗರಸಭೆ ಅಧಿಕಾರಿಗಳು ದಾವಣಗೆರೆಗೆ ಭೇಟಿ ನೀಡಿ, ಮಾಹಿತಿ ಪಡೆದುಕೊಳ್ಳುವಂತೆ ವಿಧಾನಪರಿಷತ್ ಶಾಸಕ ಕೆ.ಎಸ್.ನವೀನ್ ಸಲಹೆ ನೀಡಿದರು.
1905ರಲ್ಲಿ ನಗರದ ಮುಖ್ಯರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಎಂದು ಗುರುತಿಸಲಾಗಿತ್ತು. ತದನಂತರ ಹೊಸ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ನಂತರ ಇದನ್ನು ರಾಜ್ಯ ಹೆದ್ದಾರಿಯನ್ನಾಗಿ ಪರಿವರ್ತಿಸಲಾಗಿದೆ. ಆದರೆ ಹೆದ್ದಾರಿ ಅಗಲದ ಅಳೆತೆಯನ್ನು ಕಡಿಮೆ ಮಾಡಿಲ್ಲ. ಒತ್ತುವರಿಯಾದ ರಸ್ತೆಯನ್ನು ಅಧಿಕಾರಿಗಳು ಗುರುತಿಸಬೇಕು. ಇದರೊಂದಿಗೆ ನಗರದ ರಾಜಕಾಲುವೆ ಮೇಲಿನ ನಿರ್ಮಾಣಗಳ ತೆರವಿಗೂ ಮುಂದಾಗಬೇಕು ಎಂದು ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಈ ಸಂದರ್ಭದಲ್ಲಿ ಹೇಳಿದರು.
ಮಾರ್ಚ್ ಒಳಗೆ ರಸ್ತೆ ಗುಂಡಿಗಳನ್ನು ಮುಚ್ಚಬೇಕು :


ಲೋಕೋಪಯೋಗಿ ಇಲಾಖೆ ವತಿಯಿಂದ ರಸ್ತೆ ಗುಂಡಿಗಳನ್ನು ಸರಿಯಾಗಿ ಮುಚ್ಚಿಲ್ಲ ಎಂದು ಸಚಿವ ಡಿ.ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದರು. ಕಳೆದ ಕೆಡಿಪಿ ಸಭೆಯಲ್ಲಿ ರಸ್ತೆ ಗುಂಡಿ ಮುಚ್ಚುವಂತೆ ಸೂಚಿಸಿದ್ದರೂ ಸಹ ಸರಿಯಾಗಿ ಕೆಲಸ ಮಾಡದಿದ್ದರೆ ಹೇಗೆ ಎಂದು ಪ್ರಶ್ನಿಸಿದರು. ಮಾರ್ಚ್ ಮಾಹೆಯ ಅಂತ್ಯದೊಳಗೆ ಜಿಲ್ಲೆಯ ಎಲ್ಲ ರಸ್ತೆ ಗುಂಡಿಗಳನ್ನು ಮುಚ್ಚಿಸಲು ಕ್ರಮ ವಹಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರು ಸಭೆಗೆ ಮಾಹಿತಿ ನೀಡಿದರು. ನಿಗದಿತ ಅವಧಿಯೊಳಗೆ ರಸ್ತೆ ಗುಂಡಿಗಳನ್ನು ಮುಚ್ಚದಿದ್ದಲ್ಲಿ, ಕಡ್ಡಾಯ ರಜೆಗೆ ಕಳುಹಿಸಲಾಗುವುದು ಜಿಲ್ಲಾ ಉಸ್ತುವಾರಿ ಸಚಿವರು ಇದೇ ವೇಳೆ ಎಚ್ಚರಿಕೆ ನೀಡಿದರು.

ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿ:


ಬೇಸಿಗೆ ಪ್ರಾರಂಭವಾಗಿರುವುದರಿಂದ ವಿದ್ಯುತ್ ಪೂರೈಕೆ ಸಂಬಂಧ ವಿವಿಧೆಡೆಯಿಂದ ಸಾಕಷ್ಟು ದೂರುಗಳು ಬರುತ್ತಿವೆ. ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳೊಂದಿಗೆ ಶಿಷ್ಠಾಚಾರ ಪಾಲನೆ ಮಾಡಬೇಕು. ದೂರುಗಳಿಗೆ ತ್ವರಿತವಾಗಿ ಸ್ಪಂದಿಸಲು ಕ್ರಮವಹಿಸಬೇಕು ಎಂದು ಬೆಸ್ಕಾಂ ಕಾರ್ಯಪಾಲಕ ಇಂಜಿನಿಯರ್ ತಿಮ್ಮರಾಯಪ್ಪ ಅವರಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು, ಇನ್ನೊಂದು ಬಾರಿ ನಿಮ್ಮ ಮೇಲೆ ದೂರುಗಳು ಬಂದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.
ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ:


ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಶಾಸಕ ಬಿ.ಜಿ.ಗೋವಿಂದಪ್ಪ ಹಾಗೂ ಶಾಸಕ ಟಿ.ರಘುಮೂರ್ತಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೇಸಿಗೆಯ ಸಂದರ್ಭದಲ್ಲಿ ಗ್ರಾಮಗಳಲ್ಲಿ ಸಾರ್ವಜನಿಕರಿಗೆ ಉತ್ತರಿಸಲು ಆಗುತ್ತಿಲ್ಲ. ಶೀಘ್ರವಾಗಿ ಜೆಜೆಎಂ ಕಾಮಗಾರಿ ಪೂರ್ಣಗೊಳಿಸದಿದ್ದರೆ ಹೇಗೆ? ನೀವು ಪೂರ್ಣಗೊಳಿಸುತ್ತಿಲ್ಲ, ನಾವು ಜನರಿಂದ ಹೇಳಿಸಿಕೊಳ್ಳುವುದು ತಪ್ಪುತ್ತಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸಚಿವರ ತೀವ್ರ ಅಸಮಾಧಾನ :


ವಿವಿಧ ಇಲಾಖೆ ಅಧಿಕಾರಿಗಳ ಕಾರ್ಯವೈಖರಿಗೆ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ತೀವ್ರ ಅಸಮಧಾನ ವ್ಯಕ್ತಪಡಿಸಿದರು. ಎಸ್.ಸಿ ಹಾಗೂ ಎಸ್.ಟಿ ಜನರು ಹೆಚ್ಚಿರುವ ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಅಭಿವೃದ್ಧಿ ಕಾಮಗಾರಿಗಳು ವೇಗವಾಗಿ ನಡೆಯುತ್ತಿಲ್ಲ. ಅಧಿಕಾರಿಗಳಿಗೆ ಬದ್ದತೆ ಇಲ್ಲದಂತಾಗಿದೆ. ಕಠಿಣ ಪರಿಶ್ರಮ ವಹಿಸಿ ಕೆಲಸ ಮಾಡಲು ಇಷ್ಟವಿರದ ಅಧಿಕಾರಿಗಳು ಕಡ್ಡಾಯ ರಜೆಯ ಮೇಲೆ ತೆರಳಿ, ಇಲ್ಲವಾದರೆ ವರ್ಗಾವಣೆ ತೆಗೆದುಕೊಂಡು ಜಿಲ್ಲೆಯಿಂದ ನಿರ್ಗಮಿಸಿ ಎಂದು ಸಚಿವ ಡಿ.ಸುಧಾಕರ್ ಖಡಕ್ ಸೂಚನೆ ನೀಡಿದರು.
2022-23ನ ಸಾಲಿನಲ್ಲಿಯೇ ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ಹಾಗೂ ನರೇಗಾ ಪರಿವರ್ತನೆಯಡಿ ಹಿರಿಯೂರು ಕ್ಷೇತ್ರದಲ್ಲಿ ಮಂಜೂರಾದ ಶಾಲೆ, ಅಂಗನವಾಡಿ ಹಾಗೂ ಶೌಚಾಲಯ ಕಟ್ಟಡಗಳ ಕಾಮಗಾರಿ ಪೂರ್ಣಗೊಂಡಿಲ್ಲ. ಕೆಲವು ಸ್ಥಳಗಳಲ್ಲಿ ಕಾಮಗಾರಿಗಳನ್ನು ಆರಂಭಿಸಿಲ್ಲ. ಅಭಿವೃದ್ಧಿ ಮಾಡುತ್ತಾರೆ ಎಂದು ಭಾವಿಸಿ ಜನರು ನಮ್ಮನ್ನು ಆಯ್ಕೆ ಮಾಡಿದ್ದಾರೆ. ಅವರಿಗೆ ಉತ್ತರ ನೀಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸಭೆಯಲ್ಲಿ ಶಾಸಕರಾದ ಎನ್.ವೈ.ಗೋಪಾಲಕೃಷ್ಣ, ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ, ಡಾ.ಎಂ.ಚಂದ್ರಪ್ಪ, ಕೆ.ಸಿ.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ. ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading