ನಾಯಕನಹಟ್ಟಿ, ಜೂ.24: ಶಾಸಕ ಎನ್.ವೈ. ಗೋಪಾಲಕೃಷ್ಣ ಅವರು ಏಳು ಬಾರಿ ಶಾಸಕನಾಗಿದ್ದೇನೆ ಎಂದು ಹೇಳಿಕೊಳ್ಳುತ್ತಾರೆ. ಆದರೆ ಕ್ಷೇತ್ರದ ಅಭಿವೃದ್ಧಿಯಲ್ಲಿ ಅವರ ಕೊಡುಗೆ ಶೂನ್ಯವಾಗಿದೆ ಎಂದು ಮೊಳಕಾಲ್ಮೂರು ಕ್ಷೇತ್ರದ ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ಗಂಭೀರ ಆರೋಪ ಮಾಡಿದರು.
ಪಟ್ಟಣದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯಲ್ಲಿ ಭಾರಿ ಹಿನ್ನಡೆ ಅನುಭವಿಸುತ್ತಿದೆ. ಕ್ಷೇತ್ರದ ಅಭಿವೃದ್ಧಿಯತ್ತ ಗಮನ ಹರಿಸದೆ ವೈಯಕ್ತಿಕ ಹಿತಾಸಕ್ತಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಆರೋಪಿಸಿದರು.
ಯಾವುದೇ ಕಾಮಗಾರಿ ನಡೆದರೂ ಶೇ.20ರಷ್ಟು ಕಮಿಷನ್ ಪಡೆಯಲಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಹೇಳುತ್ತಿದ್ದಾರೆ. ಏಳು ಬಾರಿ ಶಾಸಕನಾಗಿದ್ದೇನೆ ಎಂದು ಹೇಳಿಕೊಳ್ಳುವ ಗೋಪಾಲಕೃಷ್ಣ ಅವರು ಕ್ಷೇತ್ರದಲ್ಲಿ ಯಾವ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂಬುದನ್ನು ಜನರ ಮುಂದೆ ತೋರಿಸಬೇಕು. ಇಂತಹ ಪರಿಸ್ಥಿತಿಯಲ್ಲಿ ಸಚಿವ ಸ್ಥಾನ ಕೇಳಲು ಅವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ತಮ್ಮ ಶಾಸಕತ್ವದ ಅವಧಿಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ಅನುಷ್ಠಾನಗೊಳಿಸಿ ಕ್ಷೇತ್ರದ ಕೆರೆಗಳಿಗೆ ನೀರು ಹರಿಸುವ ಕೆಲಸ ಮಾಡಿದ್ದೇನೆ. ಬಳ್ಳಾರಿಯಿಂದ ಹಿರಿಯೂರಿನವರೆಗೆ ಸುಮಾರು ₹4,000 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಪಡಿಸಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಅಗತ್ಯ ಅನುದಾನ ತರಲು ಶ್ರಮಿಸಿದ್ದೇನೆ ಎಂದು ತಿಳಿಸಿದರು.
ಮೊಳಕಾಲ್ಮೂರು ಪಟ್ಟಣದಲ್ಲಿ ವಾಲ್ಮೀಕಿ ಭವನ ನಿರ್ಮಾಣಕ್ಕೆ ಜಾಗ ನೀಡುವ ವಿಚಾರದಲ್ಲಿ ಅಡ್ಡಿಪಡಿಸಲಾಗಿತ್ತು. ನಂತರ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ವಾಲ್ಮೀಕಿ ಭವನ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿ, ವಾಲ್ಮೀಕಿ ಸಮುದಾಯಕ್ಕೆ ಕೊಡುಗೆಯಾಗಿ ನೀಡಿದ್ದೇನೆ ಎಂದು ಹೇಳಿದರು.
ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳ ಅಭಿವೃದ್ಧಿಗೆ ಗೋಪಾಲಕೃಷ್ಣ ಅವರು ಯಾವುದೇ ಗಮನಾರ್ಹ ಕೆಲಸ ಮಾಡಿಲ್ಲ. ಜನಪ್ರತಿನಿಧಿಯಾಗಿ ಎಲ್ಲರನ್ನು ಸಮಾನವಾಗಿ ಕಾಣುವ ಸಂಸ್ಕೃತಿ ಇರಬೇಕು. ಆದರೆ ಸಾಮಾನ್ಯ ಜನರೊಂದಿಗೆ ಗೌರವಯುತವಾಗಿ ವರ್ತಿಸುವ ಮನೋಭಾವ ಕಾಣಿಸುತ್ತಿಲ್ಲ ಎಂದು ಟೀಕಿಸಿದರು.
ಮತದಾರರ ಸೇವೆ ಮಾಡುವ ಬದಲು ಅಧಿಕಾರದ ಧೋರಣೆ ತೋರಿಸುತ್ತಿದ್ದಾರೆ. ಇಂತಹ ನಡವಳಿಕೆಯಿಂದ ಕ್ಷೇತ್ರದ ಮತದಾರರಿಗೆ ನಿರಾಸೆಯಾಗಿದೆ ಎಂದು ಎಸ್. ತಿಪ್ಪೇಸ್ವಾಮಿ ಆರೋಪಿಸಿದರು.
About The Author
Discover more from JANADHWANI NEWS
Subscribe to get the latest posts sent to your email.