January 29, 2026
IMG-20260125-WA0312.jpg

ದೊಡ್ಡಉಳ್ಳಾರ್ತಿ, ಚಳ್ಳಕೆರೆ:
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ದೊಡ್ಡಉಳ್ಳಾರ್ತಿ ಗ್ರಾಮದಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಜನಸಂಪರ್ಕ ಸಭೆ ಆಯೋಜಿಸಲಾಯಿತು. ಈ ಸಭೆಯಲ್ಲಿ ಮಾತನಾಡಿದ ತಳಕು ಪೊಲೀಸ್ ಠಾಣೆಯ ಪಿಎಸ್‌ಐ ಶಿವಕುಮಾರ್ ಕೆ, ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಭದ್ರತೆ ಕಾಪಾಡುವುದು ಪೊಲೀಸ್ ಇಲಾಖೆಯಷ್ಟೇ ಅಲ್ಲ, ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯೂ ಆಗಿದೆ ಎಂದು ತಿಳಿಸಿದರು.

ಅಪರಾಧ ತಡೆಗಟ್ಟುವಲ್ಲಿ ಸಾರ್ವಜನಿಕರ ಸಹಕಾರ ಅತ್ಯವಶ್ಯಕವಾಗಿದ್ದು, ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಚಟುವಟಿಕೆಗಳು ಕಂಡುಬಂದರೆ ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು. ಮಾಹಿತಿ ನೀಡುವವರ ವಿವರಗಳನ್ನು ಸಂಪೂರ್ಣ ಗೌಪ್ಯವಾಗಿಡಲಾಗುತ್ತದೆ ಎಂದರು.
ಸೈಬರ್ ಅಪರಾಧಗಳು, ಆನ್‌ಲೈನ್ ವಂಚನೆ, ಬ್ಯಾಂಕ್ ಹ್ಯಾಕಿಂಗ್, ಯುಪಿಐ ಹಾಗೂ ಎಟಿಎಂ ವಂಚನೆಗಳ ಬಗ್ಗೆ ಎಚ್ಚರಿಕೆ ನೀಡಿದ ಅವರು, ಯಾವುದೇ ವಂಚನೆ ಸಂಭವಿಸಿದ ತಕ್ಷಣ 1930 ಸೈಬರ್ ಅಪರಾಧ ಸಹಾಯವಾಣಿಗೆ ಕರೆ ಮಾಡುವಂತೆ ತಿಳಿಸಿದರು. OTP, ಪಿನ್ ಹಾಗೂ ಪಾಸ್‌ವರ್ಡ್‌ಗಳನ್ನು ಯಾರಿಗೂ ನೀಡಬಾರದು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ವೃತ್ತ ನಿರೀಕ್ಷಕ ಹನುಮಂತಪ್ಪ ಶಿರೇಹಳ್ಳಿ, ಅಪ್ರಾಪ್ತ ವಯಸ್ಕರಿಗೆ ವಾಹನ ಚಾಲನೆ ಮಾಡುವುದು ಹಾಗೂ ಅವರಿಗೆ ವಾಹನ ನೀಡುವುದು ಕಾನೂನುಬಾಹಿರ ಅಪರಾಧ ಎಂದು ಎಚ್ಚರಿಸಿದರು. ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯವಾಗಿದ್ದು, ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಡಿವೈಎಸ್ಪಿ ಸತ್ಯನಾರಾಯಣ ರಾವ್ ಮಾತನಾಡಿ, ಪೊಲೀಸ್ ಇಲಾಖೆ ಸದಾ ಸಾರ್ವಜನಿಕರ ಸುರಕ್ಷತೆಗೆ ಬದ್ಧವಾಗಿದ್ದು, ಕಾನೂನು ಪಾಲನೆ ಮತ್ತು ಅಪರಾಧ ತಡೆಗೆ ಜನರು ಸಹಕರಿಸಬೇಕು ಎಂದು ಹೇಳಿದರು. ಬಾಲ್ಯವಿವಾಹ ಕಾನೂನುಬಾಹಿರವಾಗಿದ್ದು, ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳಿಗೆ ಪೋಕ್ಸೋ ಕಾಯ್ದೆಯಡಿ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ದೊಡ್ಡಉಳ್ಳಾರ್ತಿ ಗ್ರಾಮದ ಗ್ರಾಮಸ್ಥರು ಹಾಗೂ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading