September 15, 2025
1740483533314.jpg



ಚಿತ್ರದುರ್ಗಫೆ.25:
ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶಾಲಾ ಕೊಠಡಿಗಳ ದುರಸ್ತಿ ಕಾರ್ಯವನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಸಂಸದರಾದ ಗೋವಿಂದ ಎಂ.ಕಾರಜೋಳ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ವಿವಿಧೆಡೆ ಬಹುತೇಕ ಸರ್ಕಾರಿ ಶಾಲಾ ಕೊಠಡಿಗಳು ಶಿಥಿಲಾವ್ಯಸ್ಥೆಯಲ್ಲಿರುವುದನ್ನು ಗಮನಿಸಿದ್ದೇನೆ. ಸರ್ಕಾರಿ ಶಾಲೆಗಳಿಗೆ ಕಡು ಬಡುವರ ಮಕ್ಕಳು ಬರುತ್ತಾರೆ. ಶಾಲಾ ಕೊಠಡಿಗಳ ದುರಸ್ತಿಗಾಗಿ ಕೆಎಂಇಆರ್‍ಸಿ, ಡಿಎಂಎಫ್ ಅನುದಾನ ಸೇರಿದಂತೆ ಜಿಲ್ಲೆಗೆ 3,700 ಕೋಟಿ ಅನುದಾನ ದೊರೆತಿದೆ. ಆದಾಗ್ಯೂ ಶಾಲೆಗಳ ಅಭಿವೃದ್ಧಿ ಕಾಮಗಾರಿಗಳು ಆಗುತ್ತಿಲ್ಲ. ಇದಕ್ಕೆ ನಿಮ್ಮ ವೈಫಲ್ಯವೇ ಕಾರಣ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಜಿಲ್ಲೆಯ ಶಾಲಾ-ಕಾಲೇಜು, ವಿದ್ಯಾರ್ಥಿನಿಲಯ, ಆಸ್ಪತ್ರೆ ಹಾಗೂ ಅಂಗನವಾಡಿ ಕೇಂದ್ರಗಳ ಕಟ್ಟಡ ಕಾಮಗಾರಿಗಳನ್ನು ಸುಸಜ್ಜಿತವಾಗಿ ಹಾಗೂ ಅತ್ಯಾಧುನಿಕವಾಗಿ ನಿರ್ಮಿಸಬೇಕು. ಈ ನಿಟ್ಟಿನಲ್ಲಿ ಮೂರು ತಿಂಗಳೊಳಗೆ ತ್ವರಿತವಾಗಿ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಬೇಕು. ಜಿಲ್ಲೆಯಲ್ಲಿ ಒಟ್ಟು 609 ಸರ್ಕಾರಿ ಪ್ರಾಥಮಿಕ ಶಾಲೆಗಳು ಇದ್ದು, ಈ ಪೈಕಿ ಆರ್‍ಸಿಸಿ ಮೇಲ್ಛಾವಣಿ, ಶೀಟ್ ಹಾಗೂ ಹೆಂಚಿನ ಮೇಲ್ಛಾವಣಿ ಹೊಂದಿರುವ ಶಾಲೆಗಳು ಎಷ್ಟು ಎಂಬುದರ ಬಗ್ಗೆ ತಾಲ್ಲೂಕು ವಾರು ವಿವರ ನೀಡಬೇಕು. ಶಾಲೆಗಳ ದುರಸ್ತಿಗಾಗಿ ಒದಗಿಸಲಾಗಿರುವ ಅನುದಾನದ ಖರ್ಚು ವೆಚ್ಚದ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ ಟ್ರಸ್ಟ್ ಮೂಲಕ ಶಾಲಾ ಬ್ಯಾಗ್, ಪುಸ್ತಕ, ಅತ್ಯುತ್ತಮವಾದ ಬಟ್ಟೆಗಳನ್ನು ವಿತರಣೆ ಮಾಡಿಸಲು ಕ್ರಮ ವಹಿಸಲಾಗುವುದು. ಮುಂಬರುವ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಮೊದಲು ತಾಲ್ಲೂಕುವಾರು ಪ್ರಾಥಮಿಕ ಶಾಲೆಗಳ ಸಂಪೂರ್ಣ ಮಾಹಿತಿ ನೀಡುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಹೇಳಿದರು.
ತಜ್ಞ ವೈದ್ಯರ ನೇಮಕಕ್ಕೆ ಕ್ರಮ ವಹಿಸಿ:
ಜಿಲ್ಲೆಯ ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ ವಹಿಸಬೇಕು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಜಿ.ಪಿ.ರೇಣುಪ್ರಸಾದ್ ಅವರಿಗೆ ತಿಳಿಸಿದರು. ಜಿಲ್ಲೆಯಲ್ಲಿ 29 ತಜ್ಞ ವೈದ್ಯರ ಕೊರತೆ ಇದೆ. ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳಿಗೆ ಮೂರು ಬಾರಿ ಪತ್ರಿಕೆ ಪ್ರಕಟಣೆ ನೀಡಿದ್ದು, ಇಬ್ಬರು ಸ್ತ್ರೀರೋಗ ತಜ್ಞರು ಮಾತ್ರ ಹಾಜರಾಗಿದ್ದು, ಸಮುದಾಯ ಆರೋಗ್ಯ ಕೇಂದ್ರ ಸಿರಿಗೆರೆ-1 ಹಾಗೂ ಬೆಲಗೂರು-1 ಹುದ್ದೆಗೆ ನೇಮಕ ಮಾಡಲಾಗಿದೆ. ಉಳಿದಂತೆ ಯಾವ ತಜ್ಞ ವೈದ್ಯರು ಹಾಜರಾಗಿರುವುದಿಲ್ಲ. ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗೆ ಮೊತ್ತೊಮ್ಮೆ ಪತ್ರಿಕಾ ಪ್ರಕಟಣೆ ನೀಡಿ ನೇರ ಸಂದರ್ಶನ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಸಭೆಗೆ ಮಾಹಿತಿ ನೀಡಿದರು. ತಜ್ಞ ವೈದ್ಯರ ನೇಮಕವನ್ನು ಗಂಭೀರವಾಗಿ ಪರಿಗಣಿಸಿ, ಜಿಲ್ಲಾಧಿಕಾರಿಗಳ ಮೂಲಕ ಆರೋಗ್ಯ ಇಲಾಖೆ ಆಯುಕ್ತರಿಗೆ ಪತ್ರ ಬರೆದು, ಕನಿಷ್ಠ ಆರೋಗ್ಯ ಸೇವೆ ಒದಗಿಸಲು ಅಗತ್ಯ ಕ್ರಮವಹಿಸಬೇಕು ಎಂದು ಸಂಸದರು ಸೂಚನೆ ನೀಡಿದರು.
ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಕೋಲ್ಡ್ ಸ್ಟೋರೇಜ್ ತೀರಾ ಅವಶ್ಯಕವಾಗಿದ್ದು, ಕೋಲ್ಡ್ ಸ್ಟೋರೇಜ್‍ಗೆ ರೂ.10 ಲಕ್ಷ ಅನುದಾನವನ್ನು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಈ ಕುರಿತು ಜಿಲ್ಲಾ ಶಸ್ತ್ರಚಿಕಿತ್ಸಕರು ಅನುಷ್ಠಾನಕ್ಕೆ ಕ್ರಮವಹಿಸಬೇಕು ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದರು.
ಕಾಟಾಚಾರದ ಕೆಲಸ ಸಲ್ಲದು:
ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ ಕೈಗೊಂಡಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಯಾವುದೇ ಕಾರಣಕ್ಕೂ ಕಾಟಾಚಾರದ ಕೆಲಸ ಆಗಬಾರದು ಎಂದು ಸಂಸದ ಗೋವಿಂದ ಕಾರಜೋಳ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಬಸವನಗೌಡ ಪಾಟೀಲ್‍ಗೆ ಸೂಚಿಸಿದರು.
ಎರಡು ವರ್ಷ ಪೂರ್ಣಗೊಂಡರೂ ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳು ಮುಕ್ತಾಯಗೊಂಡಿಲ್ಲ. ಗ್ರಾಮಗಳಲ್ಲಿ ರಸ್ತೆ ಅಗೆದಿರುವುದರಿಂದ ಜನರ ಸಂಚಾರಕ್ಕೆ ತೊಂದರೆಯಾಗುತ್ತಿದೆ. ನೀವು ಕಾಮಗಾರಿಯನ್ನು ಸರಿಯಾಗಿ ಮೇಲ್ವಿಚಾರಣೆ ಮಾಡುತ್ತಿಲ್ಲ ಎಂದು ತಿಳಿಸಿದ ಸಂಸದರು, ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳು ನಿಗಧಿತ ಅವಧಿಯೊಳಗೆ ಪೂರ್ಣಗೊಳ್ಳಬೇಕು. ಒಂದು ವೇಳೆ ನಿಗಧಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರನ್ನು ವಜಾಗೊಳಿಸಬೇಕು ಎಂದು ತಾಕೀತು ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಬಸವನಗೌಡ ಪಾಟೀಲ್, ಕಾಮಗಾರಿ ವಿಳಂಬವಾದ ಕಡೆ ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು ಎಂದರು. ಬೇಸಿಗೆ ಕಾಲದಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ 1056 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಈ ಪೈಕಿ ಕೆಟ್ಟುಹೋಗಿರುವ ಘಟಕಗಳನ್ನು ರಿಪೇರಿ ಮಾಡಿಸಿ, ನೀರು ಪೂರೈಸುವಂತೆ ಮಾಡಬೇಕು. ಚಾಲ್ತಿಯಲ್ಲಿರುವ ಘಟಕಗಳ ನಿರ್ವಹಣೆ ಸಮರ್ಪಕವಾಗಿರಬೇಕು ಎಂದು ಸಂಸದರು ತಿಳಿಸಿದರು.
ಹಕ್ಕು ಪತ್ರ ವಿತರಿಸಿ:
*ಕೊಳಗೇರಿ ಎಂದು ಘೋಷಣೆಯಾಗಿರುವ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರಿಗೆ ಶೀಘ್ರದಲ್ಲಿ ಹಕ್ಕುಪತ್ರ ವಿತರಿಸಿ, 15 ದಿನದೊಳಗೆ ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಎಲ್ಲ ಹಕ್ಕುಪತ್ರ ಫಲಾನುಭವಿಗಳಿಗೆ ನೊಂದಣಿ ಮಾಡಿಸಬೇಕು ಎಂದು ಸಂಸದ ಗೋವಿಂದ ಎಂ.ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದರು.
ಹಕ್ಕುಪತ್ರ ವಿತರಣಾ ಕಾರ್ಯಕ್ರಮಕ್ಕೆ ದಿನಾಂಕ ನಿಗದಿಮಾಡಿ, ಬಡವರು ಅಲೆದಾಟ ಮಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಎಲ್ಲ ಹಕ್ಕುಪತ್ರ ಫಲಾನುಭವಿಗಳನ್ನು ನೋಂದಣಿ ಮಾಡಿಸಬೇಕು. ದಾವಣಗೆರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಳಚೆ ನಿರ್ಮೂಲನಾ ಮಂಡಳಿಯ ಕಾರ್ಯಪಾಲಕ ಅಭಿಯಂತರರು ಚಿತ್ರದುರ್ಗದಲ್ಲಿ ವಾರದಲ್ಲಿ ಎರಡು ದಿನ ಗುರುವಾರ ಮತ್ತು ಶುಕ್ರವಾರ ಕರ್ತವ್ಯ ನಿರ್ವಹಿಸಬೇಕು. ಈ ಕುರಿತು ಆದೇಶ ಪತ್ರ ಹೊರಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಕುಮಾರ್ ಎಂ.ಸಂತೋಷ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading