August 25, 2026
IMG-20260825-WA0393



ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಚಳ್ಳಕೆರೆ ತಾಲೂಕಿನ ತಳಕು ಹೋಬಳಿಯ ಹಿರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳು ಮೂಲಭೂತ ಸೌಲಭ್ಯಗಳ ಕೊರತೆಯಿಂದ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿವೆ ಎಂಬ ಆರೋಪ ಕೇಳಿಬಂದಿದೆ.
ಹಿರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬುಕ್ಲಾರಹಳ್ಳಿ, ರುದ್ರಮ್ಮನಹಳ್ಳಿ, ಪಾಲನಾಯಕನಕೋಟೆ, ಕಾಕಿಬೋರನಹಟ್ಟಿ ಸೇರಿದಂತೆ ಹಲವು ಗ್ರಾಮಗಳಲ್ಲಿ ರಸ್ತೆ, ಚರಂಡಿ, ಸ್ವಚ್ಛತೆ, ಬೀದಿ ದೀಪ, ಶಿಕ್ಷಣ ಹಾಗೂ ಆರೋಗ್ಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ಕೊರತೆ ಎದುರಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.
ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ಹತ್ತು ಸಾವಿರಕ್ಕೂ ಅಧಿಕ ಜನಸಂಖ್ಯೆ ವಾಸಿಸುತ್ತಿದ್ದು, ಅಸಮರ್ಪಕ ಮೂಲಸೌಕರ್ಯಗಳ ನಡುವೆಯೇ ಜನರು ಜೀವನ ಸಾಗಿಸುವಂತಾಗಿದೆ. ಪಂಚಾಯಿತಿಗೆ ತೆರಿಗೆ ರೂಪದಲ್ಲಿ ಆದಾಯವಿದ್ದರೂ ಸಮರ್ಪಕವಾಗಿ ತೆರಿಗೆ ವಸೂಲಿ ಮಾಡದೆ ಇರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ತೊಂದರೆಯಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.
ಸ್ಥಳೀಯ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಅಗತ್ಯ ಸೌಲಭ್ಯಗಳ ಕೊರತೆಯಿಂದ ಸಾಕ್ಷರತಾ ಮಟ್ಟ ಕುಂಠಿತವಾಗುತ್ತಿದೆ. ರಾಜಕೀಯ ಕಾರಣಗಳಿಂದ ಗ್ರಾಮಗಳ ಅಭಿವೃದ್ಧಿ ಕಡೆಗಣಿಸಲಾಗುತ್ತಿದೆ ಎಂಬ ಅಸಮಾಧಾನವೂ ಗ್ರಾಮಸ್ಥರಲ್ಲಿ ವ್ಯಕ್ತವಾಗಿದೆ.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ನಿಯಮಿತವಾಗಿ ಲಭ್ಯವಿರುವುದಿಲ್ಲ ಎಂಬ ಆರೋಪವಿದ್ದು, ಪಂಚಾಯಿತಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಜವಾಬ್ದಾರಿತನಕ್ಕೆ ಒತ್ತು ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ತನಿಖೆ ನಡೆಸಬೇಕು ಎಂಬ ಆಗ್ರಹವೂ ವ್ಯಕ್ತವಾಗಿದೆ.
ಗ್ರಾಮದ ಅಂಗನವಾಡಿ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡುವುದು, ಹಾಳಾಗಿರುವ ರಸ್ತೆಗಳ ದುರಸ್ತಿ, ಚರಂಡಿಗಳ ಅವ್ಯವಸ್ಥೆ ಸರಿಪಡಿಸುವುದು ಹಾಗೂ ಬೀದಿ ದೀಪಗಳ ಸಮರ್ಪಕ ನಿರ್ವಹಣೆ ಮಾಡುವುದು ಸೇರಿದಂತೆ ಹಲವು ತುರ್ತು ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಗ್ರಾಮದಲ್ಲಿರುವ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ಹೆಚ್ಚಿನ ವೈದ್ಯಕೀಯ ಸೌಲಭ್ಯ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಳೆಗಾಲದಲ್ಲಿ ಕೂಲಿ ಕಾರ್ಮಿಕರಿಗೆ ಉದ್ಯೋಗದ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ (ಮನರೇಗಾ) ಸಮರ್ಪಕವಾಗಿ ಉದ್ಯೋಗ ಒದಗಿಸಬೇಕು ಎಂದು ಆಗ್ರಹಿಸಲಾಗಿದೆ. ಹಿರೇಹಳ್ಳಿ ಗ್ರಾಮವನ್ನು ಗುರುತಿಸುವ ನಾಮಫಲಕವನ್ನೂ ಅಳವಡಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಹಿರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿ, ಅಗತ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಬೇಕು. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಗ್ರಾಮಗಳತ್ತ ಗಮನಹರಿಸಿ ಮೂಲಸೌಕರ್ಯ ಕಲ್ಪಿಸಬೇಕು ಎಂದು ಮೊಳಕಾಲ್ಮೂರು ಕ್ಷೇತ್ರ ವಿಕಾಸ ಸಮಿತಿ ಅಧ್ಯಕ್ಷ ಬಿ.ಟಿ. ನಟರಾಜ್ ಅವರು ಒತ್ತಾಯಿಸಿದ್ದಾರೆ.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading