December 14, 2025
1764088515187.jpg

ಚಿತ್ರದುರ್ಗ ನ. 25:
ಆತ್ಮವಿಶ್ವಾಸ ಹಾಗೂ ಛಲವಿದ್ದಲ್ಲಿ ಅಂಗವಿಕಲ ನ್ಯೂನತೆಗಳು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಹೇಳಿದರು.
ಮಂಗಳವಾರ ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ 2025ರ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ವಿಕಲಚೇತನರ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ನಂತರ ಕ್ರೀಡಾ ಸ್ಪರ್ಧೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸಾಧನೆಗೆ ಅಂಗವಿಕಲತೆ ಹಾಗೂ ನ್ಯೂನತೆಗಳು ಅಡ್ಡಿಯಾಗುವುದಿಲ್ಲ. ಬದಲಾಗಿ ನಮ್ಮಲ್ಲಿ ಆತ್ಮವಿಶ್ವಾಸ ಮತ್ತು ಸಾಧಿಸುವ ಛಲವಿದ್ದಲ್ಲಿ ಸಾಧನೆಯ ಹಾದಿ ಸುಲಭವಾಗುತ್ತದೆ. ವಿಕಲಚೇತನರನ್ನು ಮುಖ್ಯವಾಹಿನಿಗೆ ತರಲು ಸರ್ಕಾರ ಹತ್ತು ಹಲವು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ವಿಕಲಚೇತನರ ಶ್ರೇಯೋಭಿವೃದ್ದಿಗೆ ಶ್ರಮಿಸುತ್ತಿದೆ. ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಅಂಗವಿಕಲರಿಗೆ ಹಲವು ಯೋಜನೆಗಳಿವೆ. ವಿಶೇಷವಾಗಿ ವಿಕಲಚೇತನರ ಪ್ರಕರಣಗಳನ್ನು ನ್ಯಾಯಾಲಯವೇ ವೈಯಕ್ತಿಕವಾಗಿ ದಾಖಲಿಸಿಕೊಂಡು ಶೀಘ್ರವಾಗಿ ನ್ಯಾಯವನ್ನು ಒದಗಿಸುವ ಕೆಲಸವನ್ನು ಮಾಡುತ್ತಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ತಾಲ್ಲೂಕು ಮಟ್ಟದಿಂದ ಸುಪ್ರಿಂ ಕೋರ್ಟ್‍ವರೆಗೂ ಉಚಿತ ಕಾನೂನು ಸಲಹೆ ಮತ್ತು ನೆರವಿಗೆ ವಕೀಲರನ್ನು ನೇಮಿಸಿ ಸೇವೆಯನ್ನು ನೀಡುತ್ತಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಈ ಬಗ್ಗೆ 15 ಜನರ ತಂಡವಿದೆ. ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ವಿಕಲಚೇತನರು ಕಾನೂನು ಸೇವಾ ಪ್ರಾಧಿಕಾರಕ್ಕೆ ಸಂಪರ್ಕಿಸಿ ಉಚಿತವಾಗಿ ಕಾನೂನು ಸಲಹೆ ಮತ್ತು ಸೇವೆಯನ್ನು ಪಡೆಯಬಹುದು. ಎಲ್ಲಾ ತಾಲ್ಲೂಕು ಮಟ್ಟದ ಮಕ್ಕಳಿಗೂ ಸಹ ಇಂತಹ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಯ ಪ್ರೋತ್ಸಹ ಸಿಗುವಂತಾಗಲಿ ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಎಚ್.ವಿಜಯ್ ಕುಮಾರ್ ಮಾತನಾಡಿ ಕ್ರೀಡಾ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ದೇಹ ಮತ್ತು ಮನಸ್ಸು ಶಾಂತತೆಯನ್ನು ಕಾಪಾಡಿಕೊಳ್ಳುತ್ತದೆ. ಎಲ್ಲಾ ತಾಲ್ಲೂಕು ಮಟ್ಟದಲ್ಲಿ ಅಂಧ ವಿದ್ಯಾರ್ಥಿಗಳಿಗೆ ಕ್ರೀಡೆಯನ್ನು ಈಗಾಗಲೇ ನಡೆಸಲಾಗಿದೆ. ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಪದಕಗಳನ್ನು ಮುಂದಿನ ದಿನಗಳಲ್ಲಿ ವಿತರಣೆ ಮಾಡಲಾಗುವುದು ಎಂದು ಹೇಳಿದರು.
ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್ ಮಾತನಾಡಿ ವಿಕಲಚೇತನರು ಯಾವುದೇ ಕೇತ್ರದಿಂದ ಅವಕಾಶ ವಂಚಿತರಾಗಬಾರದು, ಸಿಕ್ಕಂತಹ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಮಾದರಿ ವ್ಯಕ್ತಿಗಳಾಬೇಕು ಎಂದು ಹೇಳಿದ ಅವರು ಎಲ್ಲಾ ಅಭ್ಯರ್ಥಿಗಳು ಈ ಕಾರ್ಯಕ್ರಮದಲ್ಲಿ ಸ್ವಯಂಪ್ರೇರಿತರಾಗಿ ಭಾಗವಹಿಸಬೇಕು. ಸ್ಥಳಿಯ ಗ್ರಾಮ ಪಂಚಾಯತ್ ಅಡಿ ಅಧಿಕಾರಿಗಳ ಮೂಲಕ ವಿಶೇಷವಾಗಿ ಅಂಗವಿಕಲರಿಗೆ ಮಾಹಿತಿಯನ್ನು ಒದಗಿಸುವ ಕೆಲಸವಾಗುತ್ತಿದೆ. ಸರ್ಕಾರ ವಿಕಲಚೇತನರಿಗಾಗಿಯೇ ಹಲವು ಯೋಜನೆಗಳನ್ನು ಜಾರಿಗೆ ತಂದು ಶ್ರಮಿಸುತ್ತಿದೆ. ವಿಕಲಚೇತನರಿಗೆ ಶೇ 5% ರಷ್ಟು ಮೀಸಲಾತಿಯನ್ನು ನಿಗದಿ ಮಾಡಿದೆ. ಎಲ್ಲವನ್ನು ಉಪಯೋಗಿಸಿಕೊಂಡು ಮುನ್ನೆಲೆಗೆ ಬರಬೇಕೆಂದು ಹೇಳಿದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಪ್ರಾಸ್ತಾವಿಕ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಆರೋಗ್ಯ ತಪಾಸಣೆ ಶಿಬಿರಗಳು, ಶಾಲಾ ಕಾಲೇಜುಗಳಲ್ಲಿ ಹಾಗೂ ವಿಕಲಚೇತನರಿಗೆ ಇಲಾಖೆಯಲ್ಲಿ ಬರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಅರಿವನ್ನು ಮೂಡಿಸಬೇಕೆನ್ನುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಕ್ರೀಡಾ ವಿಭಾಗದಲ್ಲಿ ವಿಕಲಚೇತನರು ಯಾವುದರಲ್ಲಿಯೂ ಕಡಿಮೆ ಇಲ್ಲ. ಎಲ್ಲಾ ಕ್ಷೇತ್ರಗಳಲ್ಲಿಯೂ ತಮ್ಮ ಸಾಧನೆಯನ್ನು ತೋರುತ್ತಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತ ಎಂ.ನೆಲವಗಿ, ಸಾರ್ವಜನಿಕ ಶಿಕ್ಷಣ ಇಲಾಖೆ ದೈಹಿಕ ಶಿಕ್ಷಕ ಆರ್.ಉಮ್ಮೆಸಲ್ಮಾ, ಕರ್ನಾಟಕ ರಾಜ್ಯ ಅಂಗವಿಕಲರ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಚ್.ಶ್ರೀನಿವಾಸ ಸೇರಿದಂತೆ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading