ಡಿಸೆಂಬರ್ 2ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಾದರೂ ಅಥಣಿ ತಾಲೂಕಿನ ದಶಕಗಳ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆಯೇ? ಅಥಣಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸುವ ಬೇಡಿಕೆ ಈಡೇರುತ್ತದೆಯೇ? ಸಾರ್ವಜನಿಕರು ಕಂದಾಯ ಇಲಾಖೆಯ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಕೊನೆಗೊಳ್ಳುತ್ತದೆಯೇ? ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ ಮುತುವರ್ಜಿ ವಹಿಸುತ್ತದೆಯೇ ಎಂಬ ಪ್ರಶ್ನೆಗಳು ಇದೀಗ ತಾಲೂಕಿನ ಜನರನ್ನು ಕಾಡುತ್ತಿವೆ.
ತಾಲೂಕು ಆಡಳಿತ, ಜಿಲ್ಲಾಡಳಿತ, ರಾಜ್ಯ ಸರ್ಕಾರ, ಮಾನ್ಯ ಮುಖ್ಯಮಂತ್ರಿಗಳು, ರಾಜ್ಯದ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು, ರಾಜ್ಯಪಾಲರು, ರಾಷ್ಟ್ರಪತಿಗಳು, ಪ್ರಧಾನಮಂತ್ರಿಗಳು, ಕೇಂದ್ರ ಸರ್ಕಾರ ಹಾಗೂ ಕೇಂದ್ರ ಸಚಿವರು, ಕರ್ನಾಟಕದ ಲೋಕಸಭಾ ಸದಸ್ಯರು ಮತ್ತು ಸಂಬಂಧಪಟ್ಟ ಜನಪ್ರತಿನಿಧಿಗಳು ಈ ಸಮಸ್ಯೆಗಳ ಬಗ್ಗೆ ಇನ್ನಾದರೂ ಗಂಭೀರವಾಗಿ ಗಮನಹರಿಸಬೇಕಾಗಿದೆ.
ಅಥಣಿ ತಾಲೂಕಿನ ಜನರ ನ್ಯಾಯಯುತ ಬೇಡಿಕೆಗಳು ಹಾಗೂ ಅಭಿವೃದ್ಧಿ ಯೋಜನೆಗಳನ್ನು ಕೇವಲ ಮನವಿಗಳಿಗೆ ಸೀಮಿತಗೊಳಿಸದೆ, ಅವುಗಳನ್ನು ಕಾರ್ಯರೂಪಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ನಡೆಯಬೇಕಿದೆ. ಪ್ರತಿಬಾರಿಯೂ ಮನವಿ ಸಲ್ಲಿಸುವುದು, ಅಧಿಕಾರಿಗಳ ಕಚೇರಿಗಳಿಗೆ ಅಲೆದಾಡುವುದು, ಅಧಿವೇಶನದಲ್ಲಿ ಚರ್ಚೆಯಾಗಬಹುದು ಎಂದು ಕಾಯುವುದು — ಇದೇ ಜನರ ಬದುಕಾಗಬಾರದು.
ಈ ಬಾರಿಯೂ ಸಮಸ್ಯೆಗಳನ್ನು ನಿರ್ಲಕ್ಷಿಸಿ ಯಥಾಸ್ಥಿತಿ ಮುಂದುವರಿಸಿದರೆ ಅಥಣಿ ತಾಲೂಕಿನ ಅಭಿವೃದ್ಧಿ ಯಾವಾಗ? ಜನರ ಸಮಸ್ಯೆಗಳಿಗೆ ಪರಿಹಾರ ನೀಡುವವರು ಯಾರು? ಎಂಬ ಪ್ರಶ್ನೆಗಳಿಗೆ ಉತ್ತರ ನೀಡುವವರು ಯಾರು?
ಆದ್ದರಿಂದ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸರ್ಕಾರದ ಉನ್ನತ ಮಟ್ಟದ ನಾಯಕರು ಕೂಡಲೇ ಮಧ್ಯಪ್ರವೇಶಿಸಿ, ಅಥಣಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಿ, ಪ್ರಸ್ತಾಪಿತ ಯೋಜನೆಗಳಿಗೆ ಅನುಮೋದನೆ ನೀಡಿ, ಕಂದಾಯ ಇಲಾಖೆಯ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಕರ್ನಾಟಕ SC-ST ಮಹಿಳಾ ಸಬಲೀಕರಣ ಹೋರಾಟ ಸಮಿತಿಯ ರಾಜ್ಯ ಮಾಧ್ಯಮ ವಕ್ತಾರರಾದ ಮಹೇಶ್ ಎಂ. ಶರ್ಮಾ ಅವರು ದಯಪಾಲಿಸಿ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.
About The Author
Discover more from JANADHWANI NEWS
Subscribe to get the latest posts sent to your email.
