January 29, 2026
IMG-20260126-WA0346.jpg

ನಾಯಕನಹಟ್ಟಿ:
ಐತಿಹಾಸಿಕ ಪ್ರಸಿದ್ಧ ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಯ ದೊಡ್ಡ ರಥೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಶಿಸ್ತುಬದ್ಧವಾಗಿ ನಡೆಸುವಂತೆ ಯೋಜನೆ, ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ನಾಯಕನಹಟ್ಟಿಯ ಒಳಮಠದ ಆವರಣದಲ್ಲಿ ನಡೆದ ಜಾತ್ರಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಯಾವುದೇ ಸಣ್ಣ ಲೋಪದೋಷಗಳಿಗೂ ಅವಕಾಶ ನೀಡಬಾರದು ಎಂದು ಎಚ್ಚರಿಸಿದರು. ಭಕ್ತರಿಗೆ ಕುಡಿಯುವ ನೀರು, ಸ್ವಚ್ಛತೆ, ತುರ್ತು ವೈದ್ಯಕೀಯ ಸೇವೆಗಳು ಸಮರ್ಪಕವಾಗಿ ಲಭ್ಯವಾಗುವಂತೆ ಎಲ್ಲಾ ಇಲಾಖೆಗಳಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಲು ಸೂಚಿಸಿದರು.ಶಾಸಕ ಎನ್.ವೈ.ಗೋಪಾಲಕೃಷ್ಣ ಭರವಸೆ
ಮೊಳಕಾಲ್ಮುರು ಕ್ಷೇತ್ರದ ಶಾಸಕ ಎನ್.ವೈ.ಗೋಪಾಲಕೃಷ್ಣ ಮಾತನಾಡಿ, ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಐತಿಹಾಸಿಕ ಜಾತ್ರೆಯನ್ನು ಯಶಸ್ವಿಯಾಗಿ ನಡೆಸಲು ಅಗತ್ಯವಿರುವ ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ 10 ಲಕ್ಷ ರೂಪಾಯಿ ಧನಸಹಾಯ ನೀಡುವುದಾಗಿ ಘೋಷಿಸಿದ ಅವರು, ಸರ್ಕಾರಿ ಅನುದಾನ ವಿಳಂಬವಾದರೆ ವೈಯಕ್ತಿಕವಾಗಿಯಾದರೂ ಈ ಮೊತ್ತವನ್ನು ಭರಿಸುವುದಾಗಿ ಸ್ಪಷ್ಟಪಡಿಸಿದರು.ಬ್ಯಾನರ್‌ಗಳಿಗೆ ಕಡಿವಾಣ
ಜಾತ್ರೆಯ ಹಿನ್ನೆಲೆ ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಬ್ಯಾನರ್ ಹಾಗೂ ಪೋಸ್ಟರ್ ಅಳವಡಿಸುವುದನ್ನು ತಡೆಯಲು ಪಟ್ಟಣ ಪಂಚಾಯಿತಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಯಿತು. ಮಾರ್ಚ್ ತಿಂಗಳ ಬಿಸಿಲನ್ನು ಗಮನದಲ್ಲಿಟ್ಟುಕೊಂಡು ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ಮೈಸೂರು ದಸರಾ ಮಾದರಿ ದೀಪಾಲಂಕಾರ
ಜಾತ್ರೆಗೆ ವಿಶೇಷ ಮೆರುಗು ನೀಡುವ ಉದ್ದೇಶದಿಂದ ಈ ಬಾರಿ ಮೈಸೂರು ದಸರಾ ಮಾದರಿಯಲ್ಲಿ ದೇವಸ್ಥಾನದ ಮುಖ್ಯ ದ್ವಾರದಿಂದ ರಥ ಬೀದಿವರೆಗೆ ರಸ್ತೆ ಎರಡೂ ಬದಿಗಳಲ್ಲಿ ಆಕರ್ಷಕ ದೀಪಾಲಂಕಾರ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು. ಈ ಸಂಬಂಧ ದೇವಸ್ಥಾನ ಮಂಡಳಿ ಹಾಗೂ ಬೆಸ್ಕಾಂ ಅಧಿಕಾರಿಗಳು ಚರ್ಚಿಸಿ ಯೋಜನೆ ರೂಪಿಸುವಂತೆ ಸೂಚಿಸಿದರು.
ಭದ್ರತೆ ಹೆಚ್ಚಳ – ಪ್ರಾಣಿಬಲಿ ನಿಷೇಧ
ಜಾತ್ರಾ ಆವರಣದಲ್ಲಿ ಪ್ರಾಣಿಬಲಿ ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಲಾಯಿತು.
ಭಕ್ತರ ಸುರಕ್ಷತೆಗಾಗಿ ಹೆಚ್ಚಿನ ಸಂಖ್ಯೆಯ ಕಾಯಂ ಸಿಸಿಟಿವಿ ಕ್ಯಾಮೆರಾಗಳ ಜೊತೆಗೆ 40–50 ತಾತ್ಕಾಲಿಕ ಕ್ಯಾಮೆರಾಗಳನ್ನು ಅಳವಡಿಸಿ ಪೊಲೀಸ್ ನಿಯಂತ್ರಣ ಕೊಠಡಿಯಿಂದ ನಿಗಾ ವಹಿಸಲು ಸೂಚನೆ ನೀಡಲಾಯಿತು.
ಅಕ್ರಮ ಮದ್ಯ ಮಾರಾಟಕ್ಕೆ ತಡೆ
ಜಾತ್ರೆಯ ವೇಳೆ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲು ಅಬಕಾರಿ ಇಲಾಖೆಗೆ ತಾಕೀತು ಮಾಡಲಾಯಿತು.
ಲೋಕೋಪಯೋಗಿ ಇಲಾಖೆ ರಸ್ತೆ ಗುಂಡಿಗಳನ್ನು ಮುಚ್ಚಿ ರಥ ಸಾಗುವ ಹಾದಿಯನ್ನು ಸರಿಪಡಿಸಬೇಕು. ಕೆಎಸ್‌ಆರ್‌ಟಿಸಿ ವತಿಯಿಂದ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಸೂಚಿಸಲಾಯಿತು. ತಿರುಪತಿ ಹಾಗೂ ಮಂತ್ರಾಲಯ ಮಾದರಿಯಲ್ಲಿ ಸರ್ಕ್ಯುಲರ್ ಕ್ಯೂ ಲೈನ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ತಿಳಿಸಲಾಯಿತು.
ಮುಕ್ತಿ ಬಾವುಟ ಹರಾಜು – ಬಾಕಿ ಹಣ ವಸೂಲಿ
ಕಳೆದ ಎರಡು ವರ್ಷಗಳ ಹಿಂದೆ ಮುಕ್ತಿ ಬಾವುಟ ಪಡೆದವರು 12 ಲಕ್ಷ ರೂಪಾಯಿ ನಗದು ಪಾವತಿಸಿದ್ದು, ಉಳಿದ 5 ಲಕ್ಷ ರೂಪಾಯಿ ಬಾಕಿಯನ್ನು ಜಾತ್ರೆ ಆರಂಭದೊಳಗೆ ವಸೂಲಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.
ಸಭೆಯಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಚಿತ್ರದುರ್ಗ ಶಾಸಕ ಕೆ.ಎಸ್.ವೀರೇಂದ್ರ ಪಪ್ಪಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಹಲವು ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading