ನಾಯಕನಹಟ್ಟಿ: ರಾಜ್ಯೋತ್ಸವದ ಹೆಸರಿನಲ್ಲಿ ವರ್ತಕರು, ಅಧಿಕಾರಿಗಳು ಹಾಗೂ ಸಾರ್ವಜನಿಕರಿಂದ ಬಲವಂತವಾಗಿ ಹಣ ವಸೂಲಿ ಮಾಡುತ್ತಿರುವವರ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಹೋಬಳಿ ಅಧ್ಯಕ್ಷ ಸಂತೋಷ್ ಅವರು ನಾಯಕನಹಟ್ಟಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಜಿ. ಪಾಂಡುರಂಗಪ್ಪ ಅವರಿಗೆ ಮನವಿ ಸಲ್ಲಿಸಿದರು.
ನಾಯಕನಹಟ್ಟಿ ಹೋಬಳಿ ವ್ಯಾಪ್ತಿಯಲ್ಲಿ ರಾಜ್ಯೋತ್ಸವ ಆಚರಣೆಯ ಹೆಸರಿನಲ್ಲಿ ಕೆಲವರು ಅಂಗಡಿ–ಮುಂಗಟ್ಟುಗಳ ವರ್ತಕರು, ಅಧಿಕಾರಿಗಳು ಹಾಗೂ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿರುವ ಕುರಿತು ದೂರುಗಳು ಕೇಳಿಬರುತ್ತಿವೆ. ಹಣ ನೀಡುವಂತೆ ಒತ್ತಾಯಿಸುವುದು, ಬೆದರಿಕೆ ಹಾಕುವುದು ಅಥವಾ ಒತ್ತಡ ಹೇರುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ರಾಜ್ಯೋತ್ಸವದಂತಹ ಮಹತ್ವದ ಕಾರ್ಯಕ್ರಮಗಳನ್ನು ಸ್ವಯಂಪ್ರೇರಿತವಾಗಿ ಹಾಗೂ ಗೌರವಯುತವಾಗಿ ಆಚರಿಸಬೇಕೇ ಹೊರತು, ಯಾವುದೇ ವ್ಯಕ್ತಿ ಅಥವಾ ಸಂಘಟನೆಗಳು ವರ್ತಕರು, ಅಧಿಕಾರಿಗಳು ಹಾಗೂ ಸಾರ್ವಜನಿಕರನ್ನು ಒತ್ತಾಯಿಸಿ ಹಣ ಸಂಗ್ರಹಿಸುವಂತಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಸೂಕ್ತ ತನಿಖೆ ನಡೆಸಿ, ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬೇಕು ಎಂದು ಮನವಿ ಮಾಡಲಾಗಿದೆ.
ಇದೇ ವೇಳೆ, ಚಳ್ಳಕೆರೆ ನಗರದ ಅರಮನೆ ಹೋಟೆಲ್‌ನಲ್ಲಿ ರಾಜ್ಯೋತ್ಸವದ ಹೆಸರಿನಲ್ಲಿ ಹಣ ನೀಡುವಂತೆ ಒತ್ತಾಯಿಸಿದ ಘಟನೆ ನಡೆದಿದ್ದು, ಹಣ ನೀಡದ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕರಿಗೆ ಬೆದರಿಕೆ ಹಾಕಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಕುರಿತು ಹೋಟೆಲ್ ಮಾಲೀಕರು ಚಳ್ಳಕೆರೆ ತಹಸೀಲ್ದಾರ್ ಅವರಿಗೆ ಲಿಖಿತ ದೂರು ನೀಡಿರುವುದಾಗಿ ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ರಾಜ್ಯೋತ್ಸವ ಆಚರಣೆಗೆ ನೆರವು ನೀಡಲು ಇಚ್ಛಿಸುವವರು ಸ್ವಯಂಪ್ರೇರಿತವಾಗಿ ನೀಡುವ ಸಹಾಯದಿಂದ ಕಾರ್ಯಕ್ರಮ ಆಯೋಜಿಸಬೇಕು. ಬಲವಂತ, ಬೆದರಿಕೆ ಅಥವಾ ಒತ್ತಡದ ಮೂಲಕ ಹಣ ವಸೂಲಿ ಮಾಡುವುದನ್ನು ತಡೆಯಲು ಪೊಲೀಸ್ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂತೋಷ್ ಆಗ್ರಹಿಸಿದರು.
ರಾಜ್ಯೋತ್ಸವದ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿರುವ ಆರೋಪಗಳ ಕುರಿತು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ, ಘಟನೆಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರು ಕಂಡುಬಂದಲ್ಲಿ ಕಾನೂನು ಕ್ರಮ ಜರುಗಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
About The Author
Discover more from JANADHWANI NEWS
Subscribe to get the latest posts sent to your email.