November 26, 2026
IMG-20261126-WA0344



ಪಾವಗಡ: ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವ ಉದ್ದೇಶದಿಂದ ಶ್ರೀ ರಾಮಕೃಷ್ಣ ಸೇವಾಶ್ರಮದ ವತಿಯಿಂದ ಸಂವಿಧಾನ ದಿನಾಚರಣೆಯ ಅಂಗವಾಗಿ ಪಾವಗಡ ತಾಲೂಕಿನ ಮೂರು ಸರ್ಕಾರಿ ಶಾಲೆಗಳಿಗೆ ಡೆಸ್ಕ್‌ಗಳನ್ನು ವಿತರಿಸಲಾಯಿತು.
ಬೆಂಗಳೂರು ಮೂಲದ ಉಪ್ಕೃತಿ ಸ್ವಯಂಸೇವಾ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ನವೆಂಬರ್ 26ರಂದು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪಾವಗಡದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆ (ಬಾಲಕರು) ಆವರಣದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆದ ಸರಳ ಹಾಗೂ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕ ಮಾಧವರೆಡ್ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಶ್ರೀ ರಾಮಕೃಷ್ಣ ಸೇವಾಶ್ರಮದ ಪೂಜ್ಯ ಸ್ವಾಮಿ ಜಪಾನಂದಜೀ ಮಹಾರಾಜರು ದಿವ್ಯ ಸಾನ್ನಿಧ್ಯ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಉಪನಿರ್ದೇಶಕ ಮಾಧವರೆಡ್ಡಿ ಅವರು, ಪಾವಗಡದಂತಹ ಹಿಂದುಳಿದ ಪ್ರದೇಶಗಳಲ್ಲಿ ಸರ್ಕಾರಿ ಶಾಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಸ್ವಾಮಿ ಜಪಾನಂದಜೀ ಮಹಾರಾಜರು ಹಲವು ವರ್ಷಗಳಿಂದ ನಿರಂತರವಾಗಿ ಸಹಕಾರ ನೀಡುತ್ತಾ ಬಂದಿದ್ದಾರೆ. ಶಾಲೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಡಿಜಿಟಲ್ ಬೋರ್ಡ್, ಪ್ರತಿವರ್ಷ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳು, ಶಾಲಾ ಬ್ಯಾಗ್‌ಗಳು ಹಾಗೂ ಅಗತ್ಯ ಶೈಕ್ಷಣಿಕ ಪರಿಕರಗಳನ್ನು ಒದಗಿಸುತ್ತಿರುವುದು ಶ್ಲಾಘನೀಯ. ಶಿಕ್ಷಣ ಇಲಾಖೆಯ ಪರವಾಗಿ ಸ್ವಾಮೀಜಿಯವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ನಂತರ ಆಶೀರ್ವಚನ ನೀಡಿದ ಪೂಜ್ಯ ಸ್ವಾಮಿ ಜಪಾನಂದಜೀ ಮಹಾರಾಜರು, ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳ ಬಗ್ಗೆ ಕೆಲವರಲ್ಲಿ ಕೀಳರಿಮೆಯ ಭಾವನೆ ಇದೆ. ಆದರೆ ಇಲ್ಲಿನ ಮಕ್ಕಳ ಶಿಸ್ತು, ಶಿಕ್ಷಕರಿಗೆ ನೀಡುವ ಗೌರವ ಹಾಗೂ ಲಭ್ಯವಿರುವ ಸೌಲಭ್ಯಗಳಲ್ಲಿಯೇ ಸಂತೃಪ್ತಿಯಿಂದ ಶಿಕ್ಷಣ ಪಡೆಯುತ್ತಿರುವುದನ್ನು ಗಮನಿಸಿದರೆ, ಇವರು ಯಾವುದೇ ಮಹಾನಗರದ ಮಕ್ಕಳಿಗೂ ಕಡಿಮೆಯಿಲ್ಲ. ಇಂತಹ ಮಕ್ಕಳೇ ಭವಿಷ್ಯದ ಭಾರತವನ್ನು ರೂಪಿಸುವ ಶಕ್ತಿಯಾಗಿದ್ದಾರೆ ಎಂದು ಹೇಳಿದರು.
ಶಿಕ್ಷಕರು ನಿಷ್ಠೆ, ಶ್ರದ್ಧೆ ಮತ್ತು ಪ್ರೀತಿಯಿಂದ ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಸ್ಕೃತಿ ಹಾಗೂ ಸಂಪ್ರದಾಯಗಳ ಮೌಲ್ಯಗಳನ್ನು ಕಲಿಸುತ್ತಿರುವುದು ಅಭಿನಂದನೀಯ. ಶಿಕ್ಷಕ ವೃಂದದ ಸೇವೆ ಶ್ಲಾಘನೀಯವಾಗಿದ್ದು, ಸಮಾಜದ ಪ್ರತಿಯೊಬ್ಬರೂ ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಕೈಲಾದ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾದ ಮಾಧವರೆಡ್ಡಿ ಅವರ ಮೂಲಕ ಶಾಲೆಗೆ ಪೀಠೋಪಕರಣಗಳನ್ನು ಅಧಿಕೃತವಾಗಿ ಹಸ್ತಾಂತರಿಸಲಾಯಿತು.
ಈ ಯೋಜನೆಯಡಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ, ನಾಗಲಮಡಿಕೆ; ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ, ಉಪ್ಪಾರಹಳ್ಳಿ ಹಾಗೂ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆ (ಬಾಲಕರು), ಪಾವಗಡ ಶಾಲೆಗಳಿಗೆ ಡೆಸ್ಕ್‌ಗಳನ್ನು ವಿತರಿಸಲಾಯಿತು.
ಆಯಾ ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಸೇವಾಶ್ರಮದ ಕಾರ್ಯವನ್ನು ಕೊಂಡಾಡಿದರು. ಈ ಯೋಜನೆಗೆ ಪ್ರಾಯೋಜಕತ್ವ ನೀಡಿದ ಬೆಂಗಳೂರಿನ ಉಪ್ಕೃತಿ ಸ್ವಯಂಸೇವಾ ಸಂಸ್ಥೆಗೆ ಶ್ರೀ ರಾಮಕೃಷ್ಣ ಸೇವಾಶ್ರಮದ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು. ಮುಂದಿನ ದಿನಗಳಲ್ಲಿಯೂ ಇಂತಹ ಸಮಾಜಮುಖಿ ಶೈಕ್ಷಣಿಕ ಸೇವಾ ಕಾರ್ಯಗಳಿಗೆ ಸಹಕಾರ ಮುಂದುವರಿಸುವಂತೆ ಆಶಯ ವ್ಯಕ್ತಪಡಿಸಲಾಯಿತು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading