ಚಿತ್ರದುರ್ಗ ಜ.29:
ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಸರ್ಕಾರಿ ನೌಕರರ ಪಾತ್ರ ಅತ್ಯಂತ ಮಹತ್ವದಾಗಿದ್ದು, ಸರ್ಕಾರಿ ನೌಕರರು ಕೆಲಸದ ಒತ್ತಡದ ನಡುವೆಯೂ ಆರೋಗ್ಯದ ಕಡೆಗೂ ಹೆಚ್ಚಿನ ಗಮನಹರಿಸಬೇಕು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಪಿ. ರಘು ಅವರು ನೌಕರರಿಗೆ ಸಲಹೆ ನೀಡಿದರು.
ನಗರದ ವೀರ ವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಸರ್ಕಾರದ ಬೆನ್ನೆಲುಬಾಗಿ ಕೆಲಸ ಮಾಡುವ ನೌಕರರ ಮಾನಸಿಕ ಉಲ್ಲಾಸಕ್ಕಾಗಿ ಕ್ರೀಡಾಕೂಟಗಳು ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳು ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು.
ಪ್ರಸ್ತುತ ದಿನಗಳಲ್ಲಿ ಸರ್ಕಾರಿ ನೌಕರರು ಸತತ ಕೆಲಸದ ಒತ್ತಡದಿಂದಾಗಿ 30-40 ವರ್ಷಕ್ಕೇ ರಕ್ತದೊತ್ತಡ, ಮಧುಮೇಹದಂತಹ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ನೌಕರರು ತಮ್ಮ ಸೇವಾವಧಿಯಲ್ಲಿ ಆರೋಗ್ಯ ನಿರ್ಲಕ್ಷಿಸಿದರೆ, ನಿವೃತ್ತಿಯ ನಂತರ ಸಿಗುವ ಸೌಲಭ್ಯ ಅನುಭವಿಸಲು ದೈಹಿಕ ಶಕ್ತಿ ಇರುವುದಿಲ್ಲ. ಆದ್ದರಿಂದ ಕೆಲಸದ ಜೊತೆಗೆ ದೈಹಿಕ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು ಎಂದು ಕಿವಿಮಾತು ಹೇಳಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಿರುವ ಈ ಕ್ರೀಡಾಕೂಟವು ಕ್ರೀಡಾಂಗಣದಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದೆ. ಕಾರ್ಯಕ್ರಮದ ಅಚ್ಚುಕಟ್ಟಾದ ಸಂಘಟನೆಗೆ ಪಿ. ರಘು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಆರ್.ಶಿವಣ್ಣ ಮಾತನಾಡಿ, ಸರ್ಕಾರಿ ನೌಕರರು ಸರ್ಕಾರದ ವಿವಿಧ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಜೊತೆಗೆ, ಪಾರದರ್ಶಕ ಆಡಳಿತ ನೀಡುವ ಮೂಲಕ ಸರ್ಕಾರಕ್ಕೆ ಉತ್ತಮ ಹೆಸರು ತರಬೇಕು ಎಂದು ತಿಳಿಸಿದರು.
ಸದೃಢ ದೇಹದಲ್ಲಿ ಮಾತ್ರ ಸದೃಢ ಮನಸ್ಸು ನೆಲೆಸಲು ಸಾಧ್ಯವಿರುವುದರಿಂದ, ಕೆಲಸದ ಒತ್ತಡದ ನಡುವೆ ನೌಕರರು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಅತ್ಯಗತ್ಯ. ಸರ್ಕಾರ ಜಾರಿಗೆ ತಂದಿರುವ “ಆರೋಗ್ಯ ಸಂಜೀವಿನಿ” ಯೋಜನೆಯು ನೌಕರರ ಮತ್ತು ಅವರ ಕುಟುಂಬದ ರಕ್ಷಣೆಗೆ ಪೂರಕವಾಗಿದೆ. ಹಾಗೆಯೇ ರಾಜ್ಯ ಸರ್ಕಾರವು 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುವ ಮೂಲಕ ನೌಕರರ ಆರ್ಥಿಕ ಭದ್ರತೆಗೆ ಒತ್ತು ನೀಡಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ತಾವು ಕೂಡ ಪ್ರಾಥಮಿಕ ಶಾಲಾ ಶಿಕ್ಷಕರಾಗಿ 22 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿರುವುದನ್ನು ನೆನಪಿಸಿಕೊಂಡ ಶಿವಣ್ಣನವರು, ನೌಕರರ ಸಮಸ್ಯೆಗಳು ಮತ್ತು ಸವಾಲುಗಳ ಬಗ್ಗೆ ತಮಗೆ ನಿಕಟ ಅರಿವಿದೆ. ಸರ್ಕಾರ ನೀಡುವ ಸೌಲಭ್ಯಗಳನ್ನು ಪಡೆಯುವ ನೌಕರರು, ಸಾರ್ವಜನಿಕರಿಗೆ ಸೇವೆ ನೀಡುವಾಗ ಅಷ್ಟೇ ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಹೊಂದಿರಬೇಕು. ಸಾರ್ವಜನಿಕ ವಲಯದಲ್ಲಿ ಸರ್ಕಾರದ ವರ್ಚಸ್ಸು ಹೆಚ್ಚಿಸುವ ಜವಾಬ್ದಾರಿ ನೌಕರರ ಮೇಲಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಮಾತನಾಡಿ, ಸರ್ಕಾರಿ ನೌಕರರು ಕೇವಲ ಕಚೇರಿ ಕೆಲಸಕ್ಕಷ್ಟೇ ಸೀಮಿತವಾಗದೆ, ತಮ್ಮ ದೈಹಿಕ ಮತ್ತು ಮಾನಸಿಕ ಸದೃಢತೆಗಾಗಿ ಕ್ರೀಡೆ ಹಾಗೂ ಯೋಗದಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅತ್ಯಗತ್ಯ ಎಂದು ತಿಳಿಸಿದರು.
ಜಿಲ್ಲೆಯ ಒಟ್ಟು 15 ಸಾವಿರ ಸರ್ಕಾರಿ ನೌಕರರಲ್ಲಿ ಸುಮಾರು 2 ಸಾವಿರಕ್ಕೂ ಹೆಚ್ಚು ಮಂದಿ ಈ ಕ್ರೀಡಾಕೂಟದಲ್ಲಿ ಅತ್ಯಂತ ಉತ್ಸಾಹದಿಂದ ಭಾಗವಹಿಸಿರುವುದು ಶ್ಲಾಘನೀಯ. ಮುಂದಿನ ವರ್ಷಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಕೂಟಕ್ಕೆ ನೋಂದಣಿಯಾಗಲಿ ಎಂದು ತಿಳಿಸಿದ ಅವರು, ನೌಕರರು ಬಿಡುವಿಲ್ಲದ ಕೆಲಸದ ನಡುವೆಯೂ ಪ್ರತಿದಿನ ನಡಿಗೆ, ಯೋಗ ಮತ್ತು ಧ್ಯಾನ ಮಾಡುವುದನ್ನು ರೂಢಿಸಿಕೊಳ್ಳಬೇಕು. ಇದರಿಂದ ಕೆಲಸದ ಒತ್ತಡ ಕಡಿಮೆಯಾಗಿ, ಉತ್ತಮ ಸೇವೆ ನೀಡಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಭವನಕ್ಕೆ ಜಮೀನು ನಿಗದಿಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಆದೇಶ ಹೊರಬೀಳಲಿದೆ ಎಂದು ಜಿಲ್ಲಾಧ್ಯಕ್ಷರು ತಿಳಿಸಿದ್ದು, ಇದು ನೌಕರರ ಕುಟುಂಬದ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ ಅವರು, ಮುಂದಿನ ದಿನಗಳಲ್ಲಿಯೂ ನೌಕರರ ಸಂಘ ಅತ್ಯುತ್ತಮ ಕಾರ್ಯಗಳನ್ನು ಮಾಡುವ ಜತೆಗೆ ತಾವುಗಳ ಕಾರ್ಯನಿರ್ವಹಿಸುವ ಇಲಾಖೆಗಳಿಗೆ ಉತ್ತಮ ಹೆಸರು ತನ್ನಿ ಎಂದು ಹೇಳಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್ ಮಾತನಾಡಿ, ಸರ್ಕಾರಿ ನೌಕರರು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವುದರ ಜೊತೆಗೆ, ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು. ಯಾವುದೇ ಸರ್ಕಾರ ಬಂದರೂ ಯೋಜನೆಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನೌಕರರದ್ದಾಗಿರುತ್ತದೆ. ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವ ಮೂಲಕ ಸರ್ಕಾರದ ಗೌರವ ಹೆಚ್ಚಿಸುವ ಕೆಲಸ ನೌಕರರಿಂದ ಆಗಲಿ ಎಂದು ತಿಳಿಸಿದರು.
ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಗರದ ವಿವಿಧ ಭಾಗಗಳಲ್ಲಿ ಸುಮಾರು 8 ರಿಂದ 10 ಪಾರ್ಕ್‍ಗಳನ್ನು ಅಭಿವೃದ್ಧಿಪಡಿಸಲಾಗಿದೆ. ಅಲ್ಲಿರುವ ವಾಕಿಂಗ್ ಪಾತ್ ಮತ್ತು ಓಪನ್ ಜಿಮ್‍ಗಳನ್ನು ನೌಕರರು ಮತ್ತು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಮಟ್ಟದ ಕ್ರಿಡಾಕೂಟ ಸಮಾರಂಭದ ಉದ್ಘಾಟನೆ ನೆರವೇರಿಸಿ, ಕ್ರೀಡಾಕೂಟ ಯಶಸ್ವಿಯಾಗಲಿ ಎಂದು ಶುಭ ಕೋರಿದರು. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯರ್ಶಿ ಡಾ.ರಂಗಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಾಲತೇಶ್ ಮುದ್ದಜ್ಜಿ, ಸೇರಿದಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಹಾಗೂ ತಾಲ್ಲೂಕು ಶಾಖೆಯ ಅಧ್ಯಕ್ಷರುಗಳು, ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳು, ಹಾಗೂ ಜಿಲ್ಲೆಯ ವಿವಿಧ ಇಲಾಖೆಯ ಸರ್ಕಾರಿ ನೌಕರರು ಇದ್ದರು.
About The Author
Discover more from JANADHWANI NEWS
Subscribe to get the latest posts sent to your email.